ಕುಳಾಯಿಯಲ್ಲಿ ಮೀನುಗಾರಿಕೆ ಬಂದರು ನಿರ್ಮಾಣ: ಸಚಿವ ಸಂಪುಟ ನಿರ್ಣಯ

Update: 2018-10-25 16:12 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಅ.25: ದಕ್ಷಿಣ ಕನ್ನಡ ಜಿಲ್ಲೆಯ ಕುಳಾಯಿಯಲ್ಲಿ 196.51 ಕೋಟಿ ರೂ.ಅಂದಾಜು ಮೊತ್ತದಲ್ಲಿ ಮೀನುಗಾರಿಕೆ ಬಂದರನ್ನು ನಿರ್ಮಿಸುವ ಕಾಮಗಾರಿಗೆ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ್ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಕೇಂದ್ರ ಸರಕಾರದಿಂದ ಶೇ.50ರಷ್ಟು(98.25 ಕೋಟಿ ರೂ.), ನವ ಮಂಗಳೂರು ಬಂದರು ನಿಗಮದಿಂದ ಶೇ.45ರಷ್ಟು(88.43 ಕೋಟಿ ರೂ.) ಹಾಗೂ ರಾಜ್ಯ ಸರಕಾರದಿಂದ ಶೇ.5ರಷ್ಟು(9.82 ಕೋಟಿ ರೂ.) ಪಾಲುದಾರಿಕೆಯೊಂದಿಗೆ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ಹೇಳಿದರು.

ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಮಹಿಳಾ ಸದಸ್ಯರೊಬ್ಬರನ್ನು ನೇಮಕ ಮಾಡಲು ತೀರ್ಮಾನಿಸಲಾಗಿದೆ. ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 450 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಯನ್ನು 141.20 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ರಾಜ್ಯ ವಿಧಾನಸಭೆಯ ಅಧಿವೇಶನವನ್ನು ಡಿಸೆಂಬರ್ ತಿಂಗಳಿನಲ್ಲಿ ಕರೆಯಲು ನಿರ್ಧರಿಸಲಾಗಿದ್ದು, ದಿನಾಂಕ ಹಾಗೂ ಎಷ್ಟು ದಿನಗಳ ಅಧಿವೇಶನ ನಡೆಸ ಬೇಕೆಂಬುದರ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಕೈಗೊಳ್ಳಲಾಗಿಲ್ಲ ಎಂದು ಬಂಡೆಪ್ಪ ಕಾಶೆಂಪೂರ್ ಹೇಳಿದರು.

ರಾಜ್ಯಾದ್ಯಂತ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಭೌಗೋಳಿಕ ಮಾಹಿತಿ ವ್ಯವಸ್ಥೆ Geographical Information System ಆಧಾರಿತ ಆಸ್ತಿ ಮಾಹಿತಿ ವ್ಯವಸ್ಥೆಯನ್ನು ಜಾರಿಗೊಳಿಸಲು ನಿರ್ಧರಿಸಲಾಗಿದೆ. ರಾಜ್ಯದ ನಗರ ಪ್ರದೇಶಗಳಲ್ಲಿ ಹೊಸದಾಗಿ 250 ಅಂಗನವಾಡಿ ಕೇಂದ್ರಗಳನ್ನು 17.50 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಸ್ಥಾಪಿಸಲು ಆನುಮೋದನೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ಬಜೆಟ್‌ನಲ್ಲಿ ಘೋಷಿಸಿದಂತೆ ಶೂನ್ಯ ಬಂಡವಾಳ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಪ್ರೋತ್ಸಾಹಿಸಲು ರೈತರಿಗೆ ತರಬೇತಿ ಶಿಬಿರಗಳನ್ನು ಆಯೋಜಿಸುವುದು ಸೇರಿದಂತೆ ಇನ್ನಿತರ ಕಾರ್ಯಕ್ರಮಗಳಿಗಾಗಿ 50 ಕೋಟಿ ರೂ.ಗಳನ್ನು ಬಳಸಿಕೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಬಂಡೆಪ್ಪ ಕಾಶೆಂಪೂರ್ ಹೇಳಿದರು.

ಭಡ್ತಿ ಮೀಸಲಾತಿ ಕಾಯ್ದೆ ಬಗ್ಗೆ ಇವತ್ತಿನ ಸಚಿವ ಸಂಪುಟ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೆಚ್ಚು ಚರ್ಚೆ ಮಾಡಿದರು. ಮುಖ್ಯಮಂತ್ರಿ ಸೇರಿದಂತೆ ಎಲ್ಲ ಸಚಿವರು ಈ ಬಗ್ಗೆ ಗಮನ ಹರಿಸಿದ್ದೇವೆ. ಸುಪ್ರೀಂಕೋರ್ಟ್‌ನಲ್ಲಿ ಸತತ ಮೂರು ದಿನಗಳಿಂದ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಮಂಗಳವಾರಕ್ಕೆ ವಿಚಾರಣೆ ಮುಂದೂಡಲಾಗಿದೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News