ಉಪ ಚುನಾವಣೆ ಸಮರ: ಕಾಂಗ್ರೆಸ್-ಜೆಡಿಎಸ್ ಮುಖಂಡರ ಜಂಟಿ ಪ್ರಚಾರ

Update: 2018-10-19 16:27 GMT

ಬೆಂಗಳೂರು, ಅ.19: ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಆಡಳಿತರೂಢ ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರು ಜಂಟಿ ಪ್ರಚಾರ ನಡೆಸಲಿದ್ದಾರೆ.

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಇನ್ನಿತರ ಪ್ರಮುಖ ನಾಯಕರು ಅ.20ರಂದು ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ಚುನಾವಣಾ ಪ್ರಚಾರದ ವಿವರಣೆ ನೀಡಲಿದ್ದಾರೆ.

ಈಗಾಗಲೆ ಕಾಂಗ್ರೆಸ್ ಹಾಗೂ ಜೆಡಿಎಸ್ ಚುನಾವಣಾ ಮೈತ್ರಿ ಮಾಡಿಕೊಂಡು ಶಿವಮೊಗ್ಗ, ಮಂಡ್ಯ ಲೋಕಸಭಾ ಕ್ಷೇತ್ರ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದು, ಬಳ್ಳಾರಿ ಲೋಕಸಭಾ ಕ್ಷೇತ್ರ ಹಾಗೂ ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ನಾಮಪತ್ರ ಹಿಂಪಡೆಯಲು ಅ.20ರಂದು ಕೊನೆಯ ದಿನವಾಗಿರುವುದರಿಂದ, ಸೋಮವಾರದಿಂದ ಉಭಯ ಪಕ್ಷಗಳ ಮುಖಂಡರು ತಮ್ಮ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ದೇವೇಗೌಡರು, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಜೊತೆಯಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳುವುದಾಗಿ ತಿಳಿಸಿದ್ದರು.

ಈಗಾಗಲೆ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ತಂಡದೊಂದಿಗೆ ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಅದೇ ರೀತಿ, ಬಳ್ಳಾರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡೂರಾವ್ ಸೇರಿದಂತೆ ಇನ್ನಿತರ ಮುಖಂಡರು ಪ್ರಚಾರದಲ್ಲಿ ತೊಡಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News