ಮಂಡ್ಯ: ಟಿಪ್ಪು ಜಯಂತಿಗೆ ವಿರೋಧ; ಬಿಜೆಪಿ ಕಾರ್ಯಕರ್ತರ ಬಂಧನ, ಬಿಡುಗಡೆ

Update: 2018-11-10 17:14 GMT

ಮಂಡ್ಯ, ನ.10: ಪಾಂಡವಪುರ ಪಟ್ಟಣದಲ್ಲಿ ತಾಲೂಕು ಆಡಳಿತ ವತಿಯಿಂದ ನಡೆದ ಟಿಪ್ಪು ಸುಲ್ತಾನ್ ಜಯಂತಿ ವಿರೋಧಿಸಿ ರಸ್ತೆತಡೆಗೆ ಮುಂದಾದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು.

ಪಟ್ಟಣದ ಡಾ.ರಾಜಕುಮಾರ್ ವೃತ್ತದಲ್ಲಿ ಜಮಾವಣೆಗೊಂಡ ಕೆಲ ಬಿಜೆಪಿ ಕಾರ್ಯಕರ್ತರು, ಶ್ರೀರಂಗಪಟ್ಟಣ-ಜೇವರ್ಗಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ ರಾಜ್ಯ ಸರಕಾರ ಮತ್ತು ಟಿಪ್ಪು ಸುಲ್ತಾನ್ ವಿರುದ್ಧ ಘೋಷಣೆಗಳನ್ನು ಕೂಗಿದರು.

ಟಿಪ್ಪು ಒಬ್ಬ ಮತಾಂಧನಾಗಿದ್ದು, ಹಿಂದುಗಳ ವಿರೋಧಿಯೂ ಆಗಿದ್ದಾನೆ. ಮುಸ್ಲಿಮರ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಇಂತಹ ವ್ಯಕ್ತಿಯ ಜಯಂತಿಯನ್ನು ಆಚರಣೆ ಮಾಡಲು ಸರಕಾರ ಮುಂದಾಗಿರುವುದು ಸರಿಯಲ್ಲ ಎಂದು ಅವರು ಹೇಳಿದರು.

ಈ ವೇಳೆ ಬಿಜೆಪಿ ರೈತಮೋರ್ಚಾ ಜಿಲ್ಲಾಧ್ಯಕ್ಷ ಎಚ್.ಎನ್.ಮಂಜುನಾಥ್ ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ಜಯಂತಿ ಮುಗಿದ ನಂತರ ಬಿಡುಗಡೆ ಮಾಡಿದರು.

ಪ್ರತಿಭಟನೆಯಲ್ಲಿ ಬಿಜೆಪಿ ರೈತಮೋರ್ಚಾ ಜಿಲ್ಲಾಧ್ಯಕ್ಷ ಎಚ್.ಎನ್.ಮಂಜುನಾಥ್, ತಾಲೂಕು ಅಧ್ಯಕ್ಷ ನೀಲನಹಳ್ಳಿ ಧನಂಜಯ, ತಾಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಹಿರೇಮರಳಿ ಸಂದೇಶ್, ಬಿಜೆಪಿ ಮುಖಂಡರಾದ ಶ್ರೀನಿವಾಸನಾಯಕ, ಚಿಕ್ಕಮರಳಿ ನವೀನಕುಮಾರ್, ಚೇತನ್ ಇತರರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News