ಟಿಪ್ಪು ಜಯಂತಿ ಆಚರಣೆ ರದ್ದುಕೋರಿ ಹೈಕೋರ್ಟ್‌ಗೆ ಮತ್ತೊಂದು ಅರ್ಜಿ ಸಲ್ಲಿಕೆ

Update: 2018-11-07 12:57 GMT

ಬೆಂಗಳೂರು, ನ.7: ಸರಕಾರದ ವತಿಯಿಂದ ರಾಜ್ಯಾದ್ಯಂತ ಟಿಪ್ಪು ಸುಲ್ತಾನ್ ಜಯಂತಿ ಆಚರಿಸುವ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹೊರಡಿಸಿರುವ ಆದೇಶ ರದ್ದುಕೋರಿ ಹೈಕೋರ್ಟ್‌ಗೆ ಮತ್ತೊಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಕೆಯಾಗಿದೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ 2017ರಲ್ಲಿ ಪಿಐಎಲ್ ಸಲ್ಲಿಸಿದ್ದ ಮಡಿಕೇರಿಯ ಹೈಸೊಲ್ದೂರು ನಿವಾಸಿ ಕೆ.ಪಿ. ಮಂಜುನಾಥ್, ಇದೀಗ ಮತ್ತೊಂದು ಪಿಐಎಲ್ ಸಲ್ಲಿಸಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ 2016ರ ಸೆ.20ರಂದು ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ.

ಟಿಪ್ಪು ಜಯಂತಿ ಆಚರಣೆ ಪ್ರಶ್ನಿಸಿ ಈ ಹಿಂದೆ ಸಲ್ಲಿಸಿರುವ ಪಿಐಎಲ್ ಹೈಕೋರ್ಟ್‌ನಲ್ಲಿ ಇನ್ನೂ ವಿಚಾರಣೆಗೆ ಬಾಕಿ ಇದೆ. ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ವಿಲವಾಗಿದ್ದ ಸರಕಾರಕ್ಕೆ ನ್ಯಾಯಾಲಯ 1 ಸಾವಿರ ದಂಡವನ್ನೂ ವಿಧಿಸಿದೆ. ಹೀಗಿದ್ದರೂ ಈ ವರ್ಷ ಟಿಪ್ಪು ಜಯಂತಿ ಆಚರಿಸುವ ಸಂಬಂಧ 2018ರ ನ.2ರಂದು ಆದೇಶ ಹೊರಡಿಸಲಾಗಿದೆ. ಹೀಗಾಗಿ ಟಿಪ್ಪು ಜಯಂತಿ ಆಚರಣೆಗೆ ತಡೆ ನೀಡಬೇಕು ಹಾಗೂ ತಮ್ಮ ಸ್ವಂತ ಜಿಲ್ಲೆಯಾದ ಕೊಡಗಿನಲ್ಲಿ ಟಿಪ್ಪು ಜಯಂತಿ ಆಚರಿಸದಂತೆ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಬೇಕೆಂದು ಕೋರಿದ್ದಾರೆ.

ಸರಕಾರದ ಮುಖ್ಯ ಕಾರ್ಯದರ್ಶಿ, ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು ಹಾಗೂ ಕೊಡಗು ಜಿಲ್ಲಾಧಿಕಾರಿಯನ್ನು ಅರ್ಜಿಯಲ್ಲಿ ಪ್ರತಿವಾದಿಯನ್ನಾಗಿಸಲಾಗಿದ್ದು, ನ್ಯಾಯಾಲಯದ ಮುಂದೆ ವಿಚಾರಣೆಗೆ ಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News