ಅ.31: ರಾಜ್ಯೋತ್ಸವ ಪುರಸ್ಕೃತರ ಪಟ್ಟಿ ಬಿಡುಗಡೆ
ಬೆಂಗಳೂರು, ಅ.30: ಕರ್ನಾಟಕ ಸರಕಾರ ಪ್ರತಿಷ್ಠಿತ ಪ್ರಶಸ್ತಿಯಾದ ‘ಕನ್ನಡರಾಜ್ಯೋತ್ಸವ ಪ್ರಶಸ್ತಿ’ಗೆ ಅರ್ಹರಾದವರ ಪಟ್ಟಿಯನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯ ಸಮಿತಿ ಅ.31ರಂದು ಬಿಡುಗಡೆ ಮಾಡಲಾಗುತ್ತದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ನ.1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಸೇರಿದಂತೆ ಹಲವು ಗಣ್ಯರು ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ 63 ಜನ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಉನ್ನತ ಮೂಲಗಳಿಂದ ಮಾಹಿತಿ ದೊರಕಿದೆ.
ಈಗಾಗಲೇ ಮುಖ್ಯಮಂತ್ರಿ, ಸಚಿವರಿಗೆ ಪ್ರಶಸ್ತಿ ಆಕಾಂಕ್ಷಿಗಳು ಅರ್ಜಿಗಳನ್ನು ಸಲ್ಲಿಸಿದ್ದು, ಪ್ರಶಸ್ತಿಗಾಗಿ ತಮ್ಮದೇ ರೀತಿಯಲ್ಲಿ ಪ್ರಭಾವ ಬೀರುವ ಪ್ರಯತ್ನವನ್ನು ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಹಲವು ಮೂಲಗಳಿಂದ ಅರ್ಜಿಗಳು ಬಂದಿದೆ. ಹೀಗಾಗಿ, ಸಚಿವೆ ಜಯಮಾಲ ಸೇರಿದಂತೆ ಆಯ್ಕೆ ಸಮಿತಿಯು ಅರ್ಹ 63 ಜನರನ್ನು ಆಯ್ಕೆ ಮಾಡಲು ಕಸರತ್ತು ನಡೆಸಿದ್ದಾರೆ.
ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಅಂತಿಮಗೊಳಿಸುವ ಸಂಬಂಧ ಈಗಾಗಲೇ ಸಭೆ ನಡೆಸಿದ್ದು, ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆಯುವ ಆಯ್ಕೆ ಸಮಿತಿ ಸಭೆಯಲ್ಲಿ ಪ್ರಶಸ್ತಿ ಪುರಸ್ಕೃತರನ್ನು ಅಂತಿಮಗೊಳಿಸಲಾಗುತ್ತದೆ. ರಾಜ್ಯ ವಿಧಾನಸಭೆ ಹಾಗೂ ಲೋಕಸಭೆ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಹಾಗೂ ಸಚಿವರು ತೊಡಗಿಕೊಂಡಿರುವುದರಿಂದ ಆಯ್ಕೆ ಸಮಿತಿ ನಡೆಯುವುದು ವಿಳಂಬವಾಗಿದೆ ಎಂದು ಮೂಲಗಳು ಹೇಳಿವೆ.
ಮುಖ್ಯಮಂತ್ರಿ ಅಧ್ಯಕ್ಷತೆಯ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಇಲಾಖೆ ಸಚಿವೆ ಡಾ.ಜಯಮಾಲಾ, ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ, ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ್, ಕಸಾಪ ಅಧ್ಯಕ್ಷ ಡಾ.ಮನು ಬಳಿಗಾರ್ ಸೇರಿದಂತೆ ವಿವಿಧ ಅಕಾಡೆಮಿಗಳ ಅಧ್ಯಕ್ಷರು ಹಾಗೂ ಇಲಾಖೆಯ ಕಾರ್ಯದರ್ಶಿಗಳಿದ್ದಾರೆ.