ಸಮಾಜ ಕಲ್ಯಾಣ ಇಲಾಖೆಯ ಯೋಜನೆಗಳು ಸದ್ಬಳಕೆಯಾಗಲಿ: ಇಲಾಖೆಯ ಕಾರ್ಯದರ್ಶಿ ಗಂಗಾರಾಮ್ ಬಡೇರಿಯಾ

Update: 2018-11-13 12:18 GMT

ಬೆಂಗಳೂರು, ನ.14: ದಲಿತ ಸಮುದಾಯದ ಯುವಜನತೆ ಆರ್ಥಿಕವಾಗಿ ಮುನ್ನೆಲೆಗೆ ಬರುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಲ್ಲಿರುವ ಪ್ರತಿಯೊಂದು ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಇಲಾಖೆಯ ಕಾರ್ಯದರ್ಶಿ ಗಂಗಾರಾಮ್ ಬಡೇರಿಯಾ ತಿಳಿಸಿದರು.

ಮಂಗಳವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲ್ವಿಚಾರಣೆ ಮತ್ತು ಬಲವರ್ಧನ ಸಮಿತಿ ಹಾಗೂ ಕರ್ನಾಟಕ ದಲಿತ ಮಹಿಳಾ ವೇದಿಕೆ ನಗರದ ಎನ್‌ಜಿಒ ಸಭಾಂಗಣದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ದಲಿತ ಸಂಘ, ಸಂಸ್ಥೆಗಳು ಹಾಗೂ ಸಂಘಟನೆಗಳ ಹೋರಾಟದ ಫಲವಾಗಿ ಎಸ್ಸಿಪಿ, ಟಿಎಸ್ಪಿ ಯೋಜನೆ ಜಾರಿಯಾಗಿದೆ. ರಾಜ್ಯ ಸರಕಾರ ತನ್ನ ಬಜೆಟ್‌ನಲ್ಲಿ ದಲಿತ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಪ್ರತಿವರ್ಷ ಅಂದಾಜು 30ಸಾವಿರ ಕೋಟಿ ರೂ.ಬಿಡುಗಡೆ ಮಾಡುತ್ತಿದೆ. ಈ ಹಣವನ್ನು ದಲಿತ ಸಮುದಾಯ ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಅರಿವು ಮೂಡಿಸುವ ಅಗತ್ಯವಿದೆ ಎಂದು ಅವರು ಹೇಳಿದರು.

