ಟಿಪ್ಪು ಜಯಂತಿ ಶಾಂತಿಯುತ ಆಚರಣೆಗೆ ಅಗತ್ಯ ಕ್ರಮ: ಕೊಡಗು ಉಸ್ತುವಾರಿ ಸಚಿವ ಸಾ.ರಾ.ಮಹೇಶ್

Update: 2018-11-07 12:46 GMT

ಮಡಿಕೇರಿ, ನ.7: ಜಿಲ್ಲಾಡಳಿತ ವತಿಯಿಂದ ಇದೇ ನ.10 ರಂದು ನಡೆಯುವ ಟಿಪ್ಪು ಜಯಂತಿ ಕಾರ್ಯಕ್ರಮವನ್ನು ಶಾಂತಿಯುತವಾಗಿ ಆಚರಿಸುವ ನಿಟ್ಟಿನಲ್ಲಿ ಇದುವರೆಗೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ.ಮಹೇಶ್ ಅವರು ಮಾಹಿತಿ ಪಡೆದರು.   

ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಟಿಪ್ಪು ಜಯಂತಿ ಆಚರಣೆ ಸಂಬಂಧ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗಳು ಕೈಗೊಂಡಿರುವ ಸೂಕ್ತ ಬಂದೋಬಸ್ತ್ ಬಗ್ಗೆ ದಕ್ಷಿಣ ವಲಯ ಐಜಿಪಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಂದ ಜಿಲ್ಲಾ ಉಸ್ತುವಾರಿ ಸಚಿವರು ಮಾಹಿತಿ ಪಡೆದರು. 

ಕಾನೂನು ಸುವ್ಯವಸ್ಥೆಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಯಾರ ಮನಸ್ಸಿಗೂ ನೋವು ಉಂಟಾಗಬಾರದು, ಆ ನಿಟ್ಟಿನಲ್ಲಿ ಸರ್ಕಾರದ ನಿರ್ದೇಶನದಂತೆ ಟಿಪ್ಪು ಜಯಂತಿ ಆಚರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.    

ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ನಗರಸಭಾ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ, ಐಜಿಪಿ ಶರತ್‍ ಚಂದ್ರ, ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರವೀಣ್ ಕುಮಾರ್, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ ಇತರರ ಉಪಸ್ಥಿತಿಯಲ್ಲಿ ಸಭೆ ನಡೆಯಿತು.   

ಮುಖ್ಯಮಂತ್ರಿಗಳ ಗಮನಕ್ಕೆ
ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು, ಸರ್ಕಾರದ ವತಿಯಿಂದ ಅನೇಕ ಜಯಂತಿಗಳನ್ನು ಆಚರಣೆ ಮಾಡಲಾಗುತ್ತಿದೆ. ಅದೇ ರೀತಿ ಟಿಪ್ಪು ಜಯಂತಿಯನ್ನು ಶಾಂತಿಯುತವಾಗಿ ಆಚರಿಸಲಾಗುವುದು. ಆ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ ಎಂದು ಸಚಿವರು ತಿಳಿಸಿದರು.    

ಟಿಪ್ಪು ಜಯಂತಿಯನ್ನು ಶಾಂತಿಯುತವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲಾ ಸಂಘಟನೆಗಳು ಹಾಗೂ ಸಮಾಜಗಳು ಸಹಕರಿಸುವಂತೆ ಕೋರಿದ ಸಚಿವರು, ಯಾರ ಮನಸ್ಸಿಗೂ ನೋವಾಗದಂತೆ ಜಯಂತಿಯನ್ನು ಆಚರಿಸಲಾಗುವುದು. ಶಾಂತಿ ಕದಡುವವರ ವಿರುದ್ಧ ಜಿಲ್ಲಾಡಳಿತ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ ಎಂದು ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.  

ಕೊಡಗು ಜಿಲ್ಲೆಯಲ್ಲಿ ಟಿಪ್ಪು ಜಯಂತಿ ಆಚರಣೆ ಸಂಬಂಧ ಸಾಕಷ್ಟು ವಿರೋಧವಿದೆಯಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು ಸರ್ಕಾರದ ನಿರ್ದೇಶನದಂತೆ ಜಯಂತಿ ನಡೆಯಲಿದೆ ಎಂದರು. ಮುಖ್ಯಮಂತ್ರಿಯವರು ಈ ಹಿಂದೆ ನೀಡಿರುವ ಹೇಳಿಕೆ ಬಗ್ಗೆ ಗಮನ ಸೆಳೆದ ಪತ್ರಕರ್ತರು, ಈ ಬಗ್ಗೆ ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದು ಸಚಿವರು ಪ್ರತಿಕ್ರಿಯಿಸಿದರು.   

1500 ಪೊಲೀಸರ ನಿಯೋಜನೆ
ದಕ್ಷಿಣ ವಲಯ ಐಜಿಪಿ ಶರತ್‍ಚಂದ್ರ ಅವರು ಮಾತನಾಡಿ, ಟಿಪ್ಪು ಜಯಂತಿಯನ್ನು ಶಾಂತಿಯುತವಾಗಿ ಆಚರಿಸುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಈಗಾಗಲೇ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣಾ ಹಂತದಲ್ಲಿ ಶಾಂತಿ ಸಭೆ ನಡೆಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.        

ಜಿಲ್ಲೆಯಲ್ಲಿ ಟಿಪ್ಪು ಜಯಂತಿಯನ್ನು ಶಾಂತಿಯುತವಾಗಿ ಆಚರಿಸುವ ನಿಟ್ಟಿನಲ್ಲಿ 1500 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗುವುದು. ಜೊತೆಗೆ ಪೊಲೀಸ್ ರ್ಯಾಪಿಡ್ ರೆಸ್ಪಾನ್ಸ್ ತಂಡವನ್ನು ನಿಯೋಜಿಸಲಾಗುವುದು. ಚೆಕ್‍ಪೋಸ್ಟ್ ಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗುವುದು. ಕಾನೂನಿಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶರತ್ ಚಂದ್ರ ಅವರು ತಿಳಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News