ನ. 6ರಂದು ಮತಎಣಿಕೆ: ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ
ಉಡುಪಿ, ನ.5: ಶನಿವಾರ ನಡೆದ ಶಿವಮೊಗ್ಗ ಲೋಕಸಭಾ ಉಪಚುನಾವಣೆ ಸಂಬಂಧಿಸಿ ಮತ ಎಣಿಕೆಯು ನಾಳೆ ನ.6ರಂದು ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯಲಿದೆ.
ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಣೆಗೊಂಡಾಗ, ಗೆಲುವು ಸಾಧಿಸಿದ ಹಾಗೂ ಪರಾಜಿತ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ ಸಾಧ್ಯತೆಯ ಹಿನ್ನೆಲೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನ.6ರ ಬೆಳಗ್ಗೆ 6 ಗಂಟೆಯಿಂದ ನ.7ರ ಬೆಳಗ್ಗೆ 6 ಗಂಟೆಯವರೆಗೆ ಸೆಕ್ಷನ್ 144ರನ್ವಯ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದೆ.
ಪ್ರತಿಬಂಧಕಾಜ್ಞೆ ಜಾರಿ ಇರುವ ಸಂದರ್ಭದಲ್ಲಿ ಬೈಂದೂರು ವಿಧಾನಸಬಾ ಕ್ಷೇತ್ರ ವ್ಯಾಪ್ತಿಯಲ್ಲಿ, ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿ ಸಲಾಗಿದೆ. ಅಲ್ಲದೇ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸಾರ್ವಜನಿಕ ಸಭೆ, ಸಮಾರಂಭ, ಮೆರವಣಿಗೆ, ವಿಜಯೋತ್ಸವ, ಕರಾಳೋತ್ಸವ, ಪ್ರತಿಭಟನಾ ಮೆವಣಿಗೆಯನ್ನು ಸಹ ನಿಷೇಧಿಸಲಾಗಿದೆ.
ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಯಾವುದೇ ಮಾರಕಾಯುಧ ಗಳನ್ನು ಹೊಂದಿರುವುದನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.