ಡಿ.8: ಕೋಟದಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳ ಸದಸ್ಯರ ಕ್ರೀಡಾಕೂಟ 'ಹೊಳಪು-2018'

Update: 2018-11-07 14:07 GMT

ಉಡುಪಿ, ನ.7: ಕೋಟತಟ್ಟು ಗ್ರಾಪಂ ಹಾಗೂ ಡಾ.ಶಿವರಾಮ ಕಾರಂತ ಪ್ರತಿಷ್ಠಾನ ಕೋಟ ಇವುಗಳ ಜಂಟಿ ಆಶ್ರಯದಲ್ಲಿ ಡಾ.ಶಿವರಾಮ ಕಾರಂತ ಜನ್ಮದಿನೋತ್ಸವದ ಅಂಗವಾಗಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಪಂಚಾಯತ್‌ರಾಜ್ ಹಾಗೂ ನಗರ ಸ್ಥಳೀಯಾಡಳಿತ ಪ್ರತಿನಿಧಿಗಳ ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕ ಸ್ಪರ್ಧೆ 'ಹೊಳಪು-2018' ಡಿ.8ರಂದು ಕೋಟದ ವಿವೇಕ ಪ್ರೌಢ ಶಾಲೆಯ ಕ್ರೀಡಾಂಗಣದಲ್ಲಿ ಬೆಳಗ್ಗೆ 8:30ರಿಂದ ನಡೆಯಲಿದೆ.

 'ಹೊಳಪು-2018' ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಕ್ಯಾಲೆಂಡರ್‌ನ್ನು ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥರು ಹಾಗೂ ಅದಮಾರು ಕಿರಿಯ ಮಠಾಧೀಶ ಶ್ರೀ ಈಶಪ್ರಿಯ ತೀರ್ಥರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು, ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಕೋಟತಟ್ಟು ಗ್ರಾಪಂ ಅಧ್ಯಕ್ಷ ರಘು ತಿಂಗಳಾಯ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭ ಮಾತನಾಡಿದ ವಿಧಾನ ಪರಿಷತ್‌ನ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪಂಚಾಯತ್‌ರಾಜ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸುಮಾರು 4000ಕ್ಕೂ ಅಧಿಕ ಸದಸ್ಯರು ಒಂದು ದಿನ ಈ ಕ್ರೀಡಾಕೂಟದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ವಿವಿಧ ಸ್ತರಗಳ ಜನಪ್ರತಿನಿಧಿಗಳಿಗಾಗಿ ಕ್ರೀಡಾ ಸ್ಪರ್ಧೆಯಲ್ಲಿ 100 ಮೀ. ಓಟ, ಗುಂಡೆಸೆತ, ರಿಂಗ್ ಇನ್ ದಿ ವಿಕೆಟ್ ಹಾಗೂ ಮಡಿಕೆ ಒಡೆಯುವ ಸ್ಪರ್ಧೆಗಳಿದ್ದರೆ, ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸೂಪರ್ ಮಿನಿಟ್, ಗಾಯನ ಹಾಗೂ ಛದ್ಮ ವೇಷ ಸ್ಪರ್ಧೆಗಳಿರುತ್ತವೆ. ಇನ್ನು ಗುಂಪು ಸ್ಪರ್ಧೆಗಳಾಗಿ ಪುರುಷರಿಗೆ ಹಗ್ಗ ಜಗ್ಗಾಟ ಹಾಗೂ ಮಹಿಳೆಯರಿಗೆ ತ್ರೋಬಾಲ್ ಮತ್ತು ಹಗ್ಗ ಜಗ್ಗಾಟಗಳು ನಡೆಯಲಿವೆ ಎಂದರು.

ಕಾರ್ಯಕ್ರಮವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ. ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಗೌರವ ವಂದನೆ ಸ್ವೀಕರಿಸಲಿದ್ದಾರೆ. ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ ಕ್ರೀಡೋತ್ಸವಕ್ಕೆ ಚಾಲನೆ ನೀಡುವರಲ್ಲದೇ ಅತ್ಯುತ್ತಮ ಗ್ರಾಪಂಗಳಿಗೆ ಪ್ರಶಸ್ತಿಗಳನ್ನು ವಿತರಿಸುವರು.

ಕೋಟತಟ್ಟು ಗ್ರಾಪಂ ಅಧ್ಯಕ್ಷ ರಘು ತಿಂಗಳಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ರಾಜ್ಯ ನಗರಾಭಿವೃದ್ಧಿ ಹಾಗೂ ವಸತಿ ಸಚಿವ ಯು.ಟಿ.ಖಾದರ್ ಧ್ವಜಾರೋಹಣ ನೆರವೇರಿಸುವರು. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಯಮಾಲಾ ಕ್ರೀಡಾಜ್ಯೋತಿ ಪ್ರಜ್ವಲನಗೊಳಿಸಲಿದ್ದಾರೆ.

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿಯಮಿತದ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News