ಮಮತಾ ಬ್ಯಾನರ್ಜಿಯನ್ನು ಭೇಟಿಯಾದ ಚಂದ್ರಬಾಬು ನಾಯ್ಡು

Update: 2018-11-19 12:43 GMT

 ಕೋಲ್ಕತಾ, ನ.19: ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸೋಮವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿ ನ.22 ರಂದು ದಿಲ್ಲಿಯಲ್ಲಿ ನಡೆಯುವ ವಿಪಕ್ಷ ನಾಯಕರ ಸಭೆಗೆ ಆಹ್ವಾನ ನೀಡಿದ್ದಾರೆ.

ನ.22ರ ಸಭೆಯಲ್ಲಿ ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಪ್ರತಿಸ್ಪರ್ಧಿಯಾಗಿ ಮಹಾ ಮೈತ್ರಿಕೂಟ ರಚಿಸುವ ಸಂಬಂಧ ಚರ್ಚೆ ನಡೆಯಲಿದೆ.

ನಾಯ್ಡು ಅವರು ಮಧ್ಯಾಹ್ನ ಹೌರಾದಲ್ಲಿರುವ ರಾಜ್ಯ ಸಚಿವಾಲಯದಲ್ಲಿ ಬ್ಯಾನರ್ಜಿ ಅವರನ್ನು ಭೇಟಿಯಾದರು.

ನಾಯ್ಡು ಈಗಾಗಲೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ದೇವೇಗೌಡ, ಕರ್ನಾಟಕದ ಮುಖ್ಯಮಂತ್ರಿ ಕುಮಾರಸ್ವಾಮಿ, ಬಿಎಸ್ಪಿ ನಾಯಕಿ ಮಾಯಾವತಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಮುಲಾಯಂ ಸಿಂಗ್ ಯಾದವ್, ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ನ್ಯಾಶನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ, ಡಿಎಂಕೆ ಮುಖಂಡ ಎಂಕೆ ಸ್ಟಾಲಿನ್, ಸಿಪಿಐ ಹಾಗೂ ಸಿಪಿಎಂ ನಾಯಕರುಗಳನ್ನು ಭೇಟಿಯಾಗಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News