ಕೆಪಿಎಸ್ಸಿ ನೇಮಕಾತಿ: 1995ರ ಮೀಸಲಾತಿ ಆದೇಶ ಪಾಲಿಸಲು ಸಚಿವ ಪುಟ್ಟರಂಗ ಶೆಟ್ಟಿ ಒತ್ತಾಯ

Update: 2018-11-23 14:09 GMT

ಬೆಂಗಳೂರು, ನ. 23: ಕೆಪಿಎಸ್ಸಿ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ 1995ರ ಜೂನ್ 20ರ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶದಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿರುವ ಮೀಸಲಾತಿ ವಿಧಾನವನ್ನು ಅನುಸರಿಸಬೇಕು ಎಂದು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಪುಟ್ಟರಂಗ ಶೆಟ್ಟಿ ಹೇಳಿದ್ದಾರೆ.

23 ವರ್ಷಗಳಿಂದಲೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ಅದೇ ನಿಯಮ ಅನುಸರಿಸಲಾಗುತ್ತದೆ. ಆದರೆ ಹೈಕೋರ್ಟ್ ರಿಟ್ ಅರ್ಜಿ ಸಂಖ್ಯೆ 27674/2012ರಲ್ಲಿ ಹೊರಡಿಸಿರುವ ತೀರ್ಪಿನಲ್ಲಿ ಮಾರ್ಗಸೂಚಿಯನ್ನು ನಿಗದಿಪಡಿಸಲಾಗಿದೆ. ಅಲ್ಲದೆ, ಅದನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕೆಂದು ಕೆಪಿಎಸ್ಸಿ ಕಾರ್ಯದರ್ಶಿಗೆ ಸೂಚಿಸಲಾಗಿದೆ.

ಮೇಲ್ಕಂಡ ರಿಟ್ ಅರ್ಜಿಯಲ್ಲಿ ಅನುಸರಿಸಲು ಸೂಚಿಸಿರುವ ಮಾರ್ಗಸೂಚಿಯು ಆ ರಿಟ್ ಅರ್ಜಿಯಲ್ಲಿ ಇರುವಂತಹ ಪ್ರಕರಣಕ್ಕೆ ಮಾತ್ರವೇ ಸಂಬಂಧಿಸಿದ್ದಾಗಿರುತ್ತದೆ. ಮೇಲಾಗಿ ಆ ತೀರ್ಪಿನ ವಿರುದ್ಧ ಸರಕಾರವು ಮರುಪರಿಶೀಲನಾ ಅರ್ಜಿಯನ್ನು ದಾಖಲಿಸಿರುತ್ತದೆ. ಆದರೂ, ನಿರ್ದೇಶನ ನೀಡಿರುವುದು ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತದೆ. ಆದುದರಿಂದ ಇದನ್ನು ತಾನು ತೀವ್ರ ವಿರೋಧಿಸುತ್ತೇನೆ ಎಂದು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಪುಟ್ಟರಂಗ ಶೆಟ್ಟಿ ತಿಳಿಸಿದ್ದಾರೆ.

ಈ ತೀರ್ಪಿನಲ್ಲಿ ನೀಡಿರುವ ಮಾರ್ಗಸೂಚಿಯನ್ನು ಅನುಸರಿಸುವುದರಿಂದ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ ಮತ್ತು ಇತರೆ ಹಿಂದುಳಿದ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳು ಸಾಮಾನ್ಯ ವರ್ಗದ ಕೋಟಾದ ಅಡಿಯಲ್ಲಿ ವಿವಿಧ ಹುದ್ದೆಗಳನ್ನು ಪಡೆಯುವ ಅವಕಾಶದಿಂದ ವಂಚಿತರಾಗುತ್ತಾರೆ ಎಂದು ಪುಟ್ಟರಂಗಶೆಟ್ಟಿ ಹೇಳಿದ್ದಾರೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೊಂದಿಗೆ ಹಾಗೂ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿ, ಎಸ್ಸಿ-ಎಸ್ಟಿ, ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗದಂತೆ ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪುಟ್ಟರಂಗ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News