ನನಗೆ ಅಧಿಕಾರ ಮುಖ್ಯವಲ್ಲ: ಕುಮಾರಸ್ವಾಮಿ

Update: 2018-10-17 16:51 GMT

ಮಡಿಕೇರಿ, ಅ.17 : ಧಾರಾಕಾರ ಮಳೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರೊಂದಿಗೆ ಸಂವಾದ ನಡೆಸಬೇಕೆಂದು ಕೊಡಗು ಜಿಲ್ಲೆಯ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇನೆ. ಆದರೆ, ಇಂದೇ ತಾಯಿ ಕಾವೇರಿ ನದಿಯ ತೀರ್ಥೋದ್ಭವವಾಗತ್ತಿರುವುದು ಕಾಕತಾಳೀಯವಾಗಿದ್ದು, ತಲಕಾವೇರಿ ಕ್ಷೇತ್ರಕ್ಕೆ ತೆರಳುವ ಮೂಲಕ ನಾನು ಅಧಿಕಾರದಲ್ಲಿ ಗಟ್ಟಿಯಾಗಿ ಇರುತ್ತೇನೆಯೇ ಎನ್ನುವುದನ್ನು ಪರೀಕ್ಷೆ ಮಾಡಿಯೇ ಬಿಡೋಣವೆಂದು ಕುಮಾರಸ್ವಾಮಿ ತಿಳಿಸಿದರು.

ಭಾಗಮಂಡಲ, ತಲಕಾವೇರಿಗೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತದೆ ಎನ್ನುವ ಮಾತಿದೆ. ನನಗೆ ಅಧಿಕಾರ ಮುಖ್ಯವಲ್ಲ. ಜನರ ಸಂಕಷ್ಟಗಳಿಗೆ ಸ್ಪಂದಿಸಬೇಕೆನ್ನುವ ಉದ್ದೇಶದಿಂದ ಇಲ್ಲಿಗೆ ಬಂದಿದ್ದೇನೆ. 2006ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗಲು ತಲಕಾವೇರಿಗೆ ಭೇಟಿ ನೀಡಿದ್ದೆ, ಆದರೆ ಅಧಿಕಾರ ಕಳೆದುಕೊಂಡಿರಲಿಲ್ಲ. ಪ್ರಸ್ತುತ ಮುಖ್ಯಮಂತ್ರಿಯಾದ ನಂತರ ಕೂಡ ತಲಕಾವೇರಿಗೆ ತೆರಳಿ ಪೂಜೆ ಸಲ್ಲಿಸಿದ್ದೇನೆ, ಕಾವೇರಿ ತಾಯಿಯ ಆಶೀರ್ವಾದದಿಂದ ಸರ್ಕಾರ ಸುಭಿಕ್ಷವಾಗಿದೆ. ಈಗಲೂ ತಲಕಾವೇರಿಗೆ ತೆರಳುತ್ತಿದ್ದು, ನಾನು ಅಧಿಕಾರದಲ್ಲಿ ಗಟ್ಟಿಯಾಗಿ ಇರುತ್ತೇನೆಯೇ ಇಲ್ಲವೇ ಎಂಬುವುದನ್ನು ಪರೀಕ್ಷೆ ಮಾಡಿಬಿಡೋಣವೆಂದು ಕುಮಾರಸ್ವಾಮಿ ತಿಳಿಸಿದರು.

ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಸಂತ್ರಸ್ತರ ಪರವಾದ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳ ಪರವಾಗಿ ಮುಖ್ಯಮಂತ್ರಿಗಳಿಗೆ ನೀಡಿದರು. ಇದೇ ಸಂದರ್ಭ ಮುಖ್ಯಮಂತ್ರಿ ಕುಮಾರಸ್ವಾಮಿ ಸಂತ್ರಸ್ತ ಫಲಾನುಭವಿಗಳಿಗೆ ತಲಾ 50 ಸಾವಿರ ರೂ.ಗಳ ಪರಿಹಾರದ ಜ್ಞಾಪನಾ ಪತ್ರಗಳನ್ನು ವಿತರಿಸಿದರು.

ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು, ಶಾಸಕ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯರುಗಳಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಭೋಜೇಗೌಡ, ಜಿಪಂ ಅಧ್ಯಕ್ಷ ಬಿ.ಎ. ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ನಗರ ಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಜಿಲ್ಲಾಧಿಕಾರಿ ಶ್ರೀವಿದ್ಯಾ ಮತ್ತಿತರರ ಪ್ರಮುಖರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News