ಸರ್ಕಾರ ಉರುಳಿಸುವ ಯಾವುದೇ ಪ್ರಯತ್ನ ಬಿಜೆಪಿ ಮಾಡುವುದಿಲ್ಲ: ಬಿ.ಎಸ್.ಯಡಿಯೂರಪ್ಪ

Update: 2018-10-12 16:55 GMT

ಶಿವಮೊಗ್ಗ, ಆ. 12: ರಾಜ್ಯ ಸರ್ಕಾರ ಉರುಳಿಸುವ ಯಾವುದೇ ಪ್ರಯತ್ನವನ್ನು ಬಿಜೆಪಿ ನಡೆಸುವುದಿಲ್ಲ. ಅದರ ಆಂತರಿಕ ಭಿನ್ನಾಭಿಪ್ರಾಯದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. 

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸ್ಥಾನಕ್ಕೆ ಮಹೇಶ್ವರ್ ರವರು ನೀಡಿರುವ ರಾಜೀನಾಮೆ ಕುರಿತಂತೆ, ಇನ್ನೊಂದು ತಿಂಗಳಲ್ಲಿ ಸಮ್ಮಿಶ್ರ ಸರ್ಕಾರ ಪತನಗೊಳ್ಳಲಿದೆ. ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂಬ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರವರ ಹೇಳಿಕೆಗೆ ಬಿ.ಎಸ್.ವೈ. ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ. 

ಶುಕ್ರವಾರ ನಗರದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬಿಜೆಪಿಗೆ ಜನಹಿತ ಮುಖ್ಯ. ಈ ಕಾರಣದಿಂದ ಪ್ರತಿಪಕ್ಷ ಸ್ಥಾನದಲ್ಲಿ ಕುಳಿತು ರಚನಾತ್ಮಕ ಕೆಲಸ ಮಾಡಲಿದೆ. ಸಚಿವ ಮಹೇಶ್ ರಾಜೀನಾಮೆ ಕುರಿತಂತೆ ತಾವು ಯಾವುದೇ ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ ಎಂದರು. 

ಕಾಂಗ್ರೆಸ್-ಜೆಡಿಎಸ್ ನಡುವಣ ಹೊಂದಾಣಿಕೆ ಕೊರತೆ ಕಂಡುಬರುತ್ತಿದೆ. ಒಂದು ವೇಳೆ ಸಮ್ಮಿಶ್ರ ಸರ್ಕಾರ ತಾನಾಗೇ ಉರುಳಿ ಬಿದ್ದಲ್ಲಿ ಪರಿಸ್ಥಿತಿಯ ಅವಲೋಕನೆ ನಡೆಸಿ, ಬಿಜೆಪಿ ಸರ್ಕಾರ ರಚಿಸುವ ಪ್ರಯತ್ನ ಮಾಡುತ್ತದೆ ಎಂದು ಹೇಳಿದ್ದಾರೆ. 

ಗೊಂದಲವಿಲ್ಲ: ಮಂಡ್ಯ ಲೋಕಸಭಾ ಕ್ಷೇತ್ರ ಹಾಗೂ ಜಮಖಂಡಿ ವಿಧಾನಸಭಾ ಕ್ಷೇತ್ರಗಳ ಪಕ್ಷದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲ, ಭಿನ್ನಾಭಿಪ್ರಾಯವಿಲ್ಲ. ಆದರೆ ಮಾಧ್ಯಮಗಳಲ್ಲಿ ಮಾತ್ರ ಗೊಂದಲವಿದೆ ಎಂದು ಬಿಂಬಿಸಲಾಗುತ್ತಿದೆ. ಇದರಲ್ಲಿ ಯಾವುದೇ ಹುರುಳಿಲ್ಲ ಎಂದರು. 

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್‍ನಿಂದ ಯಾರೇ ಅಭ್ಯರ್ಥಿಯಾಗಿ ಕಣಕ್ಕಿಳಿದರೂ ಬಿಜೆಪಿ ಗೆಲುವು ಖಚಿತವಾಗಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ತಾವು ಪಡೆದ ಮತಗಳಿಗಿಂತಲೂ ಹೆಚ್ಚು ಮತ ಪಡೆದು ಬಿ.ವೈ.ರಾಘವೇಂದ್ರ ಆಯ್ಕೆಯಾಗಲಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News