ರೈತರನ್ನು ಅವಮಾನಿಸಿದ ಎಚ್‌ಡಿಕೆ ಅಧಿಕಾರದಿಂದ ಕೆಳಗಿಳಿಯುವವರೆಗೂ ಹೋರಾಟ ನಿಲ್ಲದು: ಯಡಿಯೂರಪ್ಪ

Update: 2018-11-21 12:44 GMT

ಬೆಂಗಳೂರು, ನ.21: ತಾವು ಬೆಳೆದ ಬೆಳೆಗೆ ಬೆಂಬಲ ಬೆಲೆ, ಉಳಿದ ಕಬ್ಬಿನ ಬಾಕಿ ಪಾವತಿಸುವುದು ಸೇರಿ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಶಾಂತಿಯುತ ಹೋರಾಟ ನಡೆಸಿದರೆ ಅವರನ್ನೇ ಗೂಂಡಾಗಳು, ದರೋಡೆಕೋರರು ಎಂದು ಕರೆದಿರುವ ಎಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಹುದ್ದೆಯಲ್ಲಿ ಮುಂದುವರೆಯಲು ಯಾವುದೇ ನೈತಿಕ ಹಕ್ಕಿಲ್ಲ. ಬಿಜೆಪಿ ಪಕ್ಷವು ಕುಮಾರಸ್ವಾಮಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ನಿರಂತರ ಹೋರಾಟ ನಡೆಸಲಿದೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬುಧವಾರ ಮೈಸೂರು ಬ್ಯಾಂಕ್ ವೃತ್ತದಲ್ಲಿ ರೈತರ ಬೇಡಿಕೆಗಳನ್ನು ಈಡೇರಿಸದೇ ಚಳವಳಿಗಾರರನ್ನು ಅವಮಾನಿಸಿದ ಮುಖ್ಯಮಂತ್ರಿಯವರ ಧೋರಣೆ ಖಂಡಿಸಲು ಹಾಗೂ ರೈತರ ನ್ಯಾಯಯುತ ಹೋರಾಟಕ್ಕೆ ಬೆಂಬಲವಾಗಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇವಲ 38 ಶಾಸಕರನ್ನು ಇಟ್ಟುಕೊಂಡು ಕಾಂಗ್ರೆಸ್ ಬೆಂಬಲ ಪಡೆದು ದುರಹಂಕಾರದಿಂದ ಅಧಿಕಾರ ನಡೆಸುತ್ತಿರುವ ಸಿಎಂ ಕುಮಾರಸ್ವಾಮಿ ಅವರು ತಾವಾಗಿಯೇ ರಾಜೀನಾಮೆ ನೀಡುವವರೆಗೂ ಬಿಜೆಪಿ ರಾಜ್ಯದಾದ್ಯಂತ ನಿರಂತರ ಹೋರಾಟ ನಡೆಸಲಿದೆ ಎಂದು ಅವರು ಎಚ್ಚರಿಕೆ ನೀಡಿದರು.

ರೈತ ಮಹಿಳೆಯನ್ನು ಎಲ್ಲಿ ಮಲಗಿದ್ದೆ ಎಂದು ಅಪಮಾನಗೊಳಿಸಿರುವ ಮುಖ್ಯಮಂತ್ರಿ ಕುಮಾರ ಸ್ವಾಮಿ ವಿರುದ್ಧ ರಾಜ್ಯದಾದ್ಯಂತ ಪ್ರತಿದಿನ ಹೋರಾಟ, ಪ್ರತಿಭಟನೆಗಳನ್ನು ನಡೆಸುವಂತೆ ಮಹಿಳಾ ಬಿಜೆಪಿ ಕಾರ್ಯಕರ್ತೆಯರಿಗೆ ಕರೆ ನೀಡಿದರು. ಕಬ್ಬು ಬೆಳೆಗೆ ಬೆಂಬಲ ಬೆಲೆ ನಿಗದಿ ಪಡಿಸುವಲ್ಲಿ ನಿರ್ಲಕ್ಷ್ಯ, ರೈತರ ಸಾಲಮನ್ನಾ ಮಾಡುವಲ್ಲಿ ಎಡವಿರುವ ಸರಕಾರದ ವಿರುದ್ಧ ಡಿ. 10 ರಂದು 1 ಲಕ್ಷಕ್ಕೂ ಹೆಚ್ಚು ರೈತರನ್ನು ಬೆಳಗಾವಿಯ ಸುವರ್ಣ ಸೌಧದ ಮುಂದೆ ಸಮಾವೇಶಗೊಳಿಸಿ, ಹೋರಾಟ ನಡೆಸುವುದಾಗಿ ತಿಳಿಸಿದರು.

ಆರು ತಿಂಗಳು ಕಳೆದರೂ ಸರಕಾರ ರೈತರ ಸಾಲವನ್ನು ಮನ್ನಾ ಮಾಡಲಿಲ್ಲ. ಕಬ್ಬು ಬೆಳೆಗಾರರಿಗೆ ನ್ಯಾಯೋಚಿತ ಬೆಲೆ ಪ್ರಕಟಿಸಿಲ್ಲ. ವಿಧಾನಸೌಧದಲ್ಲಿ ರಾಜಕೀಯ ದೊಂಬರಾಟ ನಡೆಸಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು.

ಬಿಜೆಪಿ ಮುಖಂಡ ಆರ್. ಅಶೋಕ್ ಮಾತನಾಡಿ, ರೈತರನ್ನು ಗೂಂಡಾಗಳು, ದರೋಡೆಕೋರರು ಎಂದು ಅವಹೇಳನ ಮಾಡಿರುವ ನಿಮ್ಮ ಮಾತುಗಳು ಇತಿಹಾಸದಲ್ಲಿ ನಿಮ್ಮ ಕುಟುಂಬಕ್ಕೆ ಕಪ್ಪುಚುಕ್ಕೆಯಾಗಿ ಪರಿಣಮಿಸಲಿದೆ ಎಂದು ಹೇಳಿದರು.

38 ಸ್ಥಾನಗಳನ್ನು ಗೆದ್ದಿರುವ ನೀವು ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುವ ಶಕ್ತಿಯನ್ನೂ ಹೊಂದಿಲ್ಲ. ಆದರೆ, ಹಿಂಬಾಗಿಲಿನಿಂದ ಅಧಿಕಾರ ಹಿಡಿದಿದ್ದಾರೆಂದು ಹೇಳಿದರು. ರೈತರಲ್ಲಿ ಆತ್ಮಸ್ಥೈರ್ಯ ತುಂಬದೇ ಅವರನ್ನು ಅಪಮಾನಗೊಳಿಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅಧಿಕಾರದಲ್ಲಿ ಮುಂದುವರೆಯಲು ನೈತಿಕ ಹಕ್ಕು ಇಲ್ಲ ಎಂದು ಗುಡುಗಿದರು.

ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಮಾತನಾಡಿ, ಖಾಸಗಿ ಹೊಟೇಲ್‌ನಲ್ಲಿ ಕುಳಿತು ಸರಕಾರದ ನಿರ್ಧಾರಗಳನ್ನು ಕೈಗೊಳ್ಳುವುದೇ ಆದಲ್ಲಿ ನಿಮಗೆ ವಿಧಾನಸೌಧ ಏಕೆ ಬೇಕು ಎಂದು ಪ್ರಶ್ನಿಸಿದ ಅವರು, ಖಾಸಗಿತನ ಬೇಕಾದಲ್ಲಿ ನೀವು ಮುಖ್ಯಮಂತ್ರಿಯಾಗಿ ಏಕೆ ಇದ್ದೀರಿ ಎಂದು ಪ್ರಶ್ನಿಸಿದರು.

ಬಿಎಸ್‌ವೈ ಅವರನ್ನು ಪಾಳೆಗಾರರು ಎಂದು ಕರೆಯುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಇತಿಹಾಸವನ್ನು ಒಮ್ಮೆ ನೆನಪು ಮಾಡಿಕೊಳ್ಳಬೇಕು. ಅಲ್ಲದೆ, ತುರ್ತುಪರಿಸ್ಥಿತಿ ಸಂದರ್ಭದಲ್ಲಿ ಇಂದಿರಾಗಾಂಧಿ ವಿರುದ್ಧ ಹೋರಾಟ ನಡೆಸಿ, ಜೈಲು ವಾಸ ಅನುಭವಿಸಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ತತ್ವ ಸಿದ್ಧಾಂತಗಳನ್ನು ಮರೆತು ತಮ್ಮ ಪಕ್ಷದ ಕಚೇರಿಗೆ ಜೆಪಿ ಭವನ ಎಂದು ಹೆಸರಿಟ್ಟಿದ್ದಾರೆ ಎಂದು ವ್ಯಂಗ್ಯವಾಡಿದರು.

ಪ್ರತಿಭಟನೆಯಲ್ಲಿ ಸಂಸದ ಪಿ.ಸಿ.ಮೋಹನ್, ಶಾಸಕರಾದ ಡಾ.ಅಶ್ವತ್‌ ನಾರಾಯಣ್, ಗರುಡಾಚಾರ್, ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News