ಉಪ ಚುನಾವಣೆ : ನಾಳೆಯೇ ನಾಮಪತ್ರ ಸಲ್ಲಿಕೆ ಸಾಧ್ಯತೆ
ಬೆಂಗಳೂರು, ಅ.14: ಮೂರು ಲೋಕಸಭೆ ಮತ್ತು ಎರಡು ವಿಧಾನಸಭೆ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಅ.16 ಕೊನೆಯ ದಿನವಾಗಿದ್ದು, ಆಡಳಿತಾರೂಢ ಕಾಂಗ್ರೆಸ್-ಜೆಡಿಎಸ್ ಸೇರಿ ವಿಪಕ್ಷ ಬಿಜೆಪಿಗೆ ಅಭ್ಯರ್ಥಿಗಳ ಆಯ್ಕೆ ತಲೆನೋವಾಗಿ ಪರಿಗಣಿಸಿದ್ದು ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ನಾಳೆಯೆ ನಾಮಪತ್ರ ಸಲ್ಲಿಸುವ ಸಾಧ್ಯತೆಗಳಿವೆ.
ಈಗಾಗಲೇ ಎರಡು ವಿಧಾನಸಭಾ ಕ್ಷೇತ್ರ ಹಾಗೂ ಮೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ನಾಳೆ ಆಯಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸಲು ಬಿಜೆಪಿ ಅಭ್ಯರ್ಥಿಗಳು ಸಿದ್ಧತೆ ನಡೆಸಿದ್ದಾರೆ. ಈ ಮಧ್ಯೆ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಗಳು ನಾಳೆ ನಾಮಪತ್ರ ಸಲ್ಲಿಸಲಿದ್ದಾರೆಂದು ಗೊತ್ತಾಗಿದೆ.
ರಾಮನಗರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಅವರ ಪುತ್ರ ಚಂದ್ರಶೇಖರ್ ನಾಳೆಯೇ ನಾಮಪತ್ರ ಸಲ್ಲಿಸಲಿದ್ದಾರೆ. ಜಮಖಂಡಿ ಕ್ಷೇತ್ರವನ್ನು ಜೆಡಿಎಸ್ ಪಕ್ಷ ಕಾಂಗ್ರೆಸ್‌ಗೆ ಬಿಟ್ಟುಕೊಟ್ಟಿದೆ. ಮಾಜಿ ಸಚಿವ ಸಿದ್ದುನ್ಯಾಮೆಗೌಡರ ಪುತ್ರ ಆನಂದ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಶ್ರೀಕಾಂತ್ ಕುಲಕರ್ಣಿ ನಾಮಪತ್ರ ಸಲ್ಲಿಸಲಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ಪಕ್ಷ ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಎಲ್.ಆರ್.ಶಿವರಾಮೇಗೌಡ, ಬಿಜೆಪಿಯಿಂದ ಡಾ.ಸಿದ್ದರಾಮಯ್ಯ ಅಭ್ಯರ್ಥಿಯಾಗಿ ಈ ಕ್ಷೇತ್ರದಲ್ಲಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.
ಇನ್ನೂ ಬಳ್ಳಾರಿ ಲೋಕಸಭಾ (ಪರಿಶಿಷ್ಟ ಪಂಗಡ) ಕ್ಷೇತ್ರವನ್ನು ಜೆಡಿಎಸ್ ಪಕ್ಷ ಕಾಂಗ್ರೆಸ್‌ಗೆ ಬಿಟ್ಟುಕೊಟ್ಟಿದ್ದು, ಈ ಕ್ಷೇತ್ರದಲ್ಲೂ ಇದುವರೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ. ಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ, ವೆಂಕಟೇಶ್ ಪ್ರಸಾದ್, ನೆಟ್ಕಲ್ಲಪ್ಪ ಸೇರಿದಂತೆ ಹಲವರ ಹೆಸರುಗಳು ಪ್ರಸ್ತಾಪವಾಗುತ್ತಿದ್ದು, ನಾಳೆಯೊಳಗೆ ಅಧಿಕೃತ ಅಭ್ಯರ್ಥಿ ಘೋಷಣೆಯಾಗುವ ಸಾಧ್ಯತೆಗಳಿವೆ. ಬಿಜೆಪಿಯಿಂದ ಮಾಜಿ ಸಂಸದೆ ಜೆ.ಶಾಂತಾ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ. ರಾಘವೇಂದ್ರ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್- ಜೆಡಿಎಸ್ ಒಮ್ಮತದ ಅಭ್ಯರ್ಥಿಯಾಗಿ ಮಾಜಿ ಶಾಸಕ ಮಧು ಬಂಗಾರಪ್ಪನ್ನು ಕಣಕ್ಕಿಳಿಸಲು ಉದ್ದೇಶಿಸಿದ್ದು, ನಾಳೆ ಅವರು ನಾಮಪತ್ರ ಸಲ್ಲಿಸಲಿದ್ದಾರೆಂದು ಹೇಳಲಾಗುತ್ತಿದೆ.
‘ಕೈ’ ಉಸ್ತುವಾರಿಗಳ ನೇಮ: ಉಪಚುನಾವಣೆ ಹಿನ್ನೆಲೆಯಲ್ಲಿ ಮಂಡ್ಯಕ್ಕೆ ಕಾಂಗ್ರೆಸ್ ಪಕ್ಷದ ಉಸ್ತುವಾರಿಯನ್ನಾಗಿ ಸಚಿವ ಕೆ.ಜೆ.ಜಾರ್ಜ್, ಶಿವಮೊಗ್ಗಕ್ಕೆ ಸಚಿವ ಆರ್.ವಿ.ದೇಶಪಾಂಡೆ, ರಾಮನಗರ ಕ್ಷೇತ್ರಕ್ಕೆ ಸಂಸದ ಡಿ.ಕೆ.ಸುರೇಶ್ ಅವರನ್ನು ನೇಮಕ ಮಾಡಲಾಗಿದೆ.