ಜನಾರ್ದನ ರೆಡ್ಡಿ ಪ್ರಕರಣದಲ್ಲಿ ರಾಜ್ಯ ಸರಕಾರ ಹಸ್ತಕ್ಷೇಪ ಮಾಡಿಲ್ಲ: ಸಚಿವ ಡಿ.ಕೆ.ಶಿವಕುಮಾರ್ ಸ್ಪಷ್ಟಣೆ

Update: 2018-11-08 13:00 GMT

ಬೆಂಗಳೂರು, ನ. 8: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಪ್ರಕರಣದಲ್ಲಿ ಸರಕಾರ ಯಾವುದೇ ಕಾರಣಕ್ಕೂ ಹಸ್ತಕ್ಷೇಪ ಮಾಡಿಲ್ಲ. ಕಾನೂನಿನ ಅನ್ವಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಸ್ಪಷ್ಟಣೆ ನೀಡಿದ್ದಾರೆ.

ಗುರುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗಾಲಿ ಜನಾರ್ದನ ರೆಡ್ಡಿ ಪ್ರಕರಣ ಸಂಬಂಧ ಪೊಲೀಸರ ತನಿಖೆ ಪ್ರಗತಿಯಲ್ಲಿದ್ದು, ಈ ಸಂದರ್ಭದಲ್ಲಿ ತಾನು ಹೆಚ್ಚಿನ ಪ್ರತಿಕ್ರಿಯೆ ನೀಡುವುದು ಸರಿಯಲ್ಲ ಎಂದು ನಿರಾಕರಿಸಿದರು.

ಆ್ಯಂಬಿಡೆಂಟ್ ಕಂಪೆನಿಯೊಂದಿಗೆ ಕಾಂಗ್ರೆಸ್ ಮುಖಂಡರಿಗೆ ಯಾವುದೇ ಸಂಪರ್ಕ ಇಲ್ಲ. ಪ್ರತಿನಿತ್ಯ ನಮ್ಮನ್ನು ನೋಡಲು ಸಾವಿರಾರು ಮಂದಿ ಬರುತ್ತಾರೆ. ಕೆಲಸ-ಕಾರ್ಯ ನಿಮಿತ್ತ ಭೇಟಿ ಮಾಡ್ತಾರೆ. ಕಾರ್ಯಕ್ರಮ ವೇದಿಕೆಗಳಲ್ಲಿ ಫೋಟೋ ತೆಗೆಸಿಕೊಳ್ಳುತ್ತಾರೆ. ಅವರು ಯಾರು, ಎಲ್ಲಿಂದ ಬಂದಿರುತ್ತಾರೆ ಎನ್ನುವುದು ಗೊತ್ತಾಗುವುದಿಲ್ಲ ಎಂದರು.

ಇಂತಹ ಪ್ರಕರಣಗಳು ಬೆಳಕಿಗೆ ಬಂದಾಗ ಯಾರು ಅಂತಾ ಗೊತ್ತಾಗುತ್ತದೆ. ಫೋಟೋ ತೆಗೆಸಿಕೊಂಡ ಮಾತ್ರಕ್ಕೆ ಅವರ ಜತೆ ಸಂಪರ್ಕ ಇದೆ ಎಂಬುದು ಸರಿಯಲ್ಲ ಎಂದ ಶಿವಕುಮಾರ್, ಈಗಾಗಲೇ ಮಾಜಿ ಸಚಿವ ರಾಮಲಿಂಗಾರೆಡ್ಡಿ ಈ ಸಂಬಂಧ ಸ್ಪಷ್ಟಣೆ ನೀಡಿದ್ದಾರೆಂದು ಉಲ್ಲೇಖಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News