ಕಲಬುರ್ಗಿಯಲ್ಲಿ ಉರ್ದು ವಿವಿ ಸ್ಥಾಪನೆ ಪ್ರಸ್ತಾವನೆ ಕೈ ಬಿಟ್ಟ ರಾಜ್ಯ ಸರಕಾರ ?

Update: 2018-10-26 13:43 GMT

ಬೆಂಗಳೂರು, ಅ.26: ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ಅಭಿಪ್ರಾಯವನ್ನು ಪರಿಗಣಿಸಿ, ಹೈದರಾಬಾದ್-ಕರ್ನಾಟಕ ಭಾಗದ ಕಲಬುರ್ಗಿಯಲ್ಲಿ ಉರ್ದು ವಿಶ್ವವಿದ್ಯಾಲಯ ಸ್ಥಾಪನೆ ಮಾಡಬೇಕೆಂಬ ಪ್ರಸ್ತಾವನೆಯನ್ನು ರಾಜ್ಯ ಸರಕಾರ ಕೈ ಬಿಟ್ಟಿದೆ ಎಂದು ತಿಳಿದು ಬಂದಿದೆ.

ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಹೈದರಾಬಾದ್-ಕರ್ನಾಟಕ ಭಾಗದ ಮುಸ್ಲಿಂ ಜಾಗೃತ ಸಮಿತಿಯು ಕಲಬುರ್ಗಿಯಲ್ಲಿ ಉರ್ದು ವಿಶ್ವವಿದ್ಯಾಲಯ ಸ್ಥಾಪನೆ ಮಾಡುವಂತೆ ಮನವಿ ಸಲ್ಲಿಸಿತ್ತು. ಅದನ್ನು ಸಿದ್ದರಾಮಯ್ಯ ಉನ್ನತ ಶಿಕ್ಷಣ ಇಲಾಖೆಗೆ ರವಾನಿಸಿದ್ದರು.

ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಹಾಗೂ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳ ಸಭೆಯಲ್ಲಿ ಈ ಸಂಬಂಧ ಕೂಲಂಕಷವಾಗಿ ಚರ್ಚಿಸಿ ಉರ್ದು ವಿವಿ ಸ್ಥಾಪನೆಯ ಪ್ರಸ್ತಾವನೆಯನ್ನು ಕೈ ಬಿಡಲಾಗಿದೆ ಎಂದು ಹೇಳಲಾಗಿದೆ.

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿರುವ ಉರ್ದು ಕೋರ್ಸುಗಳಿಗೆ ಹೆಚ್ಚಿನ ಬೇಡಿಕೆ ಇಲ್ಲದೆ, ವಿದ್ಯಾರ್ಥಿಗಳ ಕೊರತೆಯನ್ನು ಎದುರಿಸಲಾಗುತ್ತಿದೆ. ಈ ನಡುವೆ ಉರ್ದುಗಾಗಿ ಪ್ರತ್ಯೇಕ ವಿಶ್ವವಿದ್ಯಾಲಯ ಆರಂಭಿಸುವ ಅಗತ್ಯ ಕಂಡು ಬರುತ್ತಿಲ್ಲ ಎಂದು ಉನ್ನತ ಶಿಕ್ಷಣ ಪರಿಷತ್ತಿನ ಅಧಿಕಾರಿಗಳು ಸರಕಾರಕ್ಕೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಉಪ ಕುಲಪತಿಗಳು ಹಾಗೂ ಉನ್ನತ ಶಿಕ್ಷಣ ಪರಿಷತ್ತಿನ ಸಭೆಯ ತೀರ್ಮಾನದಂತೆ ಉರ್ದು ವಿವಿಯನ್ನು ಆರಂಭಿಸುವ ಪ್ರಸ್ತಾವನೆಯನ್ನು ಕೈ ಬಿಟ್ಟಿರುವ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ, ರಾಜ್ಯದ ವಿವಿಗಳಲ್ಲಿ ಇರುವ ಉರ್ದು ವಿಭಾಗಗಳನ್ನು ಮತ್ತಷ್ಟು ಬಲಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕುಲಪತಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News