ಉಪಚುನಾವಣೆ ನಡೆದ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಆರಂಭ

Update: 2018-11-10 12:17 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ನ.10: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ ಉಪ ಚುನಾವಣೆ ನಡೆದ ಬಳ್ಳಾರಿ, ಶಿವಮೊಗ್ಗ, ಮಂಡ್ಯ ಲೋಕಸಭಾ ಕ್ಷೇತ್ರ ಹಾಗೂ ಜಮಖಂಡಿ, ರಾಮನಗರ ವಿಧಾನಸಭಾ ಕ್ಷೇತ್ರ ಸೇರಿದಂತೆ ಒಟ್ಟು 26 ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯ ಪರಿಷ್ಕರಣೆ ಆರಂಭಗೊಂಡಿದೆ.

ಉಪಚುನಾವಣೆ ನಡೆದ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯ ಪಿಡಿಎಫ್ ಆವೃತ್ತಿಯನ್ನು ಮುಖ್ಯ ಚುನಾವಣಾಧಿಕಾರಿಗಳ ಅಧಿಕೃತ ಜಾಲತಾಣ www.ceokarnataka.kar.nic.in ನಲ್ಲಿ ಹಾಕಲಾಗಿದ್ದು, ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾದ ಬಗ್ಗೆ ಪರಿಶೀಲಿಸಬಹುದಾಗಿದೆ. ಡಿ.31, 2018ವರೆಗೆ ಹೊಸ ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲು ಅವಕಾಶ ಕಲ್ಪಿಸಲಾಗಿದೆ.

ಮತದಾರರ ಪಟ್ಟಿಯಲ್ಲಿ ಸೇರಬಯಸುವ ಹೊಸ ಮತದಾರರು ನಮೂನೆ-6ರಲ್ಲಿ ತಮ್ಮ ಹೆಸರನ್ನು ಸೇರ್ಪಡೆ ಮಾಡಬಹುದು. ಹಾಗೂ ಮತದಾರರ ಪಟ್ಟಿಯಿಂದ ತಮ್ಮ ಹೆಸರನ್ನು ತೆಗೆದು ಹಾಕಬಯಸುವವರು ನಮೂನೆ-7ರ ಅರ್ಜಿಯನ್ನು ಬಳಸಬಹುದಾಗಿದೆ. ಒಂದು ವೇಳೆ ಮತದಾರರ ವಿವರಗಳು, ನಮೂದುಗಳು ತಪ್ಪಾಗಿದ್ದಲ್ಲಿ ನಮೂನೆ-8ರ ಮೂಲಕ ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ.

ಅರ್ಹ ಮತದಾರರಿಗೆ ಭಾವಚಿತ್ರವಿರುವ ಗುರುತಿನ ಚೀಟಿಗಳನ್ನು ನೀಡಲಾಗಿದ್ದು, ಪ್ರಸ್ತುತ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆಯ ಅಂತಿಮ ದಿನಾಂಕ ಜ.1, 2019 ಆಗಿದೆ. ನಂತರ ಹೊಸದಾಗಿ ಸೇರ್ಪಡೆಯಾಗುವ ಎಲ್ಲ ಮತದಾರರಿಗೆ ಭಾವಚಿತ್ರವಿರುವ ಗುರುತಿನ ಚೀಟಿಗಳನ್ನು ನೀಡಲಾಗುವುದು. ಜ.15, 2019ಕ್ಕೆ ಭಾವಚಿತ್ರವಿರುವ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ಪ್ರಕಟನೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News