ಮುಖ್ಯಮಂತ್ರಿ ವಿರುದ್ಧ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು

Update: 2018-11-21 17:08 GMT

ಬೆಂಗಳೂರು, ನ.21: ಮುಖ್ಯಮಂತ್ರಿ ಕುಮಾರಸ್ವಾಮಿ ಇತ್ತೀಚಿಗೆ ನಡೆದ ಕಾರ್ಯಕ್ರಮದಲ್ಲಿ ಮಹಿಳೆಯನ್ನು ಅವಮಾನಕರವಾಗಿ ಸಂಬೋಧಿಸಿದ್ದಾರೆಂದು ಆರೋಪಿಸಿ ಕರ್ನಾಟಕ ಕಾರ್ಮಿಕ ಕಲ್ಯಾಣ ಪ್ರತಿಷ್ಠಾನದ ಅಧ್ಯಕ್ಷ ಮಲ್ಲಿಕಾರ್ಜುನ್ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ಸಲ್ಲಿಸಿದ್ದಾರೆ.

ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮುಖ್ಯಮಂತ್ರಿ ವಿರುದ್ಧವಾಗಿ ಆನ್‌ಲೈನ್ ಮೂಲಕ ಪೊಲೀಸ್ ಮಹಾ ನಿರ್ದೇಶಕರು, ಕರ್ನಾಟಕ ಮಹಿಳಾ ಆಯೋಗ ಹಾಗೂ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಲಾಗಿದ್ದು, ಕೂಡಲೇ ಸಿಎಂ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದವರೊಂದಿಗೆ ಸಭೆ ನಡೆಸುವುದಾಗಿ ಭರವಸೆ ನೀಡಿ, ಭೇಟಿ ನೀಡಿಲ್ಲದಿದ್ದರಿಂದ ಅಲ್ಲಿನ ರೈತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ರೈತ ಮಹಿಳೆಯ ಬಗ್ಗೆ ಅಪಮಾನಕರವಾಗಿ ನಿಂದಿಸಿದ್ದಾರೆ. ಇದರಿಂದ ರೈತರಿಗೆ ಅವಮಾನವಾಗಿದೆ ಎಂದರು.

ಮಾನವ ಹಕ್ಕುಗಳ ಪ್ರಕಾರ ಮನುಷ್ಯರು ಹುಟ್ಟಿನಿಂದಲೂ ಸ್ವತಂತ್ರರು. ಅವರನ್ನು ನೋಯಿಸುವ ಅಥವಾ ಹಿಂಸಿಸುವ ಹಕ್ಕು ಯಾರಿಗೂ ಇಲ್ಲ. ಹೀಗಿರುವಾಗ ರೈತ ಮಹಿಳೆಯ ಘನತೆ-ಗೌರವಕ್ಕೆ ಧಕ್ಕೆ ಉಂಟಾಗುವ ರೀತಿಯಲ್ಲಿ ಮಾತನಾಡಿದ್ದಾರೆ. ರಾಜ್ಯವನ್ನು ಮುನ್ನಡೆಸುವ ಸ್ಥಾನದಲ್ಲಿರುವ ಕುಮಾರಸ್ವಾಮಿ ಎಲ್ಲರನ್ನೂ ಒಂದೇ ರೀತಿಯಲ್ಲಿ ಕಾಣಬೇಕು. ಎಲ್ಲರ ಸಮಸ್ಯೆಗಳನ್ನು ಈಡೇರಿಸಬೇಕು. ಈ ರೀತಿ ಮಾತನಾಡುವುದು ಸರಿಯಲ. ಹೀಗಾಗಿ, ಕೂಡಲೇ ನಮ್ಮ ಮನವಿಯನ್ನು ಪರಿಗಣಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News