ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಜಂಟಿ ಪ್ರಚಾರ: ಎಚ್.ಡಿ.ದೇವೇಗೌಡ

Update: 2018-10-15 12:22 GMT

ಬೆಂಗಳೂರು, ಅ.15: ಉಪ ಚುನಾವಣೆ ನಡೆಯುತ್ತಿರುವ ಮೂರು ಲೋಕಸಭಾ ಕ್ಷೇತ್ರ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರು ಜಂಟಿಯಾಗಿ ಪ್ರಚಾರ ನಡೆಸಲಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದರು.

ಸೋಮವಾರ ಪದ್ಮನಾಭನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡು ಸರಕಾರ ನಡೆಸುತ್ತಿರುವ ನಾವು ಈಗ ಉಪ ಚುನಾವಣೆಯನ್ನು ಜೊತೆಯಾಗಿಯೇ ಎದುರಿಸುತ್ತೇವೆ ಎಂದರು.

ರಾಮನಗರ ವಿಧಾನಸಭಾ ಕ್ಷೇತ್ರ, ಮಂಡ್ಯ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿದ್ದು, ಬಳ್ಳಾರಿ ಲೋಕಸಭಾ ಕ್ಷೇತ್ರ ಹಾಗೂ ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿರುವುದರಿಂದ ಅಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂದು ಅವರು ಹೇಳಿದರು.

ನಾಳೆಯೊಳಗೆ ಎಲ್ಲ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಆನಂತರ, ಕ್ಷೇತ್ರಗಳಿಗೆ ತೆರಳಿ ಪ್ರಚಾರ ಕಾರ್ಯ ಆರಂಭಿಸುತ್ತೇವೆ. ಉಪ ಚುನಾವಣೆಯ ಪ್ರಚಾರದಲ್ಲಿ ನಾನು ಪಾಲ್ಗೊಳ್ಳುತ್ತಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒಗ್ಗಟ್ಟಾಗಿ ಪ್ರಚಾರ ಮಾಡುತ್ತಾರೆ ಎಂದು ದೇವೇಗೌಡ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News