ಕ್ರೀಡೆ ಶಿಕ್ಷಣದ ಅವಿಭಾಜ್ಯ ಅಂಗ: ಬಸವರಾಜ ಹೊರಟ್ಟಿ

Update: 2018-10-15 16:22 GMT

ಧಾರವಾಡ, ಅ.15: ವಿದ್ಯಾರ್ಥಿಗಳಲ್ಲಿ ಕಲಿಕೆ ಎಷ್ಟು ಮುಖ್ಯವೊ ಕ್ರೀಡೆಯೂ ಅಷ್ಟೆ ಮುಖ್ಯ. ಕ್ರೀಡೆ ಶಿಕ್ಷಣದ ಅವಿಭಾಜ್ಯ ಅಂಗವಾಗಿದ್ದು, ಪಠ್ಯ ಮತ್ತು ಕ್ರೀಡೆಗಳ ಸಮನ್ವಯತೆಯಿಂದ ಮಾತ್ರ ಶಿಕ್ಷಣ ಪರಿಪೂರ್ಣವಾಗಲು ಸಾಧ್ಯ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಸೋಮವಾರ ನಗರದ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಹುರಕಡ್ಲಿ ಅಜ್ಜ ಶಿಕ್ಷಣ ಸಮಿತಿಯ ಕೆ.ಎಸ್.ಜಿಗಳೂರು ಕಲಾ ಹಾಗೂ ಡಾ.ಎಸ್.ಎಂ.ಶೇಷಗಿರಿ ವಾಣಿಜ್ಯ ಮಹಿಳಾ ಮಹಾವಿದ್ಯಾಲಯ ಆಯೋಜಿಸಿರುವ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 14ನೇ ಅಂತರ್ ಮಹಿಳಾ ಮಹಾವಿದ್ಯಾಲಯಗಳ ಅಥ್ಲೆಟಿಕ್ ಕ್ರೀಡಾಕೂಟ 2018-19ನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮಹಿಳಾ ಬ್ಯಾಂಡ್‌ಸೆಟ್, ಡೊಳ್ಳುಕುಣಿತ ತಂಡಗಳು ಈ ಸಲದ ಮೈಸೂರು ದಸರಾ ಮೆರವಣಿಗೆಯಲ್ಲಿ ಪಾಲ್ಗೊಳ್ಳುತ್ತಿರುವುದು ಹೆಮ್ಮೆಯ ವಿಷಯ ಎಂದು ಅವರು ಹೇಳಿದರು.

ಮಹಿಳೆಯರಿಗೆ ಸಮಾನ ಹಕ್ಕು ನೀಡುವುದು ನಮ್ಮೆಲ್ಲರ ಕರ್ತವ್ಯ. ದಕ್ಷಿಣ-ಉತ್ತರ ಎನ್ನದೇ ಮಹಿಳಾ ವಿಶ್ವವಿದ್ಯಾಲಯ ಅಧೀನಕ್ಕೆ ರಾಜ್ಯದ ಎಲ್ಲ ಮಹಿಳಾ ಮಹಾವಿದ್ಯಾಲಯಗಳ ವಿದ್ಯಾರ್ಥಿನಿಯರು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವಂತೆ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳು ಅಭ್ಯಾಸದೊಂದಿಗೆ ಕ್ರೀಡೆಯಲ್ಲಿ ಶಿಸ್ತಿನಿಂದ ಭಾಗವಹಿಸುವಂತೆ ತರಬೇತಿ ನೀಡಬೇಕೆಂದು ಬಸವರಾಜ ಹೊರಟ್ಟಿ ತಿಳಿಸಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಬಿ.ಗಾಯಿ ಮಾತನಾಡಿ, ಕ್ರೀಡಾಕೂಟವನ್ನು ವಿದ್ಯಾರ್ಥಿಗಳು ಹಬ್ಬದಂತೆ ಸಡಗರದಿಂದ ಆಚರಿಸಬೇಕು. ಎಲ್ಲ ವಿದ್ಯಾರ್ಥಿಗಳು ಕಡ್ಡಾಯವಾಗಿ ಕ್ರೀಡೆಗಳಲ್ಲಿ ಭಾಗವಹಿಸಬೇಕೆಂದು ಕರೆ ನೀಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಬಿಹಾ ಭೂಮಿಗೌಡ ಮಾತನಾಡಿ, ಕ್ರೀಡೆಗಳಲ್ಲಿ ಹೆಣ್ಣುಮಕ್ಕಳು ಭಾಗವಹಿಸುವಂತೆ ಮಾಡಲು ಪಾಲಕರ ಮನಪರಿವರ್ತನೆ ಮಾಡಬೇಕಿದೆ. ಮುಂಬರುವ ಕ್ರೀಡಾಕೂಟದಲ್ಲಿ ವಿಶ್ವವಿದ್ಯಾಲಯದ ಎಲ್ಲ ಮಹಾವಿದ್ಯಾಲಯಗಳು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಕ್ರೀಡಾಕೂಟದ ಅವಧಿಯನ್ನು ಹೆಚ್ಚಿಸಲಾಗುವುದು ಎಂದರು. ಕ್ರೀಡಾಕೂಟ ಉದ್ಘಾಟನಾ ಸಮಾರಂಭದಲ್ಲಿ ಮಹಿಳಾ ವಿಶ್ವವಿದ್ಯಾಲಯದ ಕಾಲೇಜು ಅಭಿವೃದ್ಧಿ ಘಟಕದ ನಿರ್ದೇಶಕ ಡಾ.ಓಂಕಾರ ಕಾಕಡೆ, ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ.ಎನ್.ಚಂದ್ರಪ್ಪ ಸೇರಿದಂತೆ ಮಹಿಳಾ ವಿಶ್ವವಿದ್ಯಾಲಯ ವ್ಯಾಪ್ತಿಯ ಸುಮಾರು 27 ಕಾಲೇಜುಗಳ 240ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಅಕ್ಕಮಹಾದೇವಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಅನಗಾ ಲಿಮಿಯಾ, ವಿದ್ಯಾ ವಿಷಯಕ ಪರಿಷತ್ ಸದಸ್ಯೆ ನಿರ್ಮಲಾ ಬಿಕ್ಕಣ್ಣವರ, ಹುರಕಡ್ಲಿ ಅಜ್ಜ ಶಿಕ್ಷಣ ಸಮಿತಿಯ ಗೌರವ ಕಾರ್ಯದರ್ಶಿ ಎಂ.ಸಿ.ಬಂಡಿ ಹಾಗೂ ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News