ಬರಪೀಡಿತ ಪ್ರದೇಶದಲ್ಲಿ ನೀರು ಪೂರೈಕೆಗೆ ಒತ್ತು: ಮುಖ್ಯಮಂತ್ರಿ ಕುಮಾರಸ್ವಾಮಿ

Update: 2018-11-15 13:32 GMT

ಬೀದರ್, ನ. 15: ಜಿಲ್ಲೆಯ ನಾಲ್ಕು ಬರಪೀಡಿತ ತಾಲೂಕುಗಳಲ್ಲಿ ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಬೇಕು. ಯಾವುದೆ ಹಳ್ಳಿಯ ಜನತೆ ನೀರು ಕೊಡಿ ಎಂದು ಕೇಳುತ್ತಾ ತಮ್ಮಲ್ಲಿ ಬರಬಾರದು. ಈ ಬಗ್ಗೆ ಅಧಿಕಾರಿಗಳು ಮುತುವರ್ಜಿ ವಹಿಸಬೇಕೆಂದು ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚಿಸಿದ್ದಾರೆ.

ಗುರುವಾರ ಇಲ್ಲಿನ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಮಾತನಾಡಿದ ಅವರು, ಕುಡಿಯುವ ನೀರು ಪೂರೈಕೆ ಕಾರ್ಯಕ್ಕೆ ಹಣಕಾಸಿನ ಕೊರತೆ ಇಲ್ಲ. ಈಗಾಗಲೇ, ಬರಪೀಡಿತ ಎಲ್ಲ ತಾಲೂಕುಗಳಲ್ಲಿ ಕುಡಿಯುವ ನೀರು ಪೂರೈಕೆಗೆ ಕ್ರಮವಹಿಸಲು ತಲಾ 50 ಲಕ್ಷ ರೂ.ನೀಡಲಾಗಿದೆ. ಮೊದಲ ಹಂತದಲ್ಲಿ ಈಗಾಗಲೇ 25ಲಕ್ಷ ರೂ.ಬಿಡುಗಡೆ ಮಾಡಲಾಗಿದೆ ಎಂದರು. ಅಗತ್ಯವಿರುವ ಕಡೆಗಳಲ್ಲಿ ತಾವುಗಳು ಕೂಡಲೇ ನೀರು ಪೂರೈಕೆಗೆ ಅಗತ್ಯ ಕ್ರಮವಹಿಸಬೇಕು. ಅಲ್ಲದೆ, ಜನ ಗುಳೆ ಹೋಗುವುದನ್ನು ತಪ್ಪಿಸಲು ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ಕಲ್ಪಿಸಲು ಆಸ್ಥೆ ವಹಿಸಬೇಕೆಂದು ಕುಮಾರಸ್ವಾಮಿ ಇದೇ ವೇಳೆ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪೂರ್ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಸಂಬಂಧ ಈಗಾಗಲೇ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದು, ಹೊಸ ಕೊಳವೆಬಾವಿ ಕೊರೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಇದೇ ವೇಳೆ ತಿಳಿಸಿದರು.

ವಿಶೇಷ ಪ್ಯಾಕೇಜ್‌ಗೆ ಮನವಿ: ಬೀದರ್ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಿಗುಡಾಯಿಸಿದ್ದು, ರಾಜ್ಯ ಸರಕಾರ ನಗರದ ನೀರು ಪೂರೈಕೆ ಯೋಜನೆ ಕೈಗೆತ್ತಿಕೊಳ್ಳಲು ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಶಾಸಕ ರಹೀಂ ಖಾನ್ ಆಗ್ರಹಿಸಿದರು.

ಸಭೆಯಲ್ಲಿ ಸಚಿವ ರಾಜಶೇಖರ್ ಪಾಟೀಲ್, ಸಂಸದ ಭಗವಂತ ಖೂಬಾ, ಶಾಸಕರು, ಸ್ಥಳೀಯ ಜನಪ್ರತಿನಿಧಿಗಳು, ಜಿಪಂ ಸಿಇಓ ಮಹಾಂತೇಶ ಬೀಳಗಿ, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಸೇರಿ ಅಧಿಕಾರಿಗಳು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News