ದೀಪಾವಳಿ: ಕೆಎಸ್ಸಾರ್ಟಿಸಿಯಿಂದ 1500 ಹೆಚ್ಚುವರಿ ಬಸ್ ವ್ಯವಸ್ಥೆ

Update: 2018-10-31 15:09 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಅ. 31: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) ನ.2ರಿಂದ 5ರ ವರೆಗೆ ಬೆಂಗಳೂರು ನಗರದಲ್ಲಿ ರಾಜ್ಯದ ವಿವಿಧೆಡೆಗೆ ಹಾಗೂ ನ.11ರಂದು ರಾಜ್ಯದ ವಿವಿಧೆಡೆಗಳಿಂದ ಬೆಂಗಳೂರಿಗೆ 1500 ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿಗೆ ವಿಶೇಷ ಬಸ್ ಕಾರ್ಯಾಚರಣೆ ಮಾಡಲಿವೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ರಾಜಪೇಟೆ, ಕುಶಾಲನಗರ, ಮಡಿಕೇರಿ, ತಮಿಳುನಾಡು ಮತ್ತು ಆಂಧ್ರಪ್ರದೇಶ/ತೆಲಂಗಾಣ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರ್ ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಹೋಗುವ ಬಸ್‌ಗಳು ಶಾಂತಿನಗರದಿಂದ ವಿಶೇಷ ಕಾರ್ಯಾಚರಣೆ ಮಾಡಲಿವೆ.

ನಗರದ ಬಸವೇಶ್ವರ ಬಸ್ ನಿಲ್ದಾಣ, ವಿಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್(ರಾಜಾಜಿನಗರ), ಮಲ್ಲೇಶ್ವರಂ 18ನೆ ಅಡ್ಡರಸ್ತೆ, ಬನಶಂಕರಿ, ಜೀವನ್‌ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ, ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೇಸುಬ್ರಮಣ್ಯಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.

ಇ-ಟಿಕೆಟ್ ಬುಕ್ಕಿಂಗ್‌ನ್ನು www.ksrtc.in ವೆಬ್‌ಸೈಟ್ ಮುಖಾಂತರ ಮಾಡಬಹುದು. ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ 707 ಗಣಕೀಕೃತ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದು.

ನಾಲ್ಕು ಅಥವಾ ಅದಕ್ಕೂ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇ.5ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಬರುವ ಪ್ರಯಾಣದ ಟಿಕೆಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ. 10ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಸಂಸ್ಥೆ ಹೇಳಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News