ರಾಹುಲ್‌ ಗಾಂಧಿಯೇ ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿ: ಮಲ್ಲಿಕಾರ್ಜುನ ಖರ್ಗೆ

Update: 2018-10-23 14:26 GMT

ಕಲಬುರ್ಗಿ, ಅ.23: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯೇ ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿಯಾಗಿರಲಿದ್ದಾರೆ ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಹುಲ್‌ ಗಾಂಧಿಯನ್ನು ಮಹಾಘಟಬಂಧನ್‌ ನ ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸುವ ಸಾಧ್ಯತೆ ಕಡಿಮೆ ಎಂದು ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ನೀಡಿರುವ ಹೇಳಿಕೆ ವೈಯಕ್ತಿಕವಾದದ್ದು ಎಂದರು.

ಲೋಕಸಭಾ ಚುನಾವಣೆಗೆ ಇನ್ನೂ ಸಾಕಷ್ಟು ಕಾಲಾವಕಾಶವಿದೆ. ಮಹಾ ಮೈತ್ರಿಕೂಟ(ಮಹಾಘಟಬಂಧನ್)ದ ಪ್ರಧಾನಿ ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ಚುನಾವಣೆ ಸಂದರ್ಭದಲ್ಲಿ ನಿರ್ಧರಿಸಲಾಗುತ್ತದೆ ಎಂದು ಅವರು ಹೇಳಿದರು.

ಮಹಾಮೈತ್ರಿಕೂಟದ ಎಲ್ಲ ಪಕ್ಷಗಳ ಮುಖಂಡರು ಪರಸ್ಪರ ಚರ್ಚಿಸಿ, ಪ್ರಧಾನಿ ಅಭ್ಯರ್ಥಿಯನ್ನು ಅಂತಿಮಗೊಳಿಸುತ್ತಾರೆ. ಕಾಂಗ್ರೆಸ್ ಪಕ್ಷದವನಾದ ನನ್ನ ಪ್ರಕಾರ ನಮ್ಮ ಪಕ್ಷದ ಪ್ರಧಾನಿ ಅಭ್ಯರ್ಥಿ ಯಾರು ಎಂದು ಕೇಳಿದರೆ ರಾಹುಲ್‌ ಗಾಂಧಿ ಹೆಸರನ್ನೆ ಹೇಳುತ್ತೇನೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ದೇಶದಲ್ಲಿ ಕಾನೂನು ಮತ್ತು ಸಂವಿಧಾನದ ಆಶಯಗಳು, ಮೌಲ್ಯಗಳಿಗೆ ಗೌರವ ಕೊಡದ ಬಿಜೆಪಿಯನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸೋಲಿಸಿ, ಅಧಿಕಾರದಿಂದ ಕೆಳಗಿಳಿಸುವುದೇ ನಮ್ಮ ಗುರಿಯಾಗಿದೆ ಎಂದು ಅವರು ಹೇಳಿದರು.

ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನಾರನ್ನು ನೇರವಾಗಿ ನೇಮಿಸಲು ಕಾರಣವೇನು ಎಂಬುದರ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರಮೋದಿಗೆ ವೈಯಕ್ತಿಕವಾಗಿ ಪರಿಚಯವಿರುವ ವ್ಯಕ್ತಿ ರಾಕೇಶ್ ಅಸ್ತಾನಾ ಎಂದು ಆರೋಪಿಸಿದರು. ರಾಕೇಶ್ ಅಸ್ತಾನಾ ಮೂಲತಃ ಜಾರ್ಖಂಡ್ ರಾಜ್ಯದವರಾದರೂ, ಗುಜರಾತ್ ಕೇಡರ್‌ನ ಐಪಿಎಸ್ ಅಧಿಕಾರಿಯಾಗಿದ್ದಾರೆ. ಪ್ರಧಾನಮಂತ್ರಿ ಕಚೇರಿಯವರೇ ರಾಕೇಶ್ ಅಸ್ತಾನಾರನ್ನು ನೇರವಾಗಿ ನೇಮಕ ಮಾಡಿಕೊಂಡಿದ್ದಾರೆ ಎಂದು ಅವರು ದೂರಿದರು.

ಮಹಾರಾಷ್ಟ್ರ ರಾಜ್ಯದ ಕಾಂಗ್ರೆಸ್ ಉಸ್ತುವಾರಿಯನ್ನಾಗಿ ನನ್ನನ್ನು ನೇಮಕ ಮಾಡಲಾಗಿದೆ. ಅ.24ರಂದು ಮಹಾರಾಷ್ಟ್ರಕ್ಕೆ ಪ್ರಚಾರಕ್ಕೆ ಹೋಗುತ್ತಿದ್ದೇನೆ. ಸಮಯ ಹೊಂದಿಸಿಕೊಂಡು ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಯ ಪ್ರಚಾರದಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News