ಲೋಕಸಭಾ ಉಪ ಚುನಾವಣೆ ನಡೆಸದಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

Update: 2018-10-29 15:00 GMT

ಬೆಂಗಳೂರು, ಅ.29: ಬಳ್ಳಾರಿ, ಶಿವಮೊಗ್ಗ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಸದಂತೆ ನಿರ್ದೇಶಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.

ಉಪ ಚುನಾವಣೆ ನಡೆಸದಂತೆ ನಿರ್ದೇಶಿಸಲು ಕೋರಿ ಸಲ್ಲಿಕೆಯಾಗಿರುವ ಮೂರು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಮತ್ತು ನ್ಯಾಯಮೂರ್ತಿ ಸುಜಾತ ಅವರಿದ್ದ ವಿಭಾಗೀಯ ನ್ಯಾಯಪೀಠ, ಅರ್ಜಿಯನ್ನು ವಜಾಗೊಳಿಸಿದೆ.

ರಾಜ್ಯ ವಿಧಾನಸಭೆಗೆ ಸ್ಪರ್ಧಿಸಲಿಕ್ಕಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಬಿ.ಎಸ್ ಯಡಿಯೂರಪ್ಪ, ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಿ.ಎಸ್ ಪುಟ್ಟರಾಜು ಹಾಗೂ ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಶ್ರೀರಾಮುಲು ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ, ಈ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ತೀರ್ಮಾನಿಸಿ ನ.3 ಕ್ಕೆ ದಿನಾಂಕವನ್ನು ನಿಗದಿ ಮಾಡಿದೆ.

ಆದರೆ, 2019ರ ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಹೀಗಾಗಿ ಉಪ ಚುನಾವಣೆ ನಡೆಸುವುದು ಅನವಶ್ಯಕ ಹಾಗೂ ಸಾರ್ವಜನಿಕ ಹಣ ಪೋಲಾಗುತ್ತದೆ. ಹೀಗಾಗಿ, ಚುನಾವಣೆ ನಡೆಸದಂತೆ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ವಕೀಲರಾದ ರಮೇಶ್ ನಾಯಕ್ ಮತ್ತು ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ಒಳಗೊಂಡು ಮೂವರು ಪ್ರತ್ಯೇಕ ಪಿಐಎಲ್ ಸಲ್ಲಿಸಿದ್ದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಲೋಕಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಸದಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News