×
Ad

ಹಳೆ ವಿದ್ಯಾರ್ಥಿ ಸಂಘಗಳ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಯೋಜನೆ: ಅನಿತಾ ತೊರವಿ

Update: 2018-11-13 23:04 IST

ಶಿವಮೊಗ್ಗ, ನ. 13: ಸರ್ಕಾರಿ ಶಾಲೆಗಳಲ್ಲಿ ಕಲಿತ ಹಳೆಯ ವಿದ್ಯಾರ್ಥಿಗಳ ಮೂಲಕ ತಮ್ಮ ಶಾಲೆಗಳಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಯೋಜನೆ ರೂಪಿಸಲಾಗಿದ್ದು, ಅದನ್ನು ಶಿವಮೊಗ್ಗ ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಅನುಷ್ಟಾನಗೊಳಿಸಲು ಕ್ರಮ ಕೈಗೊಳ್ಳಬೇಕಾಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಅನಿತಾ ತೊರವಿ ತಿಳಿಸಿದ್ದಾರೆ. 

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಆಯೋಗದ ಕಾರ್ಯಕ್ರಮಗಳ ಅನುಷ್ಟಾನ ಕುರಿತು ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. 'ನಾನು ಕಲಿತ ಶಾಲೆಗೆ ತೀರಿಸುವ ಋಣವ' ಘೋಷಣೆಯಡಿ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿ ಸಂಘಗಳನ್ನು ರೂಪಿಸಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಏಕರೂಪದ ಕಾರ್ಯಕ್ರಮ ರೂಪಿಸಿ ಅನುಷ್ಟಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ತಾವು ಕಲಿತ ಶಾಲೆಗೆ ತಮ್ಮಿಂದಾದಷ್ಟು ನೆರವು ನೀಡಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಪ್ರೇರೇಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ಹೇಳಿದರು.

ಪೋಕ್ಸೋ ಕಾಯ್ದೆ ಸೇರಿದಂತೆ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತಾಗಿ ಅರಿವು ಮೂಡಿಸಲು ಆಯೋಗ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ಅನುದಾನ ಬಿಡುಗಡೆ ಮಾಡಿದೆ. ಆದರೂ ಕಳೆದ ಎರಡು ವರ್ಷಗಳಲ್ಲಿ ಜಿಲ್ಲೆಯಲ್ಲಿ ಈ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಲಾಗಿಲ್ಲ ಎಂದು ಅನಿತಾ ತೊರವಿ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ಅಧಿಕಾರಿಗಳಿಗೆ ಈ ತಿಂಗಳು ಅರಿವು ಕಾರ್ಯಗಾರ ಆಯೋಜಿಸುವಂತೆ ಜಿಲ್ಲಾಧಿಕಾರಿ ಅವರು ಈ ಸಂದರ್ಭದಲ್ಲಿ ಸೂಚನೆ ನೀಡಿದರು.

ಮಕ್ಕಳ ಹಕ್ಕುಗಳ ಕುರಿತಾದ ಚಲನಚಿತ್ರಗಳನ್ನು ಚಿತ್ರಮಂದಿರದಲ್ಲಿ ಪ್ರದರ್ಶಿಸಲು ಕ್ರಮ ಕೈಗೊಳ್ಳಬೇಕು. ನವೆಂಬರ್ 29ರಿಂದ ನಾಲ್ಕು ದಿನಗಳ ಕಾಲ ಪ್ರದರ್ಶನ ಆಯೋಜಿಸಲು ಸಿದ್ಧತೆ ನಡೆಸಿದರೆ, ಇದಕ್ಕೆ ಸೂಕ್ತ ನೆರವನ್ನು ಆಯೋಗದ ವತಿಯಿಂದ ನೀಡಲಾಗುವುದು ಎಂದು ಅವರು ಹೇಳಿದರು. 
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಶೇಷಪ್ಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News