ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ಪರ್ಧೆ: ದಿನೇಶ್‌ ಗುಂಡೂರಾವ್

Update: 2018-10-15 12:19 GMT

ಬೆಂಗಳೂರು, ಅ.15: ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ವರಿಷ್ಠರ ತೀರ್ಮಾನದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಬೆಂಬಲದೊಂದಿಗೆ ಜೆಡಿಎಸ್ ಅಭ್ಯರ್ಥಿ ಸ್ಪರ್ಧಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡೂರಾವ್ ತಿಳಿಸಿದರು.

ಸೋಮವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಮೂರು ಲೋಕಸಭಾ ಕ್ಷೇತ್ರ ಹಾಗೂ ಎರಡು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಒಮ್ಮತದ ಅಭ್ಯರ್ಥಿಗಳೆ ಕಣಕ್ಕಿಳಿಯುತ್ತಿದ್ದಾರೆ ಎಂದರು.

ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರು ಈ ಉಪ ಚುನಾವಣೆಗಳಲ್ಲಿ ಜಂಟಿಯಾಗಿ ಪ್ರಚಾರ ನಡೆಸಲಿದ್ದಾರೆ. ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ವೇಳೆಯೂ ಉಭಯ ಪಕ್ಷಗಳ ಪ್ರಮುಖರು ಉಪಸ್ಥಿತರಿರಲಿದ್ದಾರೆ. ಎಲ್ಲ ಕ್ಷೇತ್ರಗಳಲ್ಲೂ ನಾವೇ ಗೆಲ್ಲುತ್ತೇವೆ. ಕಳೆದ ಬಾರಿಯ ಚುನಾವಣೆಯಲ್ಲಿ ಶಿವಮೊಗ್ಗದಲ್ಲಿ ಕಾಂಗ್ರೆಸ್‌ಗೆ 4.28 ಲಕ್ಷ, ಬಿಜೆಪಿಗೆ 5.83 ಲಕ್ಷ ಹಾಗೂ ಜೆಡಿಎಸ್‌ಗೆ 2.51 ಲಕ್ಷ ಮತಗಳು ಬಂದಿದ್ದವು ಎಂದು ದಿನೇಶ್‌ ಗುಂಡೂರಾವ್ ಹೇಳಿದರು.

ಶಿವಮೊಗ್ಗದಲ್ಲಿ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆಯಲ್ಲಿಯೂ ನಮ್ಮ ಪಕ್ಷದ ಚುನಾಯಿತ ಜನಪ್ರತಿನಿಧಿಗಳೆ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಚುನಾವಣೆಯಲ್ಲಿ ಅಭ್ಯರ್ಥಿಯ ಪಾತ್ರವು ಮುಖ್ಯವಾಗುತ್ತದೆ ಎಂದು ಅವರು ತಿಳಿಸಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ, ದೇಶಕ್ಕೆ ಮಾರಕವಾಗಿರುವ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಬೇಕಿದೆ. ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಸ್ವಲ್ಪ ಶಕ್ತಿಯಿರುವುದು ಕರ್ನಾಟಕದಲ್ಲಿ ಮಾತ್ರ. ಆದುದರಿಂದ, ನಾವು ನಮ್ಮದೇ ಆದ ರಣತಂತ್ರವನ್ನು ರೂಪಿಸಿದ್ದೇವೆ ಎಂದು ದಿನೇಶ್‌ ಗುಂಡೂರಾವ್ ಹೇಳಿದರು.

ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್, ಶಾಸಕ ಬಿ.ಕೆ.ಸಂಗಮೇಶ್ ಎಲ್ಲರ ಅಭಿಪ್ರಾಯವನ್ನು ಪಡೆದುಕೊಂಡೆ ಶಿವಮೊಗ್ಗ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಸಚಿವ ಆರ್.ವಿ.ದೇಶಪಾಂಡೆ, ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಚಿವ ಕೆ.ಜೆ.ಜಾರ್ಜ್, ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಸಚಿವ ಡಿ.ಕೆ.ಶಿವಕುಮಾರ್, ಜಮಖಂಡಿ ವಿಧಾನಸಭಾ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಸಂಸದ ಡಿ.ಕೆ.ಸುರೇಶ್‌ರನ್ನು ಕಾಂಗ್ರೆಸ್ ಪಕ್ಷದ ಚುನಾವಣಾ ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ದಿನೇಶ್‌ ಗುಂಡೂರಾವ್ ತಿಳಿಸಿದರು.

ಕೇಂದ್ರದಲ್ಲಿರುವ ಜನ ವಿರೋಧಿ ಸರಕಾರ, ಜನರ ಸ್ವಾತಂತ್ರವನ್ನೆ ಮೊಟಕುಗೊಳಿಸುತ್ತಿದೆ. ಯಾರೂ ಕೂಡ ತಮ್ಮ ಅಭಿಪ್ರಾಯವನ್ನು ಮುಕ್ತವಾಗಿ ವ್ಯಕ್ತಪಡಿಸಲು ಸಾಧ್ಯವಾಗುತ್ತಿಲ್ಲ. ದೇಶದಲ್ಲಿ ಭಯ ಹಾಗೂ ಅಸಹಿಷ್ಣುತೆಯ ವಾತಾವರಣ ಸೃಷ್ಟಿಸಿದೆ. ಸ್ವತಃ ಪ್ರಧಾನಿ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ರಫೇಲ್ ಯುದ್ಧ ವಿಮಾನಗಳ ನಿರ್ಮಾಣದ ಸಂಬಂಧ ಎಚ್‌ಎಎಲ್ ಸಿಬ್ಬಂದಿಗಳ ಮೇಲೆ ಆಡಳಿತ ಮಂಡಳಿ ಯಾವ ರೀತಿ ದಬ್ಬಾಳಿಕೆ ಮಾಡುತ್ತಿದೆ ಎಂಬುದು ಜಗಜ್ಜಾಹೀರಾಗಿದೆ.

-ದಿನೇಶ್‌ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News