ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಂಜಾರ ಸಮುದಾಯದ ಅಭ್ಯರ್ಥಿ ಕಣಕ್ಕೆ: ಯಡಿಯೂರಪ್ಪ

Update: 2018-11-11 12:55 GMT

ಬೆಂಗಳೂರು, ನ.11: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧವಾಗಿ ಬಿಜೆಪಿಯಿಂದ ಬಂಜಾರ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2019 ರ ಲೋಕಸಭಾ ಚುನಾವಣೆಯಲ್ಲಿ ಖರ್ಗೆ ವಿರುದ್ಧ ಯಾರನ್ನು ಕಣಕ್ಕಿಳಸಬೇಕು ಎಂಬುದು ಇನ್ನೂ ತೀರ್ಮಾನವಾಗಿಲ್ಲ. ಆದರೆ, ಬಂಜಾರ ಸಮುದಾಯದ ಅಭ್ಯರ್ಥಿಯನ್ನೇ ಈ ಕ್ಷೇತ್ರದಿಂದ ಕಣಕ್ಕಿಳಿಸುವುದು ಬಹುತೇಕ ಖಚಿತವಾಗಿದೆ. ಕಲಬುರಗಿ ಮತ್ತು ಬೀದರ್ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ನಮ್ಮದಾಗಲಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.

ರಾಜ್ಯ ಸರಕಾರ ರೈತರ ಸಾಲ ಮನ್ನಾ ಘೋಷಣೆಯಾಗಿಯೇ ಉಳಿದಿದ್ದು, ಇದುವರೆಗೂ ಬ್ಯಾಂಕುಗಳಲ್ಲಿರುವ ರೈತರ ಖಾತೆಗೆ ನಯಾ ಪೈಸೆಯೂ ಮನ್ನಾ ಹಣ ಜಮೆಯಾಗಿಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಣೆ ಮಾಡಿ ತಿಂಗಳುಗಳೇ ಕಳೆಯುತ್ತಿದೆ. ಆದರೆ, ಇದುವರೆಗೂ ರಾಷ್ಟ್ರೀಕೃತ ಮತ್ತು ಸಹಕಾರಿ ಸಂಘಗಳಲ್ಲಿನ ರೈತರ ಖಾತೆಗೆ ಒಂದು ಪೈಸೆಯೂ ಸಾಲಮನ್ನಾ ಆಗಿಲ್ಲ ಎಂದು ತಿಳಿಸಿದರು.

ಸರಕಾರ ರಾಜ್ಯದ 100 ಕ್ಕೂ ಅಧಿಕ ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಿದೆ. ಆದರೆ, ಎಲ್ಲಿಯೂ ಇದುವರೆಗೂ ಬರ ಪರಿಹಾರ ಕಾಮಗಾರಿಗಳನ್ನು ಕೈಗೊಂಡಿಲ್ಲ. ಅಧಿಕಾರಿಗಳು ಹಾಗೂ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದ ಅವರು, ಸರಕಾರ ಕೂಡಲೇ ಸಾಲ ಮನ್ನಾ ಮಾಡಬೇಕು ಹಾಗೂ ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಒತ್ತಾಯಿಸಿದರು.

ಬಳ್ಳಾರಿ ಲೋಕಸಭಾ ಮತ್ತು ಜಮಖಂಡಿ ವಿಧಾನಸಭಾ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಸೋಲಿಗೆ ಸಂಘಟನೆಯ ಕೊರತೆ ಕಾರಣವಲ್ಲ. ಸೋಲನ್ನು ನಾವು ಒಪ್ಪಿಕೊಳ್ಳುತ್ತೇವೆ. 13 ರಂದು ನಡೆಯಲಿರುವ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಸೋಲಿನ ಬಗ್ಗೆ ಪರಾಮರ್ಶೆ ನಡೆಸಲಾಗುತ್ತದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 22 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ.

- ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ

‘ಬೀದರ್ ಮತ್ತು ಕಲಬುರ್ಗಿ ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಠೇವಣಿ ಉಳಿಸಿಕೊಳ್ಳಲಿ ನೋಡೋಣ. ಕಲಬುರ್ಗಿಯಲ್ಲಿ ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸಲಿದ್ದು, ಬೀದರ್ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಪಕ್ಷದ ವರಿಷ್ಠರು ತೀರ್ಮಾನಿಸಲಿದ್ದಾರೆ’

-ಈಶ್ವರ್ ಬಿ.ಖಂಡ್ರೆ, ಕೆಪಿಸಿಸಿ ಕಾರ್ಯಾಧ್ಯಕ್ಷ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News