ಯಡಿಯೂರಪ್ಪ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ

Update: 2018-10-22 18:15 GMT

ಶಿವಮೊಗ್ಗ, ಅ. 22: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಧು ಬಂಗಾರಪ್ಪ ಗೆಲುವು ಖಚಿತವೆಂದು ಭವಿಷ್ಯ ನುಡಿದಿದ್ದಾರೆ. 

ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಮೈತ್ರಿ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪ ಅವರನ್ನು ಗೆಲ್ಲಿಸಲು ಪಕ್ಷ ತೀರ್ಮಾನಿಸಿದೆ. ಈಗಾಗಲೇ ಕ್ಷೇತ್ರದ ಹಲವೆಡೆ ಜಂಟಿ ಪ್ರಚಾರ ನಡೆಸಲಾಗಿದ್ದು, ದೇಶದ ಪರಿಸ್ಥಿತಿಗೆ ಅನುಗುಣವಾಗಿ ಮೈತ್ರಿ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಉಪ ಚುನಾವಣೆ ನಡೆಯುವ ಐದೂ ಕ್ಷೇತ್ರದಲ್ಲಿ ಗೆಲ್ಲುವ ನಿಟ್ಟಿನಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗಿದೆ' ಎಂದರು.

ಬಿ.ಎಸ್.ಯಡಿಯೂರಪ್ಪರವರು ಸ್ವಾರ್ಥಕ್ಕಾಗಿ ರಾಜಕೀಯ ಮಾಡುತ್ತಿದ್ದಾರೆ. ಅವರ ಮಗನಿಗಾಗಿ ರಾಜೀನಾಮೆ ನೀಡುವುದು, ಉಪ ಚುನಾವಣೆ ಹೇರುವ ಅಭ್ಯಾಸ ಮಾಡಿಕೊಂಡಿದ್ದಾರೆ. ಬಿಜೆಪಿ ಕೇಂದ್ರ ಸಮಿತಿ ತೀರ್ಮಾನ ತೆಗೆದುಕೊಳ್ಳುವ ಮೊದಲೇ, ತಮ್ಮ ಮಗ ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಎಂದು ಪ್ರಕಟಿಸಿದರು. ಅವರು ಸಂಸದರಾಗಿದ್ದಾಗ ಕ್ಷೇತ್ರದ ಜನತೆಗೆ ನೀಡಿದ್ದ ಭರವಸೆಯಂತೆ ನಡೆದುಕೊಂಡಿಲ್ಲ ಎಂದು ಟೀಕಾಪ್ರಹಾರ ನಡೆಸಿದ್ದಾರೆ. 

ಕೇಂದ್ರ ಸರ್ಕಾರ ರಾಜ್ಯದ ಅಭಿವೃದ್ಧಿಗೆ ಯಾವುದೇ ಕೊಡುಗೆ ನೀಡಿಲ್ಲ. ಮಹಾದಾಯಿ ನೀರು ಹಂಚಿಕೆ, ಕೊಡಗು ದುರಂತಕ್ಕೆ ಸ್ಪಂದಿಸಿಲ್ಲ. ಎಲ್ಲ ರಂಗಗಳಲ್ಲಿಯೂ ವಿಫಲವಾಗಿರುವ ಕೇಂದ್ರ ಸರ್ಕಾರ, ಬರೀ ಪೊಳ್ಳು ಭರವಸೆ-ಆಶ್ವಾಸನೆ ನೀಡುವಲ್ಲಿ ಕಾಲಹರಣ ಮಾಡುತ್ತಿದೆ ಎಂದು ದೂರಿದರು. 
ಮುಂದಿನ ವರ್ಷ 2019 ರಲ್ಲಿ ಎದುರಾಗಲಿರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ನಿರ್ಧಾರ ಮಾಡಲಾಗಿದೆ. ಎರಡೂ ಪಕ್ಷದ ನಾಯಕರು ಚರ್ಚಿಸಿ 28 ಕ್ಷೇತ್ರಗಳಲ್ಲಿ ಒಮ್ಮತದ ಅಭ್ಯರ್ಥಿ ಕಣಕ್ಕಿಳಿಸಲಾಗುವುದು ಎಂದು ತಿಳಿಸಿದ್ದಾರೆ. 

ಸಾಧ್ಯವಿಲ್ಲ: ಗೋಷ್ಠಿಯಲ್ಲಿ ಉಪಸ್ಥಿತರಿದ್ದ ಸಚಿವ ಆರ್.ವಿ.ದೇಶಪಾಂಡೆ ಮಾತನಾಡಿ, ಉಪ ಚುನಾವಣೆ ನಡೆಯುವ ಐದೂ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೆಲುವು ಖಚಿತವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಕೇವಲ ಚಿಹ್ನೆ ಮೇಲೆ ಗೆಲ್ಲುವ ಕಾಲ ಹೋಗಿದೆ. ಪಕ್ಷವನ್ನು ಬಲಪಡಿಸುವ ಕೆಲಸ ನಡೆಸಲಾಗುತ್ತಿದೆ. ಹೋರಾಟದ ಮೂಲಕ ಪಕ್ಷವನ್ನು ಸಂಘಟಿಸಲಾಗುತ್ತಿದೆ ಎಂದು ಹೇಳಿದರು. 

ದೇಶದಲ್ಲಿ ನಿರುದ್ಯೋಗ ಸಮಸ್ಯೆ ತೀವ್ರವಾಗಿದೆ. ಉದ್ಯೋಗ ಸೃಷ್ಟಿ ಕುರಿತು ನೀಡಿದ್ದ ಭರವಸೆಯನ್ನು ಈಡೇರಿಸಲು ಕೇಂದ್ರದ ಬಿಜೆಪಿ ಸರ್ಕಾರ ವಿಫಲವಾಗಿದೆ. ಅದೇ ರೀತಿ ಹಣ ದುಬ್ಬರ ಹೆಚ್ಚಾಗಿದ್ದು, ತೈಲ ಬೆಲೆ ದುಬಾರಿಯಾಗಿದೆ. ಇದಕ್ಕೆ ಕೇಂದ್ರ ಸರ್ಕಾರದ ದುರಾಡಳಿತವೇ ಮುಖ್ಯ ಕಾರಣವಾಗಿದೆ ಎಂದು ಟೀಕಿಸಿದರು. ಗೋಷ್ಠಿಯಲ್ಲಿ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್ ಸೇರಿದಂತೆ ಮೊದಲಾದವರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News