ಎಐಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಪ್ರಧಾನಿ ಮೋದಿ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ: ಪರಮೇಶ್ವರ್ ತಿರುಗೇಟು

Update: 2018-11-17 12:55 GMT

ಹುಬ್ಬಳ್ಳಿ, ನ.17: ರೈತರ ಸಾಲ ಮನ್ನಾ ಯೋಜನೆಯಡಿ ರಾಷ್ಟ್ರೀಕೃತ ಬ್ಯಾಂಕುಗಳಿಗೆ 1200 ಕೋಟಿ ರೂ.ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದು, ಕಾರಣಾಂತರಗಳಿಂದ ಸಾಲ ಪ್ರಕ್ರಿಯೆ ಮಂದಗತಿಯಲ್ಲಿ ಸಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಸಾಲ ಮನ್ನಾ ಯೋಜನೆಯು ರಾಜ್ಯ ಸಮ್ಮಿಶ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಸಾಲ ಸುಳಿಯಲ್ಲಿ ಸಿಲುಕಿರುವ ರೈತರನ್ನು ಸಂಕಷ್ಟದಿಂದ ಪಾರು ಮಾಡಲು ಈ ಯೋಜನೆಯನ್ನು ಘೋಷಿಸಲಾಗಿದೆ ಎಂದರು.

ಆ್ಯಂಬಿಡೆಂಟ್ ವಂಚನೆ ಪ್ರಕರಣದ ಕುರಿತು ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿಯವರ ಪಾತ್ರ ಇರುವ ಕುರಿತು ಕೇಳಿ ಬಂದಿರುವ ಆರೋಪಕ್ಕೆ ಸಂಬಂಧಿಸಿದಂತೆಯೂ ತನಿಖೆ ನಡೆಸಲಾಗುತ್ತಿದೆ. ರಾಜ್ಯ ಸರಕಾರವು ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ ಎಂದು ಅವರು ಸ್ಪಷ್ಟಣೆ ನೀಡಿದರು.

ರಾಜ್ಯದಲ್ಲಿ ನೇರವಾಗಿ ಸಿಬಿಐ ತನಿಖೆ ನಡೆಸಲು ಅವಕಾಶವಿಲ್ಲ. ಆದುದರಿಂದ, ನಮ್ಮ ರಾಜ್ಯದಲ್ಲಿ ಆಂಧ್ರಪ್ರದೇಶದ ಮಾದರಿಯಲ್ಲಿ ಸಿಬಿಐ ಮೇಲೆ ನಿರ್ಬಂಧ ಹೇರುವ ಯಾವುದೇ ಪರಿಸ್ಥಿತಿ ನಿರ್ಮಾಣವಾಗಿಲ್ಲ ಎಂದು ಪರಮೇಶ್ವರ್ ಹೇಳಿದರು.

ಕಾಂಗ್ರೆಸ್ ಪಕ್ಷಕ್ಕೆ ಗಾಂಧಿ ಕುಟುಂಬದವರನ್ನು ಹೊರತುಪಡಿಸಿ ಬೇರೆ ಯಾರನ್ನಾದರೂ ಅಧ್ಯಕ್ಷರನ್ನಾಗಿ ಮಾಡಿ ಎಂದು ಪ್ರಧಾನಿ ನರೇಂದ್ರಮೋದಿ ಹಾಕಿರುವ ಸವಾಲಿನ ಕುರಿತು ಪ್ರತಿಕ್ರಿಯಿಸಿದ ಅವರು, ಎಐಸಿಸಿ ಅಧ್ಯಕ್ಷರು ಯಾರಾಗಬೇಕು ಎಂಬುದು ನಮ್ಮ ಪಕ್ಷಕ್ಕೆ ಸಂಬಂಧಿಸಿದ ವಿಷಯ. ಈ ವಿಚಾರದಲ್ಲಿ ಪ್ರಧಾನಿ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದರು.

ಒಂದೇ ಗುಂಪಿನ ಕೈವಾಡ

ಹಿರಿಯ ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಗಳು ಲಭ್ಯವಾಗಿದ್ದು, ಕಲಬುರ್ಗಿ, ಪನ್ಸಾರೆ, ದಾಭೋಲ್ಕರ್, ಗೌರಿ ಲಂಕೇಶ್ ಹತ್ಯೆಯಲ್ಲಿ ಒಂದೇ ಗುಂಪಿನ ಕೈವಾಡವಿರುವ ಮಾಹಿತಿಯೂ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ.

-ಡಾ.ಜಿ.ಪರಮೇಶ್ವರ್, ಗೃಹ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News