ಮಾಜಿ ಪ್ರಧಾನಿ ದೇವೇಗೌಡರಿಗೆ 'ಮಹರ್ಷಿ ವಾಲ್ಮೀಕಿ ಪ್ರಶಸ್ತಿ'

Update: 2018-10-23 13:18 GMT

ಬೆಂಗಳೂರು, ಅ. 22: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರನ್ನು ಪ್ರಸಕ್ತ ಸಾಲಿನ ಪ್ರತಿಷ್ಠಿತ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಹೈಕೋರ್ಟಿನ ನಿವೃತ್ತ ನ್ಯಾಯಾಧೀಶ ಎಚ್.ಎನ್.ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಸರಕಾರ ನೇಮಿಸಿದ್ದ ಸಮಿತಿ ಮಾಜಿ ಪ್ರಧಾನಿ ದೇವೇಗೌಡ ಅವರ ಹೆಸರನ್ನು ಶಿಫಾರಸು ಮಾಡಿದ್ದು, ಅದರನ್ವಯ ವಾಲ್ಮೀಕಿ ಪ್ರಶಸ್ತಿಗೆ ದೇವೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಮಂಗಳವಾರ ಸಚಿವ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ತಂಡ, ದೇವೇಗೌಡ ಅವರನ್ನು ಪದ್ಮನಾಭನಗರದಲ್ಲಿನ ಅವರ ನಿವಾಸಕ್ಕೆ ಭೇಟಿ ಮಾಡಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಗಮಿಸಿ, ಪ್ರಶಸ್ತಿ ಸ್ವೀಕರಿಸಬೇಕೆಂದು ಮನವಿ ಮಾಡಿತು.

ನಾಳೆ(ಅ.24) ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಏರ್ಪಡಿಸಿರುವ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ, ದೇವೇಗೌಡ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿ ಮೊತ್ತ 5 ಲಕ್ಷ ರೂಪಾಯಿ ನಗದು, ಪ್ರಶಸ್ತಿ ಫಲಕ ಮತ್ತು ಪುರಸ್ಕಾರ ಒಳಗೊಂಡಿದೆ ಎಂದು ಸಮಾಜ ಕಲ್ಯಾಣ ಇಲಾಖೆ ತಿಳಿಸಿದೆ.

ಆದರೆ, ಪರಿಶಿಷ್ಟ (ಎಸ್ಟಿ) ವರ್ಗದ ಅಭಿವೃದ್ಧಿಗಾಗಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿಯೊಬ್ಬರಿಗೆ ನೀಡುವ ಪ್ರತಿಷ್ಠಿತ ವಾಲ್ಮೀಕಿ ಪ್ರಶಸ್ತಿಯನ್ನು ರಾಜಕೀಯ ವ್ಯಕ್ತಿಯನ್ನು ಆಯ್ಕೆ ಮಾಡಿರುವುದು ಸರಿಯಲ್ಲ. ಅಲ್ಲದೆ, ಪ್ರಶಸ್ತಿ ಆಯ್ಕೆ ಸಮಿತಿ ನಿಯಮಗಳನ್ನು ಗಾಳಿಗೆ ತೂರಿದೆ ಎಂಬ ಆರೋಪವೂ ಕೇಳಿಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News