ಕಲ್ಲಿದ್ದಲು ಖರೀದಿಗೆ ಜಾಗತಿಕ ಟೆಂಡರ್: ಮುಖ್ಯಮಂತ್ರಿ ಕುಮಾರಸ್ವಾಮಿ

Update: 2018-10-25 15:24 GMT

ಬೆಂಗಳೂರು, ಅ. 25: ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಕುಮಾರಸ್ವಾಮಿ, 5 ಲಕ್ಷ ಮೆಟ್ರಿಕ್ ಟನ್ ಕಲ್ಲಿದ್ದಲು ಖರೀದಿಗೆ ಜಾಗತಿಕ ಟೆಂಡರ್ ಕರೆಯಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.

ಗುರುವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ರಾಜ್ಯದ ವಿದ್ಯುತ್ ಪರಿಸ್ಥಿತಿ ಕುರಿತು ಪರಾಮರ್ಶೆ ನಡೆಸಲು ಇಂಧನ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಪ್ರಸ್ತುತ ರಾಜ್ಯದ ಯಾವುದೇ ವಿದ್ಯುತ್ ಸರಬರಾಜು ಕಂಪೆನಿಯೂ ಲೋಡ್ ಶೆಡ್ಡಿಂಗ್ ಜಾರಿಗೊಳಿಸಿಲ್ಲ. ಮುಂದೆಯೂ ಲೋಡ್ ಶೆಡ್ಡಿಂಗ್ ಜಾರಿ ಮಾಡದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಕಲ್ಲಿದ್ದಲು ಸಿಗುವ ಭರವಸೆ: ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರದ ಒಪ್ಪಂದದಂತೆ ಕಲ್ಲಿದ್ದಲು ಪೂರೈಕೆಯಾಗಿಲ್ಲ. ಕೇಂದ್ರ ಸಚಿವರಿಗೆ ಪತ್ರ ಬರೆಯಲಾಗಿದೆ. ನಿರಂತರವಾಗಿ ಕೇಂದ್ರ ಕಲ್ಲಿದ್ದಲು ಸಚಿವಾಲಯದೊಂದಿಗೆ ಮುಖ್ಯ ಕಾರ್ಯದರ್ಶಿ ಸಂಪರ್ಕದಲ್ಲಿದ್ದಾರೆ. ಆದಷ್ಟು ಶೀಘ್ರವೇ ಕಲ್ಲಿದ್ದಲು ದೊರಕುವ ಭರವಸೆ ದೊರೆತಿದೆ ಎಂದು ಕುಮಾರಸ್ವಾಮಿ ಹೇಳಿದರು.

ಕಲ್ಲಿದ್ದಲು ಸಾಗಾಣಿಕೆಯೂ ಸಮರ್ಪಕವಾಗಿ ಆಗುವುದನ್ನು ಖಾತರಿಪಡಿಸಲು ಇಂದು ಮತ್ತೊಮ್ಮೆ ಕೇಂದ್ರ ಸಚಿವರಿಗೆ ಮನವಿ ಮಾಡಲಾಗುವುದು. ಕಲ್ಲಿದ್ದಲು ಪೂರೈಕೆಯನ್ನು ಹಾಗೂ ಕಲ್ಲಿದ್ದಲಿನ ಸಾಗಾಣಿಕೆ ಸಕಾಲದಲ್ಲಿ ಆಗುವುದನ್ನು ಖಾತರಿ ಪಡಿಸಲು ಕಲ್ಲಿದ್ದಲು ಸಚಿವಾಲಯ, ರೈಲ್ವೆ ಕೇಂದ್ರ ಕಚೇರಿಯಲ್ಲಿ ಕೆಪಿಟಿಸಿಎಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದರು. ಆದರೆ, ಈವರೆಗೆ ರಾಜ್ಯದಲ್ಲಿ ಇದರಿಂದಾಗಿ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ತೊಂದರೆಯಾಗದಂತೆ ಎಚ್ಚರ ವಹಿಸಲಾಗಿದೆ. ಪರ್ಯಾಯ ಮೂಲಗಳಿಂದ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದ ಅವರು, ಸೌರ ವಿದ್ಯುತ್ ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದನೆಯಾಗುತ್ತಿರುವುದರಿಂದ ಹಾಗೂ ಜಲ ವಿದ್ಯುತ್ ಮೂಲದಿಂದ ಈ ನಷ್ಟವನ್ನು ಸರಿದೂಗಿಸಲಾಗುತ್ತಿದೆ ಎಂದರು.

ಮುಂದಿನ ದಿನಗಳಲ್ಲಿಯೂ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಎಚ್ಚರ ವಹಿಸುವಂತೆ ಎಲ್ಲ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದ ಸಿಎಂ, ಇಂದು ಬೆಳಗ್ಗೆ 7526 ಮೆ.ವ್ಯಾ.ಬೇಡಿಕೆ ಇತ್ತು. ಪ್ರಸ್ತುತ ಘೋಷಿತ ಸಾಮರ್ಥ್ಯ 7982ರಿಂದ 12382 ಮೆ.ವ್ಯಾ., ವಿದ್ಯುತ್ ಲಭ್ಯತೆ 8240ದಿಂದ 12382 ಮೆ.ವ್ಯಾ. ಹಾಗೂ ರಾತ್ರಿ 8ರಿಂದ 10ಗಂಟೆಯ ವರೆಗೆ 8700 ಮೆ.ವ್ಯಾ.ವಿದ್ಯುತ್ ಲಭ್ಯವಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐಎನ್‌ಎಸ್ ಪ್ರಸಾದ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸೇರಿದಂತೆ ಕೆಪಿಸಿಎಲ್, ಕೆಪಿಟಿಸಿಎಲ್, ವಿದ್ಯುತ್ ಸರಬರಾಜು ಕಂಪೆನಿಗಳ ವ್ಯವಸ್ಥಾಪಕ ನಿರ್ದೇಶಕರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News