ಕುಮಾರಸ್ವಾಮಿ ಸರ್ಕಾರದ ಆಡಳಿತದಲ್ಲಿ ಹೆಚ್ಚಿದ ರೈತರ ಆತ್ಮಹತ್ಯೆ: ಸಂಸದೆ ಶೋಭಾ ಕರಂದ್ಲಾಜೆ

Update: 2018-10-17 16:14 GMT

ಮೈಸೂರು,ಅ.17: ಕುಮಾರಸ್ವಾಮಿ ನೇತೃತ್ವದ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ರಾಜ್ಯದಲ್ಲಿ ಅತೀ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು.

ನಗರದ ಜಲದರ್ಶಿನಿ ಅತಿಥಿಗೃಹದ ಆವರಣದಲ್ಲಿ ಬುಧವಾರ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಅವರ ಕಚೇರಿ ಉದ್ಘಾಟಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿ ಘೊಷಿಸಿದ ಸಾಲ ಮನ್ನಾ ಯಾವುದೇ ರೀತಿಯ ಪರಿಣಾಮ ಬೀರಿಲ್ಲ. ಇತ್ತೀಚಿನ ದಿನಗಳಲ್ಲಿ ಐವತ್ತಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರದ ದುರಾಡಳಿತವೇ ಕಾರಣ. ರಾಜ್ಯದಲ್ಲಿ ನಡೆಯುತ್ತಿರುವ ಮೂರು ಲೋಕಸಭೆ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸಲಿದೆ ಎಂದು ಹೇಳಿದರು.

ಬಳ್ಳಾರಿ ಹಾಗೂ ಶಿವಮೊಗ್ಗ ನಮ್ಮ ಕ್ಷೇತ್ರವಾಗಿದ್ದು, ಎರಡು ಕ್ಷೇತ್ರಗಳಲ್ಲಿ ಭಾರಿ ಅಂತರದಿಂದ ಗೆಲವು ಸಾಧಿಸಲಿದ್ದೇವೆ. ಮಂಡ್ಯ ಹಾಗೂ ರಾಮನಗರದಲ್ಲಿ ಗೆಲ್ಲುವ ವಾತಾವರಣ ನಿರ್ಮಾಣವಾಗಿದೆ. ವಿಧಾನಸೌಧದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಂದಾಗಿದ್ದರೂ ಹಳ್ಳಿಗಳಲ್ಲಿ ಕಿತ್ತಾಡುತ್ತಿದ್ದಾರೆ. ಇದು ನಮಗೆ ಸಹಕಾರಿಯಾಗಲಿದೆ. ಈಗಾಗಲೇ ಕಾಂಗ್ರೆಸ್ ಪಕ್ಷದಲ್ಲಿ ಶಾಸಕರು ಬಂಡಾಯವೆದ್ದಿದ್ದಾರೆ. ರಾಜ್ಯದಲ್ಲಿ ಮತ್ತೆ ಯಡಿಯೂರಪ್ಪನವರ ನೇತೃತ್ವದ ಸರ್ಕಾರ ರಚನೆಗೆ ಜನರು ಕಾತರದಿಂದ ಕಾಯುತಿದ್ದಾರೆ ಎಂದು ಹೇಳಿದರು.

ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದು ಧಾರ್ಮಿಕ ಸೂಕ್ಷ್ಮ ವಿಚಾರ. ದೇವಾಲಯದ ಆಡಳಿತ ಮಂಡಳಿ ಜನರು ಕೂತು ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಸುಪ್ರೀಂ ಕೋರ್ಟ್ ಕೂಡ ಮೇಲ್ಮನವಿ ಅರ್ಜಿಯನ್ನು ಪರಿಶೀಲನೆ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಶಾಸಕರುಗಳಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News