ಹೊಂದಾಣಿಕೆ ರಾಜಕಾರಣ ಮಾಡುವುದನ್ನು ಬಿಜೆಪಿಯವರೇ ಕಲಿಸಿಕೊಟ್ಟರು: ಮುಖ್ಯಮಂತ್ರಿ ಕುಮಾರಸ್ವಾಮಿ

Update: 2018-11-16 13:43 GMT

ಬೆಂಗಳೂರು, ನ. 16: ‘ನೈಸ್ ಸಂಸ್ಥೆ ಅಕ್ರಮಕ್ಕೆ ಸಂಬಂಧಿಸಿದಂತೆ ಸದನ ಸಮಿತಿ ನೀಡಿರುವ ವರದಿಯ ಬಗ್ಗೆ ಸೂಕ್ತ ಸಂದರ್ಭದಲ್ಲಿ ಸರಕಾರ ಸೂಕ್ತವಾದ ತೀರ್ಮಾನ ಕೈಗೊಳ್ಳಲಿದೆ’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ನನಗೆ ಹೊಂದಾಣಿಕೆ ರಾಜಕಾರಣ ಮಾಡುವುದನ್ನು ಕಲಿಸಿಕೊಟ್ಟವರೇ ಬಿಜೆಪಿಯವರು’ ಎಂದು ಬಿಜೆಪಿ ಹೇಳಿಕೆಗೆ ತಿರುಗೇಟು ನೀಡಿದರು.

2006ರಲ್ಲಿ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ‘ನೈಸ್’ ಯೋಜನೆ ರದ್ದುಗೊಳಿಸುವ ಸಂಬಂಧ ಸಚಿವ ಸಂಪುಟ ಸಭೆಯ ಮುಂದಿಟ್ಟಿದ್ದೆ. ಆಗ ಡಿಸಿಎಂ ಆಗಿದ್ದ ಬಿಎಸ್‌ವೈ ಸೇರಿ 18 ಮಂದಿ ಸಚಿವರು ಸಂಪುಟ ಸಭೆಯಿಂದಲೇ ಹೊರ ನಡೆದಿದ್ದರು ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಆಡಳಿತಕ್ಕೆ ಬಂದು ಕೇವಲ ಐದೂವರೆ ತಿಂಗಳು ಕಳೆದಿವೆ. ಮುಂದಿನ ದಿನಗಳಲ್ಲಿ ನಮ್ಮ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಬಿಜೆಪಿಯವರಿಗೆ ಉತ್ತರ ಕೊಡುತ್ತೇವೆ. ನನಗೆ ಹೊಂದಾಣಿಕೆ ರಾಜಕಾರಣ ಮಾಡುವ ಅಗತ್ಯ ಇಲ್ಲ ಎಂದು ತಿರುಗೇಟು ನೀಡಿದರು.

ಶಿವಕುಮಾರ್ ಉತ್ತರಿಸಲಿದ್ದಾರೆ: ಇಡಿ ನೋಟಿಸ್‌ಗೆ ಸಂಬಂಧಿಸಿದಂತೆ ಸಚಿವ ಡಿ.ಕೆ.ಶಿವಕುಮಾರ್ ಉತ್ತರ ನೀಡಲಿದ್ದಾರೆ. ಅದಕ್ಕೂ, ರಾಜ್ಯ ಸರಕಾರಕ್ಕೂ ಯಾವುದೇ ಸಂಬಂಧವಿಲ್ಲ. ದ್ವೇಷದ ರಾಜಕಾರಣ ಮಾಡುತ್ತಿದ್ದಾರೆಂದು ನಾನು ಯಾರ ವಿರುದ್ಧವೂ ಆರೋಪ ಮಾಡುವುದಿಲ್ಲ ಎಂದು ಹೇಳಿದರು.

ಇಡಿ ನೋಟಿಸ್ ನೀಡಿ ಕೆಲ ಸ್ಪಷ್ಟೀಕರಣಗಳನ್ನು ಕೇಳಿದ್ದು, ಅದಕ್ಕೆ ಸಚಿವ ಡಿ.ಕೆ. ಶಿವಕುಮಾರ್ ಅವರೇ ಉತ್ತರ ನೀಡಲಿದ್ದಾರೆ. ಇದಕ್ಕೆ ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಅವರೇ ಅದನ್ನೆಲ್ಲವನ್ನು ನಿಭಾಯಿಸಿಕೊಳ್ಳುತ್ತಾರೆ ಎಂದು ಕುಮಾರಸ್ವಾಮಿ ಸ್ಪಷ್ಟಣೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News