ಉಪಚುನಾವಣೆ ಮುಂದಿನ ಲೋಕಸಭಾ ಚುನಾವಣೆಯ ಸೆಮಿಫೈನಲ್: ಕುಮಾರಸ್ವಾಮಿ

Update: 2018-10-15 12:40 GMT

ಬೆಂಗಳೂರು, ಅ.15: ರಾಜ್ಯದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಯು ಮುಂದಿನ ಲೋಕಸಭಾ ಚುನಾವಣೆಗೆ ಸೆಮಿಫೈನಲ್ ಇದ್ದಂತೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಸೋಮವಾರ ನಗರದ ಜೆಡಿಎಸ್ ಕಚೇರಿ(ಜೆ.ಪಿ.ಭವನ)ಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರತಿಪಕ್ಷ ಬಿಜೆಪಿಯವರು ನಮ್ಮ ಸಮ್ಮಿಶ್ರ ಸರಕಾರದ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ನಮ್ಮ ಸರಕಾರ ಯಾವ ರೀತಿ ಆಡಳಿತ ನಡೆಸುತ್ತಿದೆ ಎಂಬುದು ಜನತೆಗೆ ಗೊತ್ತಿದೆ ಎಂದರು. ಲೋಕಸಭೆಯ ಮೂರು ಸ್ಥಾನಗಳಿಗೆ ನಡೆಯುತ್ತಿರುವ ಉಪ ಚುನಾವಣೆ ಅಗತ್ಯವಿರಲಿಲ್ಲ ಎಂದು ಎಲ್ಲ ಪಕ್ಷಗಳು ಅಭಿಪ್ರಾಯಪಟ್ಟಿವೆ. ಆದರೂ, ಚುನಾವಣಾ ಆಯೋಗದ ನಿರ್ಧಾರಕ್ಕೆ ನಾವೆಲ್ಲ ಬದ್ಧರಾಗಿರಬೇಕು ಎಂದು ಕುಮಾರಸ್ವಾಮಿ ತಿಳಿಸಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮಧುಬಂಗಾರಪ್ಪರನ್ನು ಆಯ್ಕೆ ಮಾಡಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೊರಬ ಕ್ಷೇತ್ರದಲ್ಲಿ ಮಧು ಸೋಲುತ್ತಾರೆ ಎಂದು ನಾನು ಕನಸಿನಲ್ಲಿಯೂ ಅಂದುಕೊಂಡಿರಲಿಲ್ಲ ಎಂದು ಅವರು ಹೇಳಿದರು.

ಮಧುಬಂಗಾರಪ್ಪ ಅತ್ಯಂತ ಸಮರ್ಥ ಅಭ್ಯರ್ಥಿಯಾಗಿದ್ದು, ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ. ಶಿವಮೊಗ್ಗದಲ್ಲಿ ನಮಗೆ ಬೆಂಬಲ ನೀಡಿರುವ ಕಾಂಗ್ರೆಸ್ ಪಕ್ಷಕ್ಕೆ ನಾನು ಮೊದಲು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದರು.

ವಿಧಾನಸಭಾ ಚುನಾವಣೆಯಲ್ಲಿ ಮಧು ಸೋತಿದ್ದಕ್ಕೆ ನನಗೆ ತುಂಬಾ ನೋವಾಗಿತ್ತು. ಒಬ್ಬ ಯುವ ನಾಯಕನನ್ನು ಮುಂಚೂಣಿಗೆ ತರಬೇಕೆಂಬ ಆಸೆಯಿದೆ. ಹಾಗಾಗಿ, ಈ ಉಪ ಚುನಾವಣೆಯಲ್ಲಿ ಅವರನ್ನು ಕಣಕ್ಕಿಳಿಸಲಾಗುತ್ತಿದೆ. ಮಧು ನನ್ನ ಒಡಹುಟ್ಟಿದ ಸಹೋದರ ಇದ್ದಂತೆ. ಅವರು ನನ್ನನ್ನು ಹಿರಿಯ ಅಣ್ಣನಂತೆ ಗೌರವಿಸುತ್ತಾರೆ ಎಂದು ಅವರು ಹೇಳಿದರು.

ಶಿವಮೊಗ್ಗ ಜಿಲ್ಲೆಯ ಜನ ಈ ಹಿಂದೆ ಮಾಡಿದ ತಪ್ಪನ್ನು ಮತ್ತೆ ಮಾಡದೆ ಮಧು ಬಂಗಾರಪ್ಪಗೆ ಈ ಬಾರಿ ಸಂಪೂರ್ಣ ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆಯಿದೆ. ವೈಯಕ್ತಿಕ ದ್ವೇಷವನ್ನು ಬದಿಗೊತ್ತಿ ಬಿಜೆಪಿಯನ್ನು ಸೋಲಿಸಲು ನಾವು ಕೆಲಸ ಮಾಡಬೇಕಿದೆ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ಕುಮಾರಸ್ವಾಮಿ ಕರೆ ನೀಡಿದರು.

ಜೆಡಿಎಸ್ ಅಭ್ಯರ್ಥಿ ಮಧುಬಂಗಾರಪ್ಪ ಮಾತನಾಡಿ, ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ನಂತರ ಕೆಲ ದಿನಗಳ ಕಾಲ ಮನಸ್ಸಿಗೆ ಬಹಳ ನೋವಾಗಿತ್ತು. ಆದರೆ, ನನ್ನ ತಂದೆಯೇ ಚುನಾವಣೆಯಲ್ಲಿ ಸೋತಿದ್ದರು. ಆ ಎಲ್ಲ ವಿಚಾರಗಳನ್ನು ನಾವು ನುಂಗಿದ್ದೇವೆ ಎಂದು ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಇಷ್ಟವಿಲ್ಲದೆ ನಾನು ವಿದೇಶಕ್ಕೆ ಹೋಗಿದ್ದೆ ಅನ್ನೋದು ಸತ್ಯಕ್ಕೆ ದೂರವಾದದ್ದು. ಚುನಾವಣೆ ಘೋಷಣೆಯಾಗುವ ಮೊದಲೆ ನಾನು ವಿದೇಶಕ್ಕೆ ತೆರಳಿದ್ದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನನ್ನನ್ನು ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಒಮ್ಮತದಿಂದ ಆಯ್ಕೆ ಮಾಡಿವೆ. ಇದರಿಂದ ನನಗೆ ಹೆಚ್ಚಿನ ಬಲ ಸಿಕ್ಕಿದಂತಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅನಿವಾರ್ಯವಾಗಿ ಸೋಲಬೇಕಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಣೆಬರಹ ಏನು ಅನ್ನೋದು ಜನರಿಗೆ ಗೊತ್ತಿದೆ ಎಂದು ಅವರು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ. ಕದ್ದುಮುಚ್ಚಿ ರಾಜಕಾರಣ ಮಾಡಬಾರದು ಎಂದು ನಮ್ಮ ತಂದೆ ಹೇಳಿಕೊಟ್ಟಿದ್ದಾರೆ. ಅದರಂತೆ, ನಡೆದುಕೊಳ್ಳುತ್ತೇನೆ. ನಾನು ಯಾವ ಕಾಲವನ್ನೂ ನಂಬುವುದಿಲ್ಲ. ನಾಳೆ ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿರುವುದರಿಂದ, ಜೆಡಿಎಸ್ ವರಿಷ್ಠ ದೇವೇಗೌಡರ ಸೂಚನೆಯಂತೆ ನಾಳೆಯೇ ನಾಮಪತ್ರ ಸಲ್ಲಿಸುತ್ತೇನೆ ಎಂದು ಮಧುಬಂಗಾರಪ್ಪ ಹೇಳಿದರು.

ನನ್ನ ಭಾವ ಶಿವರಾಜ್‌ ಕುಮಾರ್ ಅಭಿಮಾನಿಗಳು ಎಲ್ಲ ಪಕ್ಷಗಳಲ್ಲೂ ಇದ್ದಾರೆ. ಚುನಾವಣೆಯಲ್ಲಿ ಅವರನ್ನು ಎಳೆದು ತರಲು ಇಷ್ಟಪಡುವುದಿಲ್ಲ. ಅವರ ಆಶೀರ್ವಾದ ನನ್ನ ಮೇಲೆ ಇದ್ದೇ ಇರುತ್ತದೆ. ಆದರೆ, ನನ್ನ ಸಹೋದರಿ ಗೀತಾ ನನ್ನ ಪರವಾಗಿ ಚುನಾವಣಾ ಪ್ರಚಾರ ಮಾಡುತ್ತಾರೆ.

-ಮಧು ಬಂಗಾರಪ್ಪ, ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News