ಎಳೆಯ ಪ್ರಾಯದಲ್ಲೇ ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸಿ: ಸಿಐ ಸಲೀಂ ಅಬ್ಬಾಸ್

Update: 2018-11-16 11:48 GMT

ಚಿಕ್ಕಮಗಳೂರು, ನ.16: ಪೋಷಕರು ಮತ್ತು ಶಿಕ್ಷಕರು ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವ ಕೆಲಸ ಮಾಡಬೇಕು ಎಂದು ಗ್ರಾಮಾಂತರ ವೃತ್ತ ನಿರೀಕ್ಷಕ ಸಲೀಂ ಅಬ್ಬಾಸ್ ಸಲಹೆ ಮಾಡಿದರು.

ಲಯನ್ಸ್ ಮತ್ತು ಲಯನ್ಸ್ ಸಂಸ್ಥೆ ನಗರದ ಕ್ರಿಶ್ಚಿಯನ್ ಕಾಲನಿಯ ಅಂಗನವಾಡಿ ಶಾಲೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬ ಮಕ್ಕಳಲ್ಲೂ ಪ್ರತಿಭೆ ಸುಪ್ತವಾಗಿ ಅಡಗಿರುತ್ತದೆ. ಅದನ್ನು ಪೋಷಕರು ಮತ್ತು ಶಿಕ್ಷಕರು ಗುರುತಿಸಿ ಅದಕ್ಕೆ ತಕ್ಕಂತೆ ಅವರನ್ನು ಪ್ರೋತ್ಸಾಹಿಸಿದರೆ ಸಮಾಜದಲ್ಲಿ ಪ್ರತಿಭಾವಂತರ ಸಂಖ್ಯೆ ಹೆಚ್ಚುತ್ತದೆ ಎಂದರು.

ಲಯನ್ಸ್ ಅಧ್ಯಕ್ಷ ಸಿ.ಪಿ.ಸುರೇಶ್ ಮಾತನಾಡಿ, ಪೋಷಕರು ಮತ್ತು ಶಿಕ್ಷಕರು ಮಕ್ಕಳಿಗೆ ಎಳೆಯ ವಯಸ್ಸಿನಲ್ಲೇ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಕಲಿಸಬೇಕು. ಹಾಗಾದಾಗ ಮಾತ್ರ ಅವರು ಉತ್ತಮ ನಾಗರೀಕರಾಗಲು ಸಾಧ್ಯವಾಗುತ್ತದೆ ಎಂದು ಕಿವಿಮಾತು ಹೇಳಿದರು.

ಲಯನೆಸ್ ಅಧ್ಯಕ್ಷೆ ಲಕ್ಷ್ಮೀನಂಜಯ್ಯ ಮಾತನಾಡಿ, ಅಂಗನವಾಡಿ ಶಾಲೆ ಮಕ್ಕಳ ಶಿಕ್ಷಣಕ್ಕೆ ರಹದಾರಿ ಇದ್ದಂತೆ, ಅಲ್ಲಿ ಶಿಕ್ಷಕರು ಅವರನ್ನು ತಿದ್ದುವ ಕೆಲಸ ಮಾಡಬೇಕು ಎಂದು ಸಲಹೆ ಮಾಡಿದರು. ಲಯನ್ಸ್ ರಾಜ್ಯಪಾಲರ ಜಿಲ್ಲಾ ಪ್ರತಿನಿಧಿ ಹೆಚ್.ಸಿ.ಶಶಿಪ್ರಸಾದ್ ಮಾತನಾಡಿ, ನಗರಸಭೆ ಆಯುಕ್ತರೊಂದಿಗೆ ಚರ್ಚಿಸಿ ಅಂಗನವಾಡಿ ಕೇಂದ್ರಕ್ಕೆ ಅಗತ್ಯವಿರುವ ಮೂಲ ಸೌಲಭ್ಯಗಳನ್ನು ಒದಗಿಸಿಕೊಡುವ ಭರವಸೆ ನೀಡಿದರು.

ಮಕ್ಕಳ ದಿನಾಚರಣೆ ಪ್ರಯುಕ್ತ ಲಯನ್ಸ್ ಮತ್ತು ಲಯನ್ಸ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಮವಸ್ತ್ರಗಳನ್ನು ವಿತರಿಸಿ, ಸಿಹಿ ಹಂಚಲಾಯಿತು. ಮಕ್ಕಳಿಂದ ಛದ್ಮವೇಷ ಸ್ಪರ್ಧೆ ನಡೆಯಿತು. ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಲಯನ್ಸ್ ಜಿಲ್ಲಾ ಮಾಜಿ ರಾಜ್ಯಪಾಲ ಹೆಚ್.ಆರ್.ಹರೀಶ್, ಕಾರ್ಯದರ್ಶಿ ಮನೋಜ್ ಬಸವರಾಜ್, ಖಜಾಂಚಿ ಜಯರಾಮೇಗೌಡ, ಮಾಜಿ ಅಧ್ಯಕ್ಷ ಕೆ.ಡಿ.ಪುಟ್ಟಣ್ಣ, ಲಯನೆಸ್ ಕಾರ್ಯದರ್ಶಿ ಮೋಹನಕುಮಾರಿ ಉಪಸ್ಥಿತರಿದ್ದರು. ಸಿ.ಎಂ.ಲೀಲಾವತಿ ಕಾರ್ಯಕ್ರಮವನ್ನು ನಿರೂಪಿಸಿದರು, ಫಾಮಿದ ಸ್ವಾಗತಿಸಿದರು, ಮಂಜುಳಾ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News