ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ.ರಾಘವೇಂದ್ರ, ಜೆಡಿಯು ಅಭ್ಯರ್ಥಿಯಾಗಿ ಮಹಿಮಾ ಪಟೇಲ್ ನಾಮಪತ್ರ ಸಲ್ಲಿಕೆ

Update: 2018-10-15 18:00 GMT

ಶಿವಮೊಗ್ಗ, ಅ. 15: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ.ರಾಘವೇಂದ್ರ ಹಾಗೂ ಜೆಡಿಯು ಅಭ್ಯರ್ಥಿಯಾಗಿ ಮಹಿಮಾ ಪಟೇಲ್‍, ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿಯೂ ಆದ ಡಿಸಿ ಡಾ. ಕೆ.ಎ ದಯಾನಂದ್‍ರವರಿಗೆ ಪ್ರತ್ಯೇಕವಾಗಿ ನಾಮಪತ್ರ ಸಲ್ಲಿಸಿದರು.

10.45 ರಿಂದ 11.30 ರೊಳಗೆ ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದ ಬಿ.ವೈ.ರಾಘವೇಂದ್ರರವರು ಮೆರವಣಿಗೆಯಿಂದ ಅರ್ಧಕ್ಕೆ ನಿರ್ಗಮಿಸಿದರು. ಅವರು ನಾಮಪತ್ರ ಸಲ್ಲಿಸುವ ವೇಳೆ ಶಾಸಕರಾದ ಕೆ.ಎಸ್.ಈಶ್ವರಪ್ಪ, ಹರತಾಳು ಹಾಲಪ್ಪ, ಮುಖಂಡರಾದ ಭಾನುಪ್ರಕಾಶ್, ಬಿ.ವೈ.ಆರ್. ಪತ್ನಿ ಉಪಸ್ಥಿತರಿದ್ದರು. 

ನಾಮಪತ್ರ ಸಲ್ಲಿಸಿದ ನಂತರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. 'ಶಿವಮೊಗ್ಗ ಕ್ಷೇತ್ರದಲ್ಲಿ ತಮ್ಮ ಗೆಲುವು ನಿಶ್ಚಿತವಾಗಿದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಅಭ್ಯರ್ಥಿ ಕಣಕ್ಕಿಳಿಸಿದರೂ ತಮ್ಮ ಗೆಲುವು ತಪ್ಪಿಸಲು ಸಾಧ್ಯವಿಲ್ಲ' ಎಂದರು. 

ಶಕ್ತಿ ಪ್ರದರ್ಶನ: ಬಿ.ವೈ.ಆರ್ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ, ಬಿಜೆಪಿ ಪಕ್ಷವು ರಾಮಣ್ಣ ಶ್ರೇಷ್ಠಿ ಪಾರ್ಕ್ ಆವರಣದಿಂದ ಎನ್.ಇ.ಎಸ್. ಮೈದಾನದವರೆಗೆ ಬೃಹತ್ ಮೆರವಣಿಗೆ ನಡೆಸಿತು. ಈ ಮೆರವಣಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮುಖಂಡರಾದ ಕೆ.ಎಸ್.ಈಶ್ವರಪ್ಪ ಸೇರಿದಂತೆ ಪಕ್ಷದ ಶಾಸಕರು, ಮುಖಂಡರು ಉಪಸ್ಥಿತರಿದ್ದರು. ಎನ್.ಇ.ಎಸ್. ಮೈದಾನ ಆವರಣದಲ್ಲಿ ಕಾರ್ಯಕರ್ತರ ಸಭೆ ನಡೆಯಿತು. 

ಬದಲಾಗಬೇಕು: ಮಹಿಮಾ ಪಟೇಲ್‍ರವರು ಗೋಪಿ ವೃತ್ತದಿಂದ ಡಿ.ಸಿ. ಕಚೇರಿಯವರೆಗೆ ಮೆರವಣಿಗೆಯಲ್ಲಿ ಆಗಮಿಸಿ ಉಮೇದುವಾರಿಕೆ ಅರ್ಜಿ ಸಲ್ಲಿಸಿದರು. ನಾಮಪತ್ರದೊಂದಿಗೆ ಬ್ಯಾಂಕ್ ಖಾತೆಯ ವಿವರ ಸಲ್ಲಿಸುವುದು ಕಡ್ಡಾಯವಾಗಿತ್ತು. ಆದರೆ ಅವರ ಬ್ಯಾಂಕ್ ಖಾತೆಯ ವಿವರ ಸಿದ್ದವಾಗದ ಕಾರಣದಿಂದ, ಡಿ.ಸಿ. ಕಚೇರಿಯಿಂದ ಮತ್ತೆ ಕಾರನ್ನೇರಿ ಬ್ಯಾಂಕ್‍ಗೆ ತೆರಳಿದ ಘಟನೆಯೂ ನಡೆಯಿತು. ತದನಂತರ ಡಿ.ಸಿ. ಕಚೇರಿಗೆ ಆಗಮಿಸಿ ಅವರು ತಮ್ಮ ಬೆಂಬಲಿಗರೊಂದಿಗೆ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಚುನಾವಣಾ ವ್ಯವಸ್ಥೆ ಬದಲಾಗಬೇಕು. ನಿಷ್ಠಾವಂತ, ಪ್ರಾಮಾಣಿಕರು ಆಯ್ಕೆಯಾಗುವ ವಾತಾವರಣ ಸೃಷ್ಟಿಯಾಗಬೇಕು. ಉತ್ತಮರನ್ನು ಮತದಾರರು ಚುನಾಯಿಸಬೇಕು. ಭ್ರಷ್ಟರನ್ನು ದೂರವಿಡಬೇಕು' ಎಂದು ತಿಳಿಸಿದರು. 

'ಪ್ರಜ್ಞಾವಂತ ಮತದಾರರು ತಮ್ಮನ್ನು ಬೆಂಬಲಿಸುವ ವಿಶ್ವಾಸದ ಕಾರಣದಿಂದ ಶಿವಮೊಗ್ಗ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದೆನೆ. ಮತದಾರರು ಕೂಡ ಯಾವುದೇ ಆಮಿಷಕ್ಕೆ ಬಲಿಯಾಗದೆ ಉತ್ತಮರನ್ನು ಚುನಾಯಿಸಬೇಕು. ಹಾಗೆಯೇ ರಾಜಕೀಯ ಪಕ್ಷಗಳು ಕೂಡ ವ್ಯವಸ್ಥೆಯನ್ನು ಭ್ರಷ್ಟಗೊಳಿಸಿ ಮತಗಳಿಸುವುದನ್ನು ಬಿಡಬೇಕು' ಎಂದರು.

ಅಂತಿಮ ದಿನ: ಅ. 15 ರಂದೇ ಮಧು ಬಂಗಾರಪ್ಪರವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಆ ಪಕ್ಷ ಭಾನುವಾರ ತಿಳಿಸಿತ್ತು. ಸಿ.ಎಂ. ಹೆಚ್.ಡಿ.ಕುಮಾರಸ್ವಾಮಿಯವರು ಆಗಮಿಸುತ್ತಿರುವ ಕಾರಣದಿಂದ ಮಂಗಳವಾರಕ್ಕೆ ಮುಂದೂಡಲಾಗಿದೆ. ಮಂಗಳವಾರ ಬೆಳಿಗ್ಗೆ ರವೀಂದ್ರನಗರ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಮೆರವಣಿಗೆಯಲ್ಲಿ ಆಗಮಿಸಿ ಮಧು ಬಂಗಾರಪ್ಪರವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಆ ಪಕ್ಷ ತಿಳಿಸಿದೆ. 

ಮೂರು ಕ್ಷೇತ್ರಗಳಲ್ಲಿ ಗೆಲುವು : ಬಿ.ಎಸ್.ಯಡಿಯೂರಪ್ಪ
'ಈ ಉಪ ಚುನಾವಣೆಯು ಮುಂಬರುವ ಸಾರ್ವತ್ರಿಕ ಚುನಾವಣೆಯ ಮುನ್ನುಡಿಯಾಗಿದೆ. ಶಿವಮೊಗ್ಗ, ಬಳ್ಳಾರಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷ ಜಯಭೇರಿ ಬಾರಿಸಲಿದೆ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಸೋಮವಾರ ನಗರದ ಎನ್.ಇ.ಎಸ್. ಮೈದಾನದಲ್ಲಿ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಈ ಉಪ ಚುನಾವಣೆಯಲ್ಲಿನ ಗೆಲುವು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕೈಯನ್ನು ಬಲಪಡಿಸುವಲ್ಲಿ ಸಹಕಾರಿಯಾಗಲಿದೆ ಎಂದರು. 

ಎದುರಾಳಿ ಅಭ್ಯರ್ಥಿಯ ಬಗ್ಗೆ ಯಾವುದೇ ಮಹತ್ವ ಕೊಡಬೇಡಿ. ಇದಕ್ಕೆ ಬದಲಾಗಿ ಪಕ್ಷದ ಅಭ್ಯರ್ಥಿ ಬಿ.ವೈ.ರಾಘವೇಂದ್ರರಿಗೆ ಮತ ಹಾಕುವಂತೆ ಮತದಾರರ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿ. ಯಾವುದೇ ಗೊಂದಲ-ಗಡಿಬಿಡಿಗೆ ಆಸ್ಪದವಾಗದಂತೆ ಕಾರ್ಯನಿರ್ವಹಿಸಿ ಎಂದು ಪಕ್ಷದ ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು. 

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ವಿಧಾನಸಭೆ ಚುನಾವಣೆಯಲ್ಲಿ ರೈತರ ಸಾಲಮನ್ನಾದ ಭರವಸೆ ನೀಡಿ, ಅಧಿಕಾರಕ್ಕೆ ಬಂದ ನಂತರ ಪ್ರಧಾನಮಂತ್ರಿ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಸುಳ್ಳು ಹೇಳುತ್ತಿದ್ದಾರೆ. ಈ ಮೂಲಕ ಜವಾಬ್ದಾರಿಯಿಂದ ನುಣಿಚಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ದೂರಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News