×
Ad

ಶಾಸಕಿಯಾಗಿ ಅನಿತಾ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ

Update: 2018-11-15 19:08 IST

ಬೆಂಗಳೂರು, ನ.15: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ, ಶಾಸಕಿಯಾಗಿ ಗುರುವಾರ ಮಧ್ಯಾಹ್ನ 3.30ಕ್ಕೆ ವಿಧಾನಸೌಧದಲ್ಲಿರುವ ಸ್ಪೀಕರ್ ಕಚೇರಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್, ಅನಿತಾ ಕುಮಾರಸ್ವಾಮಿ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಭಗವಂತ ಹಾಗೂ ಸತ್ಯ ನಿಷ್ಠೆ ಹೆಸರಲ್ಲಿ ಅನಿತಾ ಕುಮಾರಸ್ವಾಮಿ ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಪ್ರಮಾಣವಚನ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅನಿತಾ ಕುಮಾರಸ್ವಾಮಿ, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಒಂದು ವೇಳೆ ಸಚಿವ ಸ್ಥಾನ ನೀಡಿದರೆ ಪ್ರಾಮಾಣಿಕವಾಗಿ ಜವಾಬ್ದಾರಿ ನಿರ್ವಹಿಸುತ್ತೇನೆ. ಜೆಡಿಎಸ್ ಪಕ್ಷದಿಂದ ಮಹಿಳೆಯರು ಸಚಿವರಿಲ್ಲ. ಆದರೆ ನಾನು ಸಚಿವ ಸ್ಥಾನಕ್ಕೆ ಬೇಡಿಕೆ ಇಡುವುದಿಲ್ಲ ಎಂದರು.

ರಾಮನಗರ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದ ಮೊದಲ ಶಾಸಕಿ ನಾನು. ನನ್ನ ಪತಿ ಮುಖ್ಯಮಂತ್ರಿಯಾಗಿದ್ದಾರೆ. ಅವರ ಮಾರ್ಗದರ್ಶನದಲ್ಲಿ ನಾನು ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇನೆ. ನನ್ನನ್ನು ಆಯ್ಕೆ ಮಾಡಿದ ಜನರ ಋಣಿಯಾಗಿರುತ್ತೇನೆ ಎಂದು ಅನಿತಾ ಕುಮಾರಸ್ವಾಮಿ ಹೇಳಿದರು.

ಈ ಸಂದರ್ಭದಲ್ಲಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಶಾಸಕ ಕೆ.ಗೋಪಾಲಯ್ಯ, ಬಿಬಿಎಂಪಿ ಸದಸ್ಯ ಇಮ್ರಾನ್ ಪಾಷ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News