ಶಬರಿಮಲೆ ವಿವಾದ: ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ

Update: 2018-11-20 11:59 GMT

ಮಡಿಕೇರಿ, ನ.20: ಶಬರಿಮಲೆಯ ಶ್ರೀಅಯ್ಯಪ್ಪ ಸನ್ನಿಧಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ಸೃಷ್ಟಿಯಾಗಿರುವ ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ಕೇರಳ ಸರಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಾರ್ಟಿಯ ಕೊಡಗು ಜಿಲ್ಲಾ ಸಮಿತಿ ಹಾಗೂ ಹಿಂದೂ ಪರ ಸಂಘಟನೆಗಳ ಪ್ರಮುಖರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಕೇರಳ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಬಿ.ಭಾರತೀಶ್ , ಶಬರಿಮಲೆ ಕ್ಷೇತ್ರದ ಪ್ರವೇಶಕ್ಕೆ ಸಂಬಂಧಿಸಿದಂತೆ ಉದ್ಭವಿಸಿರುವ ಸಮಸ್ಯೆಯನ್ನು ಬಗೆಹರಿಸುವ ಬದಲು ಅಲ್ಲಿನ ಕಮ್ಯುನಿಸ್ಟ್ ಸರಕಾರ ಅಯ್ಯಪ್ಪ ಭಕ್ತರ ಮೇಲೆ ದೌರ್ಜನ್ಯವೆಸಗುತ್ತಿದೆ ಎಂದು ಆರೋಪಿಸಿದರು. ವ್ಯವಸ್ಥಿತ ಷಡ್ಯಂತ್ರದ ಮೂಲಕ ಹಿಂದೂಗಳ ಭಾವನೆಗೆ ದಕ್ಕೆ ತರಲಾಗುತ್ತಿದ್ದು, ಇದನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದರು. ಶಬರಿಮಲೆಯ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಬಿಜೆಪಿ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.

ವಿವಾದದ ಕುರಿತು ರಾಷ್ಟ್ರಪತಿಗಳಿಗೆ ಪತ್ರ ಬರೆಯಲಾಗಿದ್ದು, ಅಯ್ಯಪ್ಪ ದೇವಾಲಯದ ಧಾರ್ಮಿಕ ಆಚಾರ, ವಿಚಾರ ಸಂಸ್ಕೃತಿಗೆ ದಕ್ಕೆಯಾದರೆ ಅದಕ್ಕೆ ಕೇರಳದ ಮುಖ್ಯಮಂತ್ರಿಯೇ ನೇರ ಹೊಣೆ ಎಂದು ಎಚ್ಚರಿಕೆ ನೀಡಿದರು. 

ವಿಶ್ವ ಹಿಂದೂ ಪರಿಷತ್‍ನ ಜಿಲ್ಲಾ ಕಾರ್ಯದರ್ಶಿ ಡಿ.ನರಸಿಂಹ ಮಾತನಾಡಿ, ಶತ ಶತಮಾನಗಳಿಂದಲೂ ಹಿಂದೂ ಧರ್ಮದಲ್ಲಿ ಧಾರ್ಮಿಕ ನಂಬಿಕೆಗಳನ್ನು ಪಾಲಿಸುತ್ತಾ ಬರಲಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಹಿಂದೂಗಳ ಭಾವನೆಗೆ ವಿರುದ್ಧವಾದ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ಹಿಂದೂ ವಿರೋಧಿ ನೀತಿ ಮುಂದುವರೆದರೆ ಕೇರಳದಲ್ಲಿ ಜನಾಂದೋಲನ ನಡೆಸಲು ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು.  

ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಬಿನ್ ದೇವಯ್ಯ, ಪ್ರಮುಖರಾದ ರವಿ ಬಸಪ್ಪ, ಮಣಿ ಉತ್ತಪ್ಪ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಯಮುನಾ ಚಂಗಪ್ಪ, ಜಿ.ಪಂ.ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿ.ಪಂ.ಸದಸ್ಯ ಮುರಳಿ, ಬಿಜೆಪಿ ನಗರಾಧ್ಯಕ್ಷ ಮಹೇಶ್ ಜೈನಿ, ನಗರಸಭಾ ಸದಸ್ಯರಾದ ಕೆ.ಎಸ್.ರಮೇಶ್, ಉನ್ನಿಕೃಷ್ಣ, ಅನಿತಾ ಪೂವಯ್ಯ, ಪಿ.ಡಿ.ಪೊನ್ನಪ್ಪ, ಹಿಂದೂಪರ ಸಂಘಟನೆಗಳ ಪ್ರಮುಖರಾದ ಚೇತನ್, ಕುಕ್ಕೇರ ಅಜಿತ್, ಮತ್ತಿತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News