×
Ad

ಸಾಲಮನ್ನಾ ಯೋಜನೆ: ಸೇಡಂ, ದೊಡ್ಡಬಳ್ಳಾಪುರ ತಾಲೂಕುಗಳಲ್ಲಿ ಪ್ರಾಯೋಗಿಕವಾಗಿ ಜಾರಿ

Update: 2018-11-05 19:35 IST

ಬೆಂಗಳೂರು, ನ.5: ಸಾಲಮನ್ನಾ ಯೋಜನೆಯ ಅನುಷ್ಠಾನದ ಪ್ರಗತಿಯನ್ನು ನಿರಂತರವಾಗಿ ಖುದ್ದು ಪರಿಶೀಲಿಸುತ್ತಿದ್ದು, ಅಧಿಕಾರಿಗಳ ತಂಡ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಯೋಜನೆಯ ವ್ಯಾಪ್ತಿಗೆ ಬರುವ ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. 

ಭೂ ದಾಖಲೆಗಳು ಮತ್ತು ಸರ್ವೇಕ್ಷಣಾ ಇಲಾಖೆಯ ಆಯುಕ್ತ ಮುನೀಶ್ ಮೌದ್ಗಿಲ್ ನೇತೃತ್ವದ ತಂಡವು ಸಾಲಮನ್ನಾ ಯೋಜನೆಗಾಗಿ ವಿಶೇಷ ತಂತ್ರಾಂಶ ರೂಪಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಜಾರಿಗೊಳಿಸಲು ಕ್ರಮ ವಹಿಸಲಾಗುತ್ತಿದೆ. ಸಾಲಮನ್ನಾ ಯೋಜನೆಗೆ ಅರ್ಹತೆ ಪಡೆದ ರೈತರು ಯಾರೂ ಗಾಬರಿಯಾಗಬೇಕಾಗಿಲ್ಲ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಪ್ರಸ್ತುತ ರಾಷ್ಟ್ರೀಕೃತ ಬ್ಯಾಂಕುಗಳು ಕೃಷಿಸಾಲ ಪಡೆದ ರೈತರ ಮಾಹಿತಿ ಒದಗಿಸಿದ್ದು, ಈ ಮಾಹಿತಿಯನ್ನು ಸರಕಾರ ಅಭಿವೃದ್ಧಿಪಡಿಸಿದ ತಂತ್ರಾಂಶದಲ್ಲಿ ಅಳವಡಿಸಿ, ಪರಿಶೀಲನೆ ನಡೆಸಲಾಗುತ್ತಿದೆ. ಮೊದಲಿಗೆ ಸೇಡಂ ಮತ್ತು ದೊಡ್ಡಬಳ್ಳಾಪುರ ತಾಲೂಕುಗಳಲ್ಲಿ ನವೆಂಬರ್ 5 ರಿಂದ ಪ್ರಾಯೋಗಿಕವಾಗಿ ಸಾಲಮನ್ನಾ ಪ್ರಕ್ರಿಯೆ ಪ್ರಾರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ

ಈ ತಾಲೂಕುಗಳ ಬ್ಯಾಂಕುಗಳ ಶಾಖೆಗಳು ಮಾಹಿತಿ ಪರಿಶೀಲನೆ ಪೂರ್ಣಗೊಳಿಸಿದ ನಂತರ ನವೆಂಬರ್ 12 ರಿಂದ ರೈತರು ತಾವು ಸಾಲ ಪಡೆದ ಬ್ಯಾಂಕಿಗೆ ಭೇಟಿ ನೀಡಿ ಆಧಾರ್ ಕಾರ್ಡ್, ಪಡಿತರ ಚೀಟಿ ಮತ್ತು ಅವರು ಹೊಂದಿರುವ ಕೃಷಿ ಭೂಮಿಯ ಮಾಹಿತಿ ಒದಗಿಸುವಂತೆ ಸೂಚಿಸಲಾಗುವುದು. ನಂತರ ಇತರ ತಾಲೂಕುಗಳಲ್ಲಿ ಈ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಸಹಕಾರಿ ಬ್ಯಾಂಕುಗಳಲ್ಲಿ ಈಗಾಗಲೇ ಮಾಹಿತಿ ಪರಿಶೀಲನಾ ಪ್ರಕ್ರಿಯೆ ಆರಂಭವಾಗಿದ್ದು, ನವೆಂಬರ್ ಅಂತ್ಯದೊಳಗೆ 6 ಸಾವಿರ ಶಾಖೆಗಳ 20 ಲಕ್ಷ ರೈತರ ಮಾಹಿತಿ ಪರಿಶೀಲನೆ ನಡೆಸಲಾಗುವುದು. ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಈ ಯೋಜನೆಯ ಅನುಷ್ಠಾನಕ್ಕೆ ನೋಡಲ್ ಅಧಿಕಾರಿಗಳಾಗಿರುತ್ತಾರೆ. ಈ ಯೋಜನೆ ಕುರಿತು ರೈತರ ಸಂದೇಹಗಳನ್ನು ಬಗೆಹರಿಸಲು ಶೀಘ್ರವೇ ಸಹಾಯವಾಣಿ ಪ್ರಾರಂಭಿಸಲಾಗುವುದು ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News