ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ: ಉಗ್ರಪ್ಪ ಕಾಂಗ್ರೆಸ್ ಅಭ್ಯರ್ಥಿ

Update: 2018-10-15 12:41 GMT

ಬೆಂಗಳೂರು, ಅ.15: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಗೆ ತೆರೆ ಎಳೆದಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪಗೆ ಟಿಕೆಟ್ ನೀಡಿ ಆದೇಶ ಹೊರಡಿಸಿದ್ದಾರೆ.

ಬಳ್ಳಾರಿ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಕಳೆದ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎನ್.ವೈ.ಹನುಮಂತಪ್ಪ ಬಿಜೆಪಿ ಸೇರಿರುವುದರಿಂದ, ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ನಾಗೇಂದ್ರ ತಮ್ಮ ಸಹೋದರ ವೆಂಕಟೇಶ್‌ ಪ್ರಸಾದ್‌ಗೆ ಟಿಕೆಟ್ ಕೊಡಿಸಲು ಸಾಕಷ್ಟು ಪ್ರಯತ್ನಪಟ್ಟಿದ್ದರು. ಆದರೆ, ಅಂತಿಮವಾಗಿ ವಿ.ಎಸ್.ಉಗ್ರಪ್ಪಗೆ ಟಿಕೆಟ್ ಘೋಷಿಸುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಎಲ್ಲ ಗೊಂದಲಗಳಿಗೆ ತೆರೆ ಎಳೆದಿದೆ. ಅದೇ ರೀತಿ ಜಮಖಂಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಆನಂದ್ ಸಿದ್ದುನ್ಯಾಮಗೌಡ ಕಣಕ್ಕಿಳಿಯಲಿದ್ದಾರೆ.

ಬಿ ಫಾರಂ ವಿತರಣೆ: ಬಳ್ಳಾರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಉಗ್ರಪ್ಪ ಹಾಗೂ ಜಮಖಂಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆನಂದ್ ಸಿದ್ದುನ್ಯಾಮಗೌಡ ಅವರಿಗೆ ಸೋಮವಾರ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬಿ ಫಾರಂ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಉಗ್ರಪ್ಪ, ನನ್ನ ಮೇಲೆ ವಿಶ್ವಾಸವಿಟ್ಟು ಟಿಕೆಟ್ ನೀಡಿರುವ ಕಾಂಗ್ರೆಸ್ ಹೈಕಮಾಂಡ್, ಶಾಸಕಾಂಗ ಪಕ್ಷದ ನಾಯಕರು, ಕೆಪಿಸಿಸಿ ಅಧ್ಯಕ್ಷ, ಕಾರ್ಯಾಧ್ಯಕ್ಷ, ಉಪ ಮುಖ್ಯಮಂತ್ರಿ, ಬಳ್ಳಾರಿಯ ಎಲ್ಲ ಶಾಸಕರು, ನಾಯಕರು, ಕಾರ್ಯಕರ್ತರಿಗೆ ನಾನು ಋಣಿಯಾಗಿದ್ದೇನೆ ಎಂದರು.

ಬಳ್ಳಾರಿ ಜಿಲ್ಲೆ ಅಭಿವೃದ್ಧಿ ಹಾಗೂ ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ನಾನು ಶ್ರಮಿಸುತ್ತೇನೆ. ಜನತೆಯ ಆಶೀರ್ವಾದ ನನಗೆ ಸಿಗುತ್ತದೆ ಎಂಬ ವಿಶ್ವಾಸವಿದೆ. ಬಳ್ಳಾರಿಯಲ್ಲಿ ಲೂಟಿಯಾಗಿದ್ದ ಒಂದು ಲಕ್ಷ ಕೋಟಿ ರೂ.ಗಳ ಹೆಚ್ಚಿನ ಸಂಪತ್ತಿನ ಬಗ್ಗೆ ಲೋಕಾಯುಕ್ತರಿಗಿಂತ ಮುನ್ನ ಪಕ್ಷದ ಸತ್ಯಶೋಧನಾ ಸಮಿತಿಯ ಅಧ್ಯಕ್ಷನಾಗಿ ವರದಿ ನೀಡಿದೆ. ಆ ಮೂಲಕ ಇಲ್ಲಿನ ನೈಸರ್ಗಿಕ ಸಂಪತ್ತಿನ ಲೂಟಿಯನ್ನು ತಡೆಯಲು ಪ್ರಯತ್ನಿಸಿದ್ದೇನೆ ಎಂದು ಉಗ್ರಪ್ಪ ಹೇಳಿದರು.

ಅಕ್ರಮ ಗಣಿಗಾರಿಕೆ ತಡೆಯುವ ಮೂಲಕ ಆ ಭಾಗದ ಆದಿವಾಸಿಗಳ ಜೀವನ ಹಸನುಗೊಳಿಸಲು ಶ್ರಮಿಸಿದ್ದೇನೆ. ವಿಧಾನಸೌಧದ ಆವರಣದಲ್ಲಿ ವಾಲ್ಮೀಕಿ ಪುತ್ಥಳಿ, ತಪೋವನ, ಹಂಪಿ ಹಾಗೂ ಗುಲ್ಬರ್ಗ ವಿವಿಯಲ್ಲಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪನೆ, ವಾಲ್ಮೀಕಿ ಸಮಾಜದ ಮಠ ಸ್ಥಾಪನೆ, ಕಳೆದ ಸರಕಾರದಿಂದ ಮಠಕ್ಕೆ 5 ಕೋಟಿ ರೂ.ಗಳ ಅನುದಾನ ಒದಗಿಸಲು ಶ್ರಮಿಸಿದ್ದೇನೆ ಎಂದು ಅವರು ತಿಳಿಸಿದರು. ಕೇವಲ ಆದಿವಾಸಿಗಳಷ್ಟೇ ಅಲ್ಲ, ಆ ಭಾಗದ ಎಲ್ಲ ವರ್ಗದ ಜನರ ವಿಶ್ವಾಸ ಗಳಿಸುತ್ತೇನೆ. ಹೆಚ್ಚಿನ ಮತಗಳ ಅಂತರದಿಂದ ಜನ ನನ್ನನ್ನು ಗೆಲ್ಲಿಸಿ ಕಳುಹಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಉಗ್ರಪ್ಪ ಹೇಳಿದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್ ಮಾತನಾಡಿ, ಬಳ್ಳಾರಿಯಲ್ಲಿ ಆಗುತ್ತಿದ್ದ ಮೋಸವನ್ನು ಉಗ್ರಪ್ಪ ಬಯಲು ಮಾಡಿದ್ದರು. ರೆಡ್ಡಿ ಸಹೋದರರ ಅನಾಚಾರಗಳನ್ನು ಹೊರ ತಂದಿದ್ದರು. ಬಳ್ಳಾರಿಯ ಸಂಸದರು ರಾಜ್ಯದ ಪರವಾಗಿ ಧ್ವನಿ ಎತ್ತಲಿಲ್ಲ. ಕೇವಲ ಅಧಿಕಾರಕ್ಕೆ ಅಂಟಿಕೊಂಡು ಕೂತಿದ್ದರು ಎಂದು ಶ್ರೀರಾಮುಲು ವಿರುದ್ಧ ಕಿಡಿಗಾರಿದರು.

ಉಗ್ರಪ್ಪ ಉತ್ತಮ ವಾಗ್ಮಿ. ರಾಜ್ಯದ ಹಾಗೂ ಬಳ್ಳಾರಿ ಜಿಲ್ಲೆಯ ಹಿತವನ್ನು ಕಾಪಾಡುತ್ತಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಉಗ್ರಪ್ಪ ಹಾಗೂ ಜಮಖಂಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಆನಂದ್ ಸಿದ್ದುನ್ಯಾಮಗೌಡ ನಾಳೆ ನಾಮಪತ್ರ ಸಲ್ಲಿಕೆ ಮಾಡುತ್ತಾರೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News