ಶಬರಿಮಲೆ ದೇವಾಲಯ: ಸುಪ್ರೀಂ ಮೆಟ್ಟಿಲೇರಲಿರುವ ಟಿಡಿಬಿ

Update: 2018-11-17 16:20 GMT

ತಿರುವನಂತಪುರ, ನ. 17: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಋತುಚಕ್ರ ವಯೋಮಾನದ ಮಹಿಳೆಯರು ಭೇಟಿ ನೀಡಲು ಅವಕಾಶ ನೀಡಿದ ತೀರ್ಪನ್ನು ಅನುಷ್ಠಾನಗೊಳಿಸಲು ಇನ್ನಷ್ಟು ಸಮಯಾವಕಾಶ ಬೇಕು ಎಂದು ಕೋರಿ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಮಾಡಲಿದೆ.

ಆಡಳಿತಾರೂಡ ಎಲ್‌ಡಿಎಫ್ ನೇತೃತ್ವದ ಸರಕಾರ ಸುಪ್ರೀಂ ಕೋರ್ಟ್‌ನ ತೀರ್ಪು ಅನುಷ್ಠಾನಕ್ಕೆ ಬದ್ದವಾಗಿರುವುದು ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ಸಮಯಾವಕಾಶ ಕೋರುವ ಪ್ರತಿಪಕ್ಷಗಳ ಸಲಹೆಯನ್ನು ನಿರಾಕರಿಸಿದ ಬಳಿಕ ಟಿಡಿಬಿ ಈ ನಿರ್ಧಾರ ತೆಗೆದುಕೊಂಡಿದೆ. ಶಬರಿಮಲೆಯಲ್ಲಿ ವಿಶ್ವಹಿಂದೂ ಪರಿಷತ್ ನಾಯಕಿ ಕೆ.ಪಿ. ಶಶಿಕಲಾ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಸಂಘಪರಿವಾರ ಅನಿರೀಕ್ಷಿತ ಬಂದ್‌ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಶನಿವಾರ ಕೇರಳದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಈ ಪೂಜಾ ಅವಧಿಯಲ್ಲಿ ಲಕ್ಷಾಂತರ ಜನರು ಆಗಮಿಸುವ ಹಿನ್ನೆಲೆಯಲ್ಲಿ ಶಬರಿಮಲೆ ದೇವಾಲಯ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಹಿಂಸಾಚಾರಗಳು ನಡೆದ ಬಗ್ಗೆ ವರದಿಯಾಗಿದೆ. ಕೆಲವೆಡೆ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಕಲ್ಲೆಸೆಯಲಾಗಿದೆ. ಹಿಂಸಾಚಾರದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ರದ್ದುಪಡಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News