ರೈತರ ಸಂಪೂರ್ಣ ಸಾಲ ಮನ್ನಾಗೆ ಆಗ್ರಹ: ನ.19 ರಂದು ವಿಧಾನಸೌಧ ಮುತ್ತಿಗೆ
ಬೆಂಗಳೂರು, ನ.9: ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ನ.19 ರಂದು ವಿಧಾನಸೌಧ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗೌರವಾಧ್ಯಕ್ಷ ಚಾಮರಸ ಮಾಲೀಪಾಟೀಲ್ ಹೇಳಿದ್ದಾರೆ.
ಶುಕ್ರವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಿದ ತರಾತುರಿಯಲ್ಲಿ ರೈತರ ಎಲ್ಲ ಸಾಲ ಮನ್ನಾ ಮಾಡಲಾಗುತ್ತದೆ ಎಂದು ಘೋಷಣೆ ಮಾಡಿದ್ದರು. ಅಲ್ಲದೆ, ಸಾಲವನ್ನು ಮನ್ನಾ ಮಾಡಿದ್ದರೂ, ಅದನ್ನು ಅಧಿಕೃತವಾಗಿ ಇದುವರೆಗೂ ಜಾರಿ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿಧಾನಸಭೆ ಚುನಾವಣೆಯ ಪೂರ್ವದಲ್ಲಿ ನಾನು ಮುಖ್ಯಮಂತ್ರಿಯಾದರೆ ರೈತರ ಎಲ್ಲ ರೀತಿಯ ಸಾಲಗಳನ್ನು ಮನ್ನಾ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ, ಮುಖ್ಯಮಂತ್ರಿಯಾದ ನಂತರ ನೀಡಿದ ಆಶ್ವಾಸನೆಯನ್ನು ಈಡೇರಿಸಲು ಯಾವುದೇ ರೀತಿಯ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಆದುದರಿಂದಾಗಿ, ಸರಕಾರಕ್ಕೆ ಎಚ್ಚರಿಕೆ ನೀಡುವ ಉದ್ದೇಶದಿಂದ ಹಾಗೂ ಎಲ್ಲ ಸಾಲಗಳನ್ನು ಮನ್ನಾ ಮಾಡಬೇಕು ಎಂದು ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.
ಅಂದು ನಗರದ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಸಾವಿರಾರು ಸಂಖ್ಯೆಯಲ್ಲಿ ರೈತರು ಬೃಹತ್ ಮೆರವಣಿಗೆ ಮೂಲಕ ರ್ಯಾಲಿ ನಡೆಸಲಾಗುತ್ತದೆ. ಅನಂತರ ವಿಧಾನಸೌಧದ ಕಡೆಗೆ ಸಾಗಿ ಮುತ್ತಿಗೆ ಹಾಕಲಿದ್ದೇವೆ ಎಂದು ಅವರು ಮಾಹಿತಿ ನೀಡಿದರು.