ಮೈತ್ರಿ ಪಕ್ಷ 28 ಲೋಕಾಸಭಾ ಕ್ಷೇತ್ರ ಗೆದ್ದರೂ ಅಚ್ಚರಿ ಇಲ್ಲ: ಸಂಸದ ವಿ.ಎಸ್.ಉಗ್ರಪ್ಪ

Update: 2018-11-17 13:46 GMT

ಬೆಂಗಳೂರು, ನ.17: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈತ್ರಿಪಕ್ಷಗಳು ಗಣನೀಯ ಸಾಧನೆ ಮಾಡಲಿದ್ದು, ರಾಜ್ಯದ ಎಲ್ಲ 28 ಕ್ಷೇತ್ರಗಳನ್ನು ಮೈತ್ರಿ ಪಕ್ಷ ಗೆದ್ದರೂ ಅಚ್ಚರಿ ಇಲ್ಲ ಎಂದು ಸಂಸದ ವಿ.ಎಸ್.ಉಗ್ರಪ್ಪ ಭವಿಷ್ಯ ನುಡಿದಿದ್ದಾರೆ.

ಶನಿವಾರ ವಿಧಾನಸೌಧದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜು ಹೊರಟ್ಟಿ ಅವರಿಗೆ ತಮ್ಮ ಪರಿಷತ್ ಸದಸ್ಯತ್ವದ ರಾಜೀನಾಮೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಇತ್ತೀಚಿಗೆ ನಡೆದ ಉಪಚುನಾವಣೆ ಫಲಿತಾಂಶವೇ ಲೋಕಾಸಭಾ ಚುನಾವಣೆಗೆ ದಿಕ್ಸೂಚಿ ಎಂದು ನುಡಿದರು.

ಕೇಂದ್ರ ಸರಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಇದಕ್ಕೆ ರಫೇಲ್ ಯುದ್ಧ ವಿಮಾನಗಳ ಖರೀದಿಯೇ ಸಾಕ್ಷಿಯಾಗಿದ್ದು, ಈ ಹಗರಣದಲ್ಲಿ ಸುಮಾರು 39 ಸಾವಿರ ಕೋಟಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಿದ ಅವರು, ಕಪ್ಪುಹಣ ತಂದು ಬಡವರ ಖಾತೆಗೆ ಹಾಕುವುದಾಗಿ ಸೇರಿದಂತೆ ಹಲವು ಭರವಸೆಗಳನ್ನು ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಯಾವುದನ್ನೂ ಈಡೇರಿಸಿಲ್ಲ ಎಂದರು.

ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಇಡಿ ನೋಟಿಸ್ ಜಾರಿ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಉಗ್ರಪ್ಪ, ಇಡಿ ನೋಟಿಸ್ ನೀಡಿರುವುದಕ್ಕೆ ಡಿ.ಕೆ. ಶಿವಕುಮಾರ್ ಉತ್ತರಿಸುತ್ತಾರೆ. ಅದರಲ್ಲಿ ಅವರೂ ಸಮರ್ಥರಿದ್ದಾರೆ. ಎಲ್ಲವನ್ನೂ ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ ಎಂದು ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News