ರಾಹುಲ್ ಗಾಂಧಿಯವರನ್ನು ಭೇಟಿಯಾದ ಸಿಎಂ ಕುಮಾರಸ್ವಾಮಿ

Update: 2018-10-13 13:42 GMT

ಬೆಂಗಳೂರು, ಅ. 13: ರಫೇಲ್ ಯುದ್ಧ ವಿಮಾನ ಖರೀದಿ ಹಗರಣ ಸಂಬಂಧ ಎಚ್‌ಎಎಲ್ ನೌಕರರೊಂದಿಗಿನ ಸಂವಾದ ಸಭೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ.

ಶನಿವಾರ ದಿಲ್ಲಿಯಿಂದ ಇಲ್ಲಿನ ಕುಮಾರಕೃಪಾ ಅತಿಥಿ ಗೃಹಕ್ಕೆ ಆಗಮಿಸಿದ ರಾಹುಲ್ ಗಾಂಧಿಯವರನ್ನು ಭೇಟಿಯಾದ ಕುಮಾರಸ್ವಾಮಿ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದ ಆಡಳಿತ ವೈಖರಿಯ ಬಗ್ಗೆ ಮಾಹಿತಿ ನೀಡಿದರು. ಅಲ್ಲದೆ, ಉಭಯ ನಾಯಕರು, ಉಪ ಚುನಾವಣೆ ಬಗ್ಗೆಯೂ ಗಂಭೀರ ಚರ್ಚೆ ನಡೆಸಿದ್ದಾರೆಂದು ಗೊತ್ತಾಗಿದೆ.

ಉಪ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಮೈತ್ರಿ ಪಕ್ಷಗಳ ಕಾರ್ಯತಂತ್ರ, ಕ್ಷೇತ್ರಗಳ ಹಂಚಿಕೆ ಹಾಗೂ ಸಚಿವ ಎನ್.ಮಹೇಶ್ ದಿಢೀರ್ ರಾಜೀನಾಮೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚಿಸಿದ್ದು, ಉಪ ಚುನಾವಣೆ ಕಾರ್ಯತಂತ್ರದ ಬಗ್ಗೆ ಕೆಲ ಸಲಹೆ-ಸೂಚನೆಗಳನ್ನು ನೀಡಿದ್ದಾರೆಂದು ಹೇಳಲಾಗಿದೆ.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News