×
Ad

ಮುಂಬೈನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ: ಬಿಜೆಪಿ ಕಾರ್ಯಕರ್ತರ ಕೃತ್ಯ; ಆರೋಪ

Update: 2018-10-22 20:50 IST

ಮುಂಬೈ,ಅ.22: ಇಲ್ಲಿಯ ಘಾಟ್‌ಕೋಪರ್‌ನಲ್ಲಿ ಸೋಮವಾರ ಬೆಳಗಿನ ಜಾವ ಕಾಂಗ್ರೆಸ್ ಕಾರ್ಯಕರ್ತನೋರ್ವನನ್ನು ಚೂರಿಯಿಂದ ಇರಿದು ಹತ್ಯೆ ಮಾಡಲಾಗಿದ್ದು,ಸಾಮಾಜಿಕ ಮಾಧ್ಯಮದಲ್ಲಿಯ ಪೋಸ್ಟ್‌ವೊಂದಕ್ಕೆ ಸಂಬಂಧಿಸಿ ಈ ಹತ್ಯೆ ನಡೆದಿದೆ ಎನ್ನಲಾಗಿದೆ. ಹಂತಕರು ಬಿಜೆಪಿಗೆ ಸೇರಿದವರಾಗಿದ್ದಾರೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಅಶೋಕ ಚವಾಣ್ ಆರೋಪಿಸಿದ್ದಾರೆ.

 ನಸುಕಿನ 1:30 ರ ಸುಮಾರಿಗೆ ಅಸಲ್ಫಾ ಮೆಟ್ರೋ ನಿಲ್ದಾಣದ ಬಳಿ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಮನೋಜ್ ದುಬೆ(45)ಯನ್ನು ಚೂರಿಗಳಿಂದ ಇರಿದು ಪರಾರಿಯಾಗಿದ್ದಾರೆ. ಪೊಲೀಸ್ ತಂಡವು ಅವರನ್ನು ಆಸ್ಪತ್ರೆಗೆ ಸಾಗಿಸಿತ್ತಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎಂದು ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದರು.

ಕೆಲವು ಮಾಧ್ಯಮಗಳು ವರದಿ ಮಾಡಿರುವಂತೆ ದುಬೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದ ರಾಜಕೀಯ ಬರಹ ಕೊಲೆಗೆ ಕಾರಣವಾಗಿರಬಹುದೇ ಎಂಬ ಪ್ರಶ್ನೆಗೆ, ಈ ದಾಳಿಗೆ ಕಾರಣವನ್ನಿನ್ನೂ ತಿಳಿದುಕೊಳ್ಳಬೇಕಿದೆ ಎಂದು ಅವರು ಉತ್ತರಿಸಿದರು.

ಬಿಜೆಪಿ ಕಾರ್ಯಕರ್ತರು ದುಬೆಯನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ. ಈ ದಾಳಿಯನ್ನು ಕಾಂಗ್ರೆಸ್ ಪಕ್ಷವು ಬಲವಾಗಿ ಖಂಡಿಸುತ್ತದೆ. ಇದು ಕೇವಲ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆಯಲ್ಲ,ಪ್ರಜಾಪ್ರಭುತ್ವದ ಹತ್ಯೆಯಾಗಿದೆ ಎಂದು ಟ್ವೀಟಿಸಿರುವ ಮಾಜಿ ಮುಖ್ಯಮಂತ್ರಿಯೂ ಆಗಿರುವ ಚವಾಣ್,ಹಂತಕರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News