ಮಾಜಿ ಪ್ರಧಾನಿ ಇಂದಿರಾ ಬಲಿಷ್ಠ ನಾಯಕಿ: ರಾಮಲಿಂಗಾ ರೆಡ್ಡಿ

Update: 2018-11-19 15:59 GMT

ಬೆಂಗಳೂರು, ನ.19: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ರಾಷ್ಟ್ರ ಕಂಡ ಬಲಿಷ್ಠ ನಾಯಕಿಯಾಗಿದ್ದು, ಅವರನ್ನು ನಿಂದಿಸುವ ಕೆಲಸವನ್ನು ಬಿಜೆಪಿ ನಾಯಕರು ಮಾಡಬಾರದು ಎಂದು ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ 101ನೆ ಹುಟ್ಟುಹಬ್ಬದ ಅಂಗವಾಗಿ ಬೆಂಗಳೂರು ಜಿಲ್ಲಾ ಕೇಂದ್ರ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಸೋಮವಾರ ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಬಡ ಮಹಿಳೆಯರಿಗೆ ಸೀರೆ ವಿತರಿಸಿ ಅವರು ಮಾತನಾಡಿದರು.

ಇಂದಿರಾಗಾಂಧಿ ಗರೀಬಿ ಹಠಾವೋ 20 ಅಂಶಗಳ ಕಾರ್ಯಕ್ರಮ, ಬ್ಯಾಂಕ್‌ಗಳ ರಾಷ್ಟ್ರೀಕರಣ ಸೇರಿದಂತೆ ಮಹತ್ವದ ನಿರ್ಧಾರಗಳನ್ನು ಕೈಗೊಂಡು 15 ವರ್ಷಗಳ ಕಾಲ ಪ್ರಧಾನಿಯಾಗಿ ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ, ಇಂದಿರಾ ಕುಟುಂಬದವರ ಬಗ್ಗೆ ಮಾತ್ರ ಮಾತನಾಡುತ್ತಾರೆ, ಅಭಿವೃದ್ಧಿಯ ಬಗ್ಗೆ, ತಾವು ಮಾಡಿರುವ ಸಾಧನೆ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದರು.

ರಾಜ್ಯ ಸರಕಾರ ರೈತರ 49 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಿದೆ. ಆದರೆ. ಕೇಂದ್ರ ಸರಕಾರ ದೊಡ್ಡ ದೊಡ್ಡ ಉದ್ಯಮಿಗಳ ಲಕ್ಷಾಂತರ ಕೋಟಿ ರೂ. ಸಾಲ ಮನ್ನಾ ಮಾಡಿದೆ. ಕೇಂದ್ರ ಸರಕಾರ ಕೇವಲ ಸುಳ್ಳು ಆಶ್ವಾಸನೆಗಳನ್ನು ನೀಡುತ್ತಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಎಸ್.ಮನೋಹರ್, ಜಿಲ್ಲಾ ಕೇಂದ್ರ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಜನಾರ್ಧನ್, ಪಿ.ಶಿವಕುಮಾರ್, ಸಲೀಂ, ಶೇಖರ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News