ಇದರ ಜತೆಗೆ, ಸಮಾಜ ಕಲ್ಯಾಣ ಇಲಾಖೆಯಲ್ಲೂ ನಿರುದ್ಯೋಗಿಗಳಿಗೆ ಸೂಕ್ತ ಉದ್ಯೋಗ ಹಾಗೂ ಸ್ವಯಂ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಐರಾವತಾ, ಸ್ಫೂರ್ತಿ, ಸಮೃದ್ಧಿ ಸೇರಿದಂತೆ ಹಲವು ಯೋಜನೆಗಳು ಹಾಗೂ ಹತ್ತು ಹಲವು ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಇದೆಲ್ಲವನ್ನು ಸದುಪಯೋಗ ಮಾಡಿಕೊಂಡು, ಆರ್ಥಿಕವಾಗಿ ಮುನ್ನೆಲೆಗೆ ಬರಬೇಕೆಂದು ಅವರು ಹೇಳಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲ್ವಿಚಾರಣೆ ಮತ್ತು ಬಲವರ್ಧನ ಸಮಿತಿ ಪ್ರತಿ ವರ್ಷ ದಲಿತ ಸಮುದಾಯದ ಮೇಲೆ ನಡೆಯವ ದೌರ್ಜನ್ಯಗಳ ಕುರಿತು ಬಿಡುಗಡೆ ಮಾಡುತ್ತಿರುವ ವರದಿಯಿಂದಾಗಿ ಆಡಳಿತದಲ್ಲಿ ಸಾಕಷ್ಟು ಬದಲಾವಣೆಯಾಗುತ್ತಿದೆ. ದಲಿತರ ಮೇಲಿನ ದೌರ್ಜನ್ಯಗಳ ಕುರಿತು ಚರ್ಚಿಸಲು, ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಿ ಸಭೆ ಕರೆಯಲಾಗುತ್ತಿದೆ. ಇನ್ನು ಸಾಕಷ್ಟು ಬದಲಾಣೆಯಾಗುತ್ತಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಎಸ್ಸಿ, ಎಸ್ಟಿ ಮೇಲ್ವಿಚಾರಣೆ ಮತ್ತು ಬಲವರ್ಧನ ಸಮಿತಿಯ ಸಂಚಾಲಕಿ ಯಶೋಧಾ ಮಾತನಾಡಿ, ರಾಜ್ಯದ ಹಲವು ಕಡೆಗಳಲ್ಲಿ ದಲಿತ ಸಮುದಾಯದ ಜನತೆಯ ಮೇಲೆ ಹಲ್ಲೆಗಳು ನಡೆದಾಗ ದೂರು ನೀಡಿದರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿಕೊಳ್ಳುವುದಿಲ್ಲ. ಇದು ಹಲ್ಲೆ ಮಾಡುವವರಿಗೆ ಪರೋಕ್ಷವಾಗಿ ಪೊಲೀಸರೆ ಬೆಂಬಲಿಸುವ ರೀತಿಯಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ವರ್ಷದಿಂದ ವರ್ಷಕ್ಕೆ ದಲಿತ ಮಹಿಳೆಯರ ಮೇಲಿನ ಅತ್ಯಾಚಾರದ ಪ್ರಮಾಣ ಹಾಗೂ ದೌರ್ಜನ್ಯಗಳು ಹೆಚ್ಚುತ್ತಲೆ ಹೋಗುತ್ತಿವೆ. ಈ ಬಗ್ಗೆ ಗಂಭೀರವಾಗಿ ಚಿಂತಿಸಬೇಕಾದ ನ್ಯಾಯಾಂಗ, ಪೊಲೀಸ್ ಇಲಾಖೆ ಹಾಗೂ ಜನಪ್ರತಿನಿಧಿಗಳು ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. ಇಂತಹ ಸ್ಥಿತಿಯಲ್ಲಿ ದಲಿತ ಸಮುದಾಯಕ್ಕೆ ನ್ಯಾಯ ಸಿಗುವುದಾದರು ಹೇಗೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಎಸ್ಸಿ, ಎಸ್ಟಿ ಮೇಲ್ವಿಚಾರಣೆ ಮತ್ತು ಬಲವರ್ಧನ ಸಮಿತಿ ವತಿಯಿಂದ ಪ್ರತಿ ವರ್ಷ ದಲಿತರ ಮೇಲೆ ನಡೆಯುತ್ತಿರುವ ಅತ್ಯಾಚಾರ ಹಾಗೂ ದೌರ್ಜನ್ಯಗಳ ಕುರಿತು ವರದಿ ಬಿಡುಗಡೆ ಮಾಡುತ್ತಿದ್ದೇವೆ. ಹಾಗೂ ಈ ವರದಿಯ ಅನ್ವಯ ದಲಿತರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿನಿಧಿಗಳ ಮೇಲೆ ಒತ್ತಡ ಹಾಕುತ್ತಿದ್ದೇವೆ. ಇದರ ಜತೆಗೆ ಪ್ರಜ್ಞಾವಂತ ದಲಿತ ಸಮುದಾಯ ಒಳಗೊಂಡಂತೆ ಎಲ್ಲ ಸಮುದಾಯದ ಪ್ರಜ್ಞಾವಂತ ನಾಗರಿಕರು ಧ್ವನಿ ಗೂಡಿಸಬೇಕು ಎಂದು ಅವರು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥೆ ಸುಮಿತ್ರಾ, ಬೆಂವಿವಿ ಸಹ ಪ್ರಾಧ್ಯಾಪಕಿ ಕಾವಲಮ್ಮ, ಕೆಎಸೆಸ್ಸ್‌ಡಿ ರಾಜ್ಯಾಧ್ಯಕ್ಷ ಚನ್ನಕೃಷ್ಣಪ್ಪ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News