ಬಿಜೆಪಿಗೆ ರೈತರ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ: ಡಾ.ಜಿ.ಪರಮೇಶ್ವರ್

Update: 2018-11-19 13:21 GMT

ಬೆಂಗಳೂರು, ನ.19: ನಮ್ಮ ಮೈತ್ರಿ ಸರಕಾರದ ಬಗ್ಗೆ ಹಗುರವಾಗಿ ಹಾಗೂ ರೈತರ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಸರಕಾರ 49 ಸಾವಿರ ಕೋಟಿ ರೂ. ರೈತರ ಸಾಲಮನ್ನಾ ಮಾಡುತ್ತಿದೆ. ಪ್ರಧಾನಿ ಮೋದಿ ರೈತರ ಸಾಲಮನ್ನಾ ಮಾಡಲು ಹಿಂದೇಟು ಹಾಕಿದರು. ಇವರ ಪಕ್ಷಕ್ಕೆ ರೈತರ ಬಗ್ಗೆ ಮಾತನಾಡುವ ಅಧಿಕಾರವಿಲ್ಲ. ಕಾಂಗ್ರೆಸ್ ಪಕ್ಷ ರೈತರಿಗೆ ನೀಡಿರುವ ಕಾರ್ಯಕ್ರಮಗಳನ್ನು ಸಹಿಸಲಾಗದೇ ನಮ್ಮ ವಿರುದ್ಧ ರೈತರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ರೈತರ ಬಗ್ಗೆ ಹಗುರವಾಗಿ ಮಾತನಾಡಿಲ್ಲ ಎಂದು ತಿಳಿಸಿದರು.

ಕಬ್ಬು ಬೆಳೆಗಾರರ ಹಣ ಪಾವತಿ ವಿಚಾರವಾಗಿ ಮುಖ್ಯಮಂತ್ರಿ ನಾಳೆ(ನ.20) ರೈತರ ಸಭೆ ಕರೆದಿದ್ದಾರೆ. ಈ ವೇಳೆ ಹಣ ಪಾವತಿಸದ ಸಕ್ಕರೆ ಕಾರ್ಖಾನೆಗಳ ವಿರುದ್ಧ ಕ್ರಮ ಕೈಗೊಳ್ಳಲಿದ್ದಾರೆ. ಇಂದು ರೈತರ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾನೂನು ಚೌಕಟ್ಟಿನಲ್ಲಿ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ ಎಂದರು. ಆ್ಯಂಬಿಡೆಂಟ್ ಪ್ರಕರಣ ತನಿಖೆ ಹಂತದಲ್ಲಿದೆ. ಆರೋಪಿಗಳ ಪಟ್ಟಿ ಹೆಚ್ಚುತ್ತಿರುವುದರಿಂದ ತನಿಖೆ ಮುಗಿಯುವವರೆಗೂ ಏನೂ ಹೇಳಲು ಸಾಧ್ಯವಿಲ್ಲ. ಈ ಪ್ರಕರಣವನ್ನು ಸಿಸಿಬಿ ಪೊಲೀಸರು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಸಿಐಡಿಗೆ ವಹಿಸುವ ಸಂದರ್ಭ ಬಂದಾಗ ನೋಡೋಣ ಎಂದು ಪ್ರತಿಕ್ರಿಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News