ಬೆಂಗಳೂರಿನಲ್ಲಿ ಹೊಸ ವಾಹನಗಳ ನೋಂದಣಿ ರದ್ದತಿಗೆ ಚಿಂತನೆ: ಡಿಸಿಎಂ ಪರಮೇಶ್ವರ್

Update: 2018-11-02 13:34 GMT

ಬೆಂಗಳೂರು, ನ.2: ನಗರದಲ್ಲಿ ವಾಯು ಮಾಲಿನ್ಯ ಮಿತಿ ಮೀರುವ ಮುನ್ನವೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ನಗರದಲ್ಲಿ ಹೊಸ ವಾಹನಗಳ ನೋಂದಣಿ ರದ್ದುಪಡಿಸಲು ಸರಕಾರ ಚಿಂತನೆ ನಡೆಸಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಶುಕ್ರವಾರ ಮಲ್ಲೇಶ್ವರದ ಐಪಿಪಿ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ವಾಯು ಮಾಲಿನ್ಯ ಪ್ರಮಾಣ ಹೆಚ್ಚಾಗಿದೆ. ಹೀಗಾಗಿ ಮುಂದಿನ ಎರಡು ಮೂರು ವರ್ಷ ಹೊಸ ವಾಹನಗಳ ನೋಂದಣಿ ರದ್ದುಪಡಿಸುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ ಈಗಾಗಲೇ 70 ಲಕ್ಷ ಮೀರಿದ್ದು, ನಿತ್ಯ ಸಾವಿರಾರು ವಾಹನಗಳು ರಸ್ತೆಗಿಳಿಯುತ್ತಿವೆ. ಇದರಿಂದಾಗಿ ನಗರದಲ್ಲಿ ವಾಹನ ದಟ್ಟಣೆ ಹಾಗೂ ವಾಯುಮಾಲಿನ್ಯ ಉಂಟಾಗುತ್ತಿರುವ ಕುರಿತು ವರದಿ ಬಂದಿದೆ. ಅದರಂತೆ ಸಾರಿಗೆ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ, ಬಿಬಿಎಂಪಿ ಹಾಗೂ ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ದೇಶದ ರಾಜಧಾನಿ ದಿಲ್ಲಿ ಮಾದರಿಯಲ್ಲಿ ಬೆಂಗಳೂರಿನ ವಾತಾವರಣವೂ ಹಾಳಾಗಬಾರದು ಎಂಬ ಉದ್ದೇಶದಿಂದ ಹೊಸ ವಾಹನಗಳ ನೋಂದಣಿ ರದ್ದುಪಡಿಸುವುದರೊಂದಿಗೆ, ಎಲೆಕ್ಟ್ರಿಕಲ್ ವಾಹನಗಳ ಬಳಕೆಗೆ ಪ್ರೋತ್ಸಾಹ ನೀಡಲಾಗುವುದು. ಜತೆಗೆ ಬಿಎಂಟಿಸಿ ಬಸ್‌ಗಳ ಸಂಖ್ಯೆಯಲ್ಲಿಯೂ ಎಲೆಕ್ಟ್ರಿಕಲ್ ಬಸ್‌ಗಳನ್ನು ಹೆಚ್ಚಿಸಲಾಗುವುದು. ಇದರೊಂದಿಗೆ 15-20 ವರ್ಷಕ್ಕಿಂತ ಹಳೆಯ ವಾಹನಗಳನ್ನು ನಗರದಲ್ಲಿ ನಿಷೇಧಿಸುವ ಬಗ್ಗೆಯೂ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ನೀಡಿದ್ದು, ಆ ಕುರಿತು ಕ್ರಮಕೈಗೊಳ್ಳಲಾಗುವುದು ಎಂದು ಪರಮೇಶ್ವರ್ ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News