×
Ad

ಸಫಾಯಿ ಕರ್ಮಚಾರಿಗಳ ಹಿತರಕ್ಷಣೆ ಎಲ್ಲಾ ಇಲಾಖೆಗಳ ಹೊಣೆ: ಜಗದೀಶ್ ಹಿರೇಮನಿ

Update: 2018-10-30 23:31 IST

ಚಿಕ್ಕಮಗಳೂರು, ಅ.30: ಸಫಾಯಿ ಕರ್ಮಚಾರಿಗಳ ಜೀವನ ಮಟ್ಟ ಸುಧಾರಣೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೂಪಿಸಿರುವ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಅಯೋಗದ ಸದಸ್ಯ ಜಗದೀಶ್ ಹಿರೇಮನಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಪದ್ದತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ 2013ರ ಕಾಯ್ದೆ ಅನುಷ್ಠಾನದ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ಸಫಾಯಿ ಕರ್ಮಚಾರಿಗಳ ಹಿತರಕ್ಷಣೆ ಎಲ್ಲಾ ಅನುಷ್ಠಾನ ಇಲಾಖೆಗಳ ಹೊಣೆ. ಸ್ವಚ್ಛತಾ ಸೇವೆ ಅಮೂಲ್ಯವಾದದ್ದು, ಅದರಲ್ಲಿ ತೊಡಗಿರುವ ಸಿಬ್ಬಂದಿಗೆ ಮೂಲಭೂತ ಸೌಕರ್ಯಗಳನ್ನು ನ್ಯಾಯಯುತವಾಗಿ ಒದಗಿಸಿ ಎಂದು ಹೇಳಿದರು.

ಸಫಾಯಿ ಕರ್ಮಚಾರಿಗಳು ಸ್ವಚ್ಛತಾ ಕಾರ್ಯಕ್ರಮದಲ್ಲಿ ತೊಡಗಿರುವುದರಿಂದ ಆಗಾಗ ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಹೀಗಾಗಿ ಅವರಿಗೆ ಕಡ್ಡಾಯವಾಗಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಬೇಕಲ್ಲದೆ ಪಿಎಫ್ ಮತ್ತು ಇ.ಎಸ್.ಐ ಸೌಲಭ್ಯ ದೊರೆಯಬೇಕು. ಈ ಹಿಂದೆ ಹೊರಗುತ್ತಿಗೆ ಸೇವೆ ಒದಗಿಸಿದ ಸಂಸ್ಥೆಗಳಿಗೆ ನೋಟೀಸ್ ಜಾರಿಗೊಳಿಸಿ ಕಳೆದ ಐದು ವರ್ಷಗಳಲ್ಲಿ ಪಿ.ಎಫ್ ಹಣ ಜಮಾ ಮಾಡಿರುವುದನ್ನು ಖಾತರಿಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಖಾಯಂ ಆಗಿರದ ಸಫಾಯಿ ಕರ್ಮಚಾರಿಗಳಿಗೆ ಸಮಾನ ವೇತನ ನೀಡಬೇಕು. 2022 ರ ವೇಳೆಗೆ ಪ್ರತಿಯೊಬ್ಬರಿಗೂ ಸ್ವಂತ ಮನೆ ಕಲ್ಪಿಸಬೇಕೆನ್ನುವುದು ಸರ್ಕಾರದ ಆಶಯವಾಗಿದ್ದು, ಸ್ವಂತ ಮನೆ ಹೊಂದಿಲ್ಲದ ಸಫಾಯಿ ಕರ್ಮಚಾರಿಗಳನ್ನು ಗುರುತಿಸಿ ಅವರಿಗೆ ಸ್ವಂತ ಮನೆ ನಿರ್ಮಿಸಿಕೊಳ್ಳಲು ಸರ್ಕಾರದ ವಿವಿಧ ಯೋಜನೆಗಳಲ್ಲಿ ಮನೆ ನಿರ್ಮಿಸಿಕೊಡಬೇಕು ಎಂದ ಅವರು, ಮಕ್ಕಳಿಗೆ ಉಚಿತ ಶಿಕ್ಷಣ ನೀಡಬೇಕು. 18 ವರ್ಷ ತುಂಬಿದ ಅವರ ಮಕ್ಕಳಿಗೆ ಸ್ವಂತ ಉದ್ಯೋಗ ಕೈಗೊಳ್ಳಲು ಅಂಬೇಡ್ಕರ್ ಅಭಿವೃದ್ದಿ ನಿಗಮದಿಂದ 20 ಲಕ್ಷಗಳ ವರೆಗೆ ಶೇ.3ರ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು ಎಂದರು.

ಇದೇ ವೇಳೆ ಅವರು ವಿವಿಧ ನಗರ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಫಾಯಿ ಕರ್ಮಚಾರಿಗಳಿಗೆ ನೀಡಲಾಗುತ್ತಿರುವ ಸೌಲಭ್ಯ, ವಸತಿ, ಆರೋಗ್ಯ ತಪಾಸಣೆ ವಿಷಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಜಿಲ್ಲಾಧಿಕಾರಿ ಎಂ.ಕೆ ಶ್ರಿರಂಗಯ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಪ್ಪನಾಯಕ್, ಅಪರ ಜಿಲ್ಲಾಧಿಕಾರಿ ಶಿವಕುಮಾರ್, ಜಿಲ್ಲಾ ಪಂ. ಉಪಕಾರ್ಯದರ್ಶಿ ರಾಜಗೋಪಾಲ್ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನಪ್ಪ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ್, ನಗರಸಭೆ ಪೌರಾಯುಕ್ತ ತುಷಾರಮಣಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